ಐದು ಸಾವಿರ ಹುದ್ದೆಯ ಭರ್ತಿಗೆ ಮುಖ್ಯಮಂತ್ರಿ ಒಪ್ಪಿಗೆ

Update: 2017-05-17 16:24 GMT

ಬೆಂಗಳೂರು, ಮೇ 17: ಅಡುಗೆಯವರು, ಅಡುಗೆ ಸಹಾಯಕರು ಸೇರಿದಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಐದು ಸಾವಿರ ಹುದ್ದೆಗಳ ಭರ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದಾರೆ.

ಬುಧವಾರ ವಿಧಾನಸೌಧದಲ್ಲಿ ನಡೆದ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ, ನೇರ ನೇಮಕಾತಿ ಮೂಲಕ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವ ಪ್ರಕ್ರಿಯೆಗೆ ಶೀಘ್ರ ಚಾಲನೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಅಡುಗೆಯವರು (3291), ಅಡುಗೆ ಸಹಾಯಕರು (2577), ರಾತ್ರಿ ಕಾವಲುಗಾರರು (716) ಹಾಗೂ ಜವಾನರು (29) ಸೇರಿದಂತೆ 6,613 ಹುದ್ದೆಗಳು ಖಾಲಿ ಇವೆ. ಈ ಪೈಕಿ 5 ಸಾವಿರ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ.

ಗ್ರೂಪ್ ‘ಡಿ’ ಹುದ್ದೆಗೆ ಎಸೆಸೆಲ್ಸಿ ವಿದ್ಯಾರ್ಹತೆ ನಿಗದಿಪಡಿಸಲಾಗಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಎಸೆಸೆಲ್ಸಿ ವಿದ್ಯಾರ್ಹತೆ ನಿಗದಿ ಮಾಡಿರುವುದರ ಬಗ್ಗೆ ವಿಧಾನಮಂಡಲದ ಉಭಯ ಸದನದಲ್ಲಿ ಸಾಕಷ್ಟು ಚರ್ಚೆ ನಡೆದಿತ್ತು. ಅಂತಿಮವಾಗಿ ಎಸೆಸೆಲ್ಸಿ ವಿದ್ಯಾರ್ಹತೆ ಆಧಾರದ ಮೇಲೆಯೇ ನೇಮಕ ಪ್ರಕ್ರಿಯೆ ಕೈಗೆತ್ತಿಕೊಳ್ಳಲು ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆದ ಸಭೆ ನಿರ್ಧರಿಸಿದೆ.

ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಎಚ್.ಆಂಜನೇಯ, ಲೋಕೋಪಯೋಗಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ಸೇರಿದಂತೆ ಸಮಾಜ ಕಲ್ಯಾಣ, ಹಣಕಾಸು ಮತ್ತು ಸಿಬ್ಬಂದಿ, ಆಡಳಿತ ಸುಧಾರಣೆ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News