ಪಾರ್ವತಮ್ಮ ರಾಜ್‌ಕುಮಾರ್ ಆರೋಗ್ಯ ಸ್ಥಿತಿ ಗಂಭೀರ
ಬೆಂಗಳೂರು, ಮೇ 18: ವರನಟ ಡಾ.ರಾಜ್‌ಕುಮಾರ್ ಅವರ ಪತ್ನಿ ಮತ್ತು ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕಿ ಪಾರ್ವತಮ್ಮ ರಾಜ್‌ಕುಮಾರ್ ಅವರ ಆರೋಗ್ಯ ಪರಿಸ್ಥಿತಿ ತೀವ್ರ ಗಂಭೀರವಾಗಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಗುರುವಾರ ನಗರದಲ್ಲಿ ರಾಜ್‌ಕುಮಾರ್ ಕುಟುಂಬ ಸದಸ್ಯರು ಸುದ್ದಿಗೋಷ್ಠಿಯನ್ನು ಮಾತನಾಡಿ, ಪಾರ್ವತಮ್ಮ ರಾಜ್‌ಕುಮಾರ್ ಮೂರು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದು, ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯದ ಬಗ್ಗೆ ಹಲವು ಗೊಂದಲಗಳು ಕೇಳಿ ಬಂದ ಹಿನ್ನೆಲೆಯಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಲಾಗಿದೆ ಎಂದರು.
ಪಾರ್ವತಮ್ಮ ರಾಜ್‌ಕುಮಾರ್ ಅವರ ಹಿರಿಯ ಪುತ್ರ ಶಿವರಾಜ್‌ಕುಮಾರ್ ಮಾತನಾಡಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಯಾರೂ ಆತಂಕಪಡುವ ಅಗತ್ಯವಿಲ್ಲ. ವೈದ್ಯರು ಸೂಕ್ತ ಚಿಕಿತ್ಸೆ ನೀಡುತ್ತಿದ್ದಾರೆ. ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಎಲ್ಲ ರೀತಿಯ ಪರೀಕ್ಷೆಗಳನ್ನು ಮಾಡಿದ್ದಾರೆ. ಚೇತರಿಸಿಕೊಳ್ಳುವ ಭರವಸೆ ನೀಡಿದ್ದಾರೆ ಎಂದರು.
ವೈದ್ಯ ಡಾ.ನರೇಶ್‌ಶೆಟ್ಟಿ ಮಾತನಾಡಿ, ಪಾರ್ವತಮ್ಮ ಅವರಿಗೆ ತೀವ್ರ ಉಸಿರಾಟದ ತೊಂದರೆ ಉಂಟಾದ ಹಿನ್ನೆಲೆಯಲ್ಲಿ ಅವರನ್ನು ಐಸಿಯುಗೆ ಶಿಫ್ಟ್ ಮಾಡಲಾಗಿದ್ದು, ವೆಂಟಿಲೇಟರ್‌ನಲ್ಲಿಟ್ಟು ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಪರಿಸ್ಥಿತಿ ಸ್ವಲ್ಪಗಂಭೀರವಾಗಿದ್ದು, ಇನ್ನೂ 48 ಗಂಟೆಗಳ ಕಾಲ ಹೆಚ್ಚಿನ ನಿಗಾ ವಹಿಸಲಾಗುವುದು ಎಂದು ವಿವರಿಸಿದರು.
ಸುದ್ದಿಗೋಷ್ಠಿಯಲ್ಲಿ ಶಿವರಾಜ್‌ಕುಮಾರ್, ರಾಘವೇಂದ್ರ ರಾಜ್‌ಕುಮಾರ್, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು ಉಪಸ್ಥಿತರಿದ್ದರು.