×
Ad

ಸಂಪುಟ ಸಭೆಯಲ್ಲಿ ಚರ್ಚಿಸಿ ಮುಂದಿನ ಅಧಿವೇಶನದಲ್ಲಿ ಮಂಡನೆ: ಮುಖ್ಯಮಂತ್ರಿ ಭರವಸೆ

Update: 2017-05-16 22:02 IST

ಬೆಂಗಳೂರು, ಮೇ 16: ಮೌಢ್ಯ ಪ್ರತಿಬಂಧಕ ಕಾಯ್ದೆ ಜಾರಿಗೆ ತರುವ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ, ಮುಂದಿನ ಅಧಿವೇಶನದಲ್ಲಿ ತೀರ್ಮಾನವನ್ನು ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
 

ಮಂಗಳವಾರ ಗೃಹ ಕಚೇರಿ ಕೃಷ್ಣದಲ್ಲಿ ಪ್ರಗತಿಪರ ಮಠಾಧೀಶರ ವೇದಿಕೆಯ ಮನವಿಯನ್ನು ಸ್ವೀಕರಿಸಿದ ಬಳಿಕ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಮೌಢ್ಯ ಪ್ರತಿಬಂಧಕ ಕಾಯ್ದೆಯನ್ನು ಜಾರಿಗೊಳಿಸಲು ಬದ್ಧನಾಗಿದ್ದೇನೆ. ಕಾಯ್ದೆಯನ್ನು ಶೀಘ್ರದಲ್ಲೇ ಜಾರಿಗೊಳಿಸುವ ಸಂಬಂಧ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ನಿಡುಮಾಮಿಡಿ ಮಠದ ವೀರಭದ್ರ ಚನ್ನಮಲ್ಲ ಸ್ವಾಮೀಜಿ ಮಾತನಾಡಿ, ಬಹು ಜನರನ್ನು ಶೋಷಣೆಯಿಂದ ವಿಮೋಚನೆಗಾಗಿ ಮೌಢ್ಯ ಪ್ರತಿಬಂಧಕ ಕಾಯ್ದೆಯನ್ನು ಶೀಘ್ರದಲ್ಲೇ ಉಭಯ ಸದನಗಳಲ್ಲಿ ಮಂಡಿಸಬೇಕು ಎಂದು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಲಾಗಿದೆ. ನಮ್ಮ ಮನವಿಗೆ ಸಕಾರಾತ್ಮಕವಾಗಿ ಮುಖ್ಯಮಂತ್ರಿಗಳು ಸ್ಪಂದಿಸಿದ್ದು, ಜಾರಿಗೊಳಿಸುವ ಭರವಸೆಯನ್ನು ನೀಡಿದ್ದಾರೆ ಎಂದು ತಿಳಿಸಿದರು.
 

ಮೌಢ್ಯ ಪ್ರತಿಬಂಧಕ ಕಾಯ್ದೆ ಸಂಬಂಧ ಭಿನ್ನಾಭಿಪ್ರಾಯಗಳು ಕೇಳಿ ಬಂದಿರುವುದರಿಂದ ಜಾರಿಗೊಳಿಸುವಲ್ಲಿ ವಿಳಂಬವಾಗಿದೆ. ನ್ಯಾ. ಶಿವರಾಜ್ ಪಾಟೀಲ್ ನೇತೃತ್ವದಲ್ಲಿ ಎರಡು ವಿವಿಗಳು ಸಿದ್ಧಪಡಿಸಿರುವ ಕರುಡನ್ನು ಪರಿಶೀಲಿಸಿ ಅಂತಿಮಗೊಳಿಸಲಾಗಿದೆ. ವಿವಾದದ ಅಂಶಗಳನ್ನು ತೆಗೆದು ಉತ್ತಮ ವರದಿಯನ್ನು ಉಪಸಮಿತಿ ಮುಂದಿಡಲಾಗಿದೆ. ಇಲ್ಲಿ ಭಿನ್ನಾಭಿಪ್ರಾಯಗಳಿಗೆ ಯಾವುದೇ ಆಸ್ಪದವಿಲ್ಲ ಎಂದು ಸ್ಪಷ್ಟಪಡಿಸಿದರು.

ಸಿದ್ಧಪಡಿಸಿರುವ ವರದಿಯನ್ನು ಉಭಯ ಸದನಗಳಲ್ಲಿ ಮಂಡಿಸಿ, ಕೂಡಲೆ ಸರಕಾರಿ ವೆಬ್‌ಸೈಟ್‌ನಲ್ಲಿ ಪ್ರಕಟಪಡಿಸಿ ಜನಾಭಿಪ್ರಾಯಗಳನ್ನು ಸಂಗ್ರಹಿಸಬೇಕು ಎಂದು ಸರಕಾರವನ್ನು ಆಗ್ರಹಿಸಿದರು. ಈ ವರದಿಯನ್ನು ಯಾವುದೇ ಧರ್ಮವನ್ನು ಗುರಿಯಾಗಿಸಿ ಸಿದ್ಧಪಡಿಸಿಲ್ಲ ಎಂದು ಅವರು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದರು.
 

ಸಭೆಯಲ್ಲಿ ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ್ ಸ್ವಾಮೀಜಿ, ಪತ್ರಕರ್ತ ಇಂದೂಧರ ಹೊನ್ನಾಪುರ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಸೇರಿದಂತೆ ನಿಯೋಗದ 51 ಮಠಾಧೀಶರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News