×
Ad

ಅಕ್ರಮ ಗಣಿಗಾರಿಕೆ ಪ್ರಕರಣ: ಐಎಎಸ್ ಅಧಿಕಾರಿ ಗಂಗಾರಾಮ್ ಬಡೇರಿಯಾ ಬಂಧನ

Update: 2017-05-15 19:14 IST

ಬೆಂಗಳೂರು, ಮೇ 15: ಜಂತಕಲ್ ಮೈನಿಂಗ್ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ಗಂಗಾರಾಮ್ ಬಡೇರಿಯಾರನ್ನು ಲೋಕಾಯುಕ್ತ ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.

ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ(ವಿಪತ್ತು ನಿರ್ವಹಣೆ)ಯಾಗಿರುವ ಗಂಗಾರಾಮ್ ಬಡೇರಿಯಾ ಸೇವೆಯಲ್ಲಿರುವಾಗಲೇ ಬಂಧನಕ್ಕೊಳಗಾದ ಮೊದಲ ಐಎಎಸ್ ಅಧಿಕಾರಿಯಾಗಿದ್ದಾರೆ.

ಬಳ್ಳಾರಿ ಜಿಲ್ಲೆಯಲ್ಲಿ ಅರಣ್ಯಾಧಿಕಾರಿಯಾಗಿದ್ದಾಗ ಅಕ್ರಮ ಗಣಿಗಾರಿಕೆಯಲ್ಲಿ ಭಾಗಿಯಾಗಿದ್ದ ಆರೋಪದ ಹಿನ್ನೆಲೆಯಲ್ಲಿ ಕೆಲ ದಿನಗಳ ಹಿಂದೆ ಈ ಸಂಬಂಧ ಮರು ತನಿಖೆಗೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಸುಪ್ರೀಂ ಆದೇಶದಂತೆ ಲೋಕಾಯುಕ್ತ ಎಸ್‌ಐಟಿ ಮರು ತನಿಖೆಗೆ ಮುಂದಾಗಿದೆ. ನ್ಯಾಯಮೂರ್ತಿ ಸಂತೋಷ್ ಹೆಗ್ಡೆಯವರು ಲೋಕಾಯುಕ್ತರಾಗಿದ್ದಾಗ ಅಕ್ರಮ ಗಣಿಗಾರಿಕೆ ಬಗ್ಗೆ ವರದಿ ನೀಡಿದ್ದರು. ಹೆಗ್ಡೆ ಅವರ ವರದಿಯಲ್ಲಿ ಗಂಗಾರಾಮ್ ಬಡೇರಿಯಾ ಅವರ ಹೆಸರಿದ್ದು, ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ನಡೆದ ಅಕ್ರಮ ಗಣಿಗಾರಿಕೆಯಲ್ಲಿ ಐಎಎಸ್ ಅಧಿಕಾರಿ ಭಾಗಿಯಾಗಿದ್ದಾರೆ ಎನ್ನಲಾಗಿದೆ.

ಗಣಿ ಇಲಾಖೆಯ ನಿರ್ದೇಶಕರಾಗಿದ್ದ ಗಂಗಾರಾಮ್ ಬಡೇರಿಯಾ, ಒಂದು ಕೋಟಿ ಮೂವತ್ತೆಂಟು ಲಕ್ಷ ಮೊತ್ತದ ಕಬ್ಬಿಣದ ಅದಿರು ಅಕ್ರಮ ಸಾಗಾಟಕ್ಕೆ ಅನುವು ಮಾಡಿಕೊಟ್ಟ ಆರೋಪ ಎದುರಿಸುತ್ತಿದ್ದಾರೆ. ಈ ಆರೋಪದ ಆಧಾರದ ಮೇಲೆ ಲೋಕಾಯುಕ್ತ ಎಸ್‌ಐಟಿ ಅಧಿಕಾರಿಗಳು ಬಡೇರಿಯಾರನ್ನು ವಿಚಾರಣೆಗೆ ಒಳಪಡಿಸಿದ ಬಳಿಕ ಬಂಧಿಸಿದ್ದಾರೆ.

ಇದೇ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ.ಕೃಷ್ಣ, ಎಚ್.ಡಿ. ಕುಮಾರಸ್ವಾಮಿ ಹಾಗೂ ಧರಂ ಸಿಂಗ್ ಅವರ ಹೆಸರು ಕೂಡ ಇದ್ದು, ಎಸ್.ಎಂ. ಕೃಷ್ಣ ಅವರ ವಿರುದ್ಧ ತನಿಖೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News