‘ರಾಯಣ್ಣ ಬ್ರಿಗೇಡ್’ ಚಟುವಟಿಕೆ ನಿಲ್ಲದು: ಕೆ.ಎಸ್.ಈಶ್ವರಪ್ಪ
ಬಾಗಲಕೋಟೆ, ಮೇ 15: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರೆ ನಮ್ಮ ನಾಯಕ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ, ಯಾವುದೇ ಕಾರಣಕ್ಕೂ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಚಟುವಟಿಕೆಗಳನ್ನು ನಿಲ್ಲಿಸುವುದಿಲ್ಲ ಎಂದು ಮೇಲ್ಮನೆ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಸೋಮವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪನವರಿಗೆ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಚಟುವಟಿಕೆಗಳ ಬಗ್ಗೆ ಇನ್ನೂ ಗೊಂದಲವಿದೆ. ಆದರೆ, ಬಿಜೆಪಿಯಲ್ಲಿ ಯಾವುದೇ ಭಿನ್ನಮತ, ಸಂಘರ್ಷವಿಲ್ಲ ಎಂದು ಸ್ಪಷ್ಟಣೆ ನೀಡಿದರು.
ಮುಂಬರುವ 2018ರ ವಿಧಾನಸಭಾ ಚುನಾವಣೆಯನ್ನು ಸಾಮೂಹಿಕ ನಾಯಕ್ವತದಲ್ಲಿ ಎದುರಿಸಲಿದ್ದೇವೆ. ಮಾತ್ರವಲ್ಲ ಬಿಜೆಪಿ 150 ಸ್ಥಾನಗಳನ್ನು ಗೆಲುವು ನಮ್ಮ ಗುರಿ ಎಂದ ಈಶ್ವರಪ್ಪ, ಮುಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಗೊಂದವಿಲ್ಲದ್ದು, ಇಷ್ಟು ದಿನ ಮುಂದಿನ ಸಿಎಂ ತಾನೆ ಎಂದು ಹೇಳುತ್ತಿದ್ದ ಸಿದ್ದರಾಮಯ್ಯ, ಇದೀಗ ಹೈಕಮಾಂಡ್ ತೀರ್ಮಾನಿಸುತ್ತದೆ ಎಂದು ಹೇಳಿಕೆ ನೀಡಿದ್ದಾರೆ. ಆದರೆ, ನನ್ನ ನಾಯಕತ್ವದಲ್ಲೆ ಚುನಾವಣೆ ಎಂದು ಹೇಳಿದ್ದು ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಸ್ಪಷ್ಟ ಎಂದು ಈಶ್ವರಪ್ಪ ವಿಶ್ಲೇಷಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮುಂದಿನ ಚುನಾವಣೆ ಎದುರಿಸಿದರೆ ಬಿಜೆಪಿಗೆ ಲಾಭವಾಗಲಿದೆ. ಸಿದ್ದರಾಮಯ್ಯ ದಲಿತರು, ಹಿಂದುಳಿದವರಿಗೆ ಅನ್ಯಾಯ ಮಾಡಿದ್ದಾರೆ. ಹೀಗಾಗಿ ಅವರೆಲ್ಲರೂ ಸಿದ್ದರಾಮಯ್ಯನವರ ವಿರುದ್ಧ ತಿರುಗಿ ಬಿದ್ದಿದ್ದಾರೆ ಎಂದು ಈಶ್ವರಪ್ಪ ಟೀಕಿಸಿದರು.
ರಾಜ್ಯದಲ್ಲಿ ಭೀಕರ ಸ್ವರೂಪದ ಬರ ಪರಿಸ್ಥಿತಿ ಇದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹವಾನಿಯಂತ್ರಣ ಕೊಠಡಿಯಲ್ಲಿ ಕೂತು ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸುವ ಬದಲು ವಾಸ್ತವ ಪರಿಸ್ಥಿತಿ ಅರಿತುಕೊಳ್ಳಲು ಹಳ್ಳಿಗಳಿಗೆ ಖುದ್ದು ಭೇಟಿ ನೀಡಬೇಕು ಎಂದು ಈಶ್ವರಪ್ಪ ಆಗ್ರಹಿಸಿದರು.
ಬರ ಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶದ ಜನ ಕುಡಿಯುವ ನೀರು, ಜಾನುವಾರುಗಳಿಗೆ ಮೇವಿಗಾಗಿ ಅನುಭವಿಸುತ್ತಿರುವ ಸಂಕಷ್ಟವನ್ನು ಅರಿತುಕೊಳ್ಳಲು ಬರ ಅಧ್ಯಯನ ಪ್ರವಾಸ ಕೈಗೊಂಡಿದ್ದೇನೆ. ವಾಸ್ತವ ಸ್ಥಿತಿಯ ಬಗ್ಗೆ ಸರಕಾರದ ಗಮನ ಸೆಳೆಯುವೆ ಎಂದು ಈಶ್ವರಪ್ಪ ತಿಳಿಸಿದರು.