ನೀರಿನ ಬಿಲ್ ಪಾವತಿ ವಿಳಂಬವಾದರೆ ನೋಟಿಸ್ ನೀಡಿ ಅಧಿಕಾರಿಗಳಿಗೆ ಸಚಿವ ಪ್ರಮೋದ್ ಸೂಚನೆ

Update: 2017-05-18 18:54 GMT

ಉಡುಪಿ, ಮೇ 18: ಜಿಲ್ಲೆಯಲ್ಲಿ ಕುಡಿಯುವ ನೀರು ಸರಬರಾಜುದಾರರ ಬಿಲ್‌ಗಳನ್ನು ಪಾವತಿಸುವಲ್ಲಿ ವಿಳಂಬ ಮಾಡುವ ಪಿಡಿಒಗಳಿಗೆ ನೋಟಿಸ್ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಎಲ್ಲಾ ತಾಪಂ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಸೂಚನೆಗಳನ್ನು ನೀಡಿದ್ದಾರೆ.

ಗುರುವಾರ ಉಡುಪಿಯ ಪ್ರವಾಸಿ ಮಂದಿರದಲ್ಲಿ ಕುಡಿಯುವ ನೀರು ಸಮಸ್ಯೆ ಕುರಿತಂತೆ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ವಿವಿಧ ಗ್ರಾಪಂಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುತ್ತಿರುವವರ ಬಿಲ್‌ಗಳನ್ನು ಪಂಚಾಯತ್‌ಗಳಲ್ಲಿ ಬಾಕಿ ಇರಿಸಿಕೊಂಡಿರುವ ಕಾರಣ ಬಿಲ್ ಪಾವತಿಗೆ ತೊಡಕಾಗಿದ್ದು, ಯಾವುದೇ ಹಂತದಲ್ಲೂ ಸಹ 24 ಗಂಟೆಗಿಂತ ಹೆಚ್ಚಿನ ಅವಧಿ ಮೀರಿ ಬಿಲ್ಲುಗಳನ್ನು ಇಟ್ಟುಕೊಳ್ಳದೇ ಸಂಬಂಧಪಟ್ಟವರಿಗೆ ಪಾವತಿಸುವಂತೆ ಎಲ್ಲಾ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ಕುಡಿಯುವ ನೀರು ಸರಬರಾಜು ಕುರಿತಂತೆ ಜಿಲ್ಲೆಯಲ್ಲಿ ಇದುವರೆಗೆ ಕೈಗೊಂಡಿರುವ ಕಾಮಗಾರಿಗಳು, ಪ್ರಗತಿ ಹಂತದಲ್ಲಿರುವ ಕಾಮಗಾರಿಗಳು, ಮುಕ್ತಾಯದ ಹಂತದ ಕಾಮಗಾರಿಗಳು ಹಾಗೂ ಕಾಮಗಾರಿ ಪ್ರಾರಂಭಿಸದೇ ಇರುವವುಗಳ ಕುರಿತ ಸಂಪೂರ್ಣ ಮಾಹಿತಿಗಳನ್ನು ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಚಿವರು, ಆರಂಭಗೊಂಡಿರುವ ಕಾಮಗಾರಿಗಳನ್ನು ಮೇ 30 ರೊಳಗೆ ಮುಕ್ತಾಯಗೊಳಿಸುವಂತೆ ಸೂಚಿಸಿದರು.

ಜಿಲ್ಲೆಯಲ್ಲಿ ಕುಡಿಯುವ ನೀರು ಸರಬರಾಜಿಗೆ ಸಿಆರ್‌ಎಫ್ ನಿಧಿಯಿಂದ ಹೆಚ್ಚಿನ ಅನುದಾನ ಕೋರಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಗಳಿಗೆ ತಿಳಿಸಿದ ಸಚಿವರು, ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೀರಿನ ಸರಬರಾಜು ಮಾಡುತ್ತಿರುವ ಕುರಿತು ಮಾಹಿತಿ ಪಡೆದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಉಡುಪಿ ತಹಶೀಲ್ದಾರ್ ಮಹೇಶ್ಚಂದ್ರ, ಪೌರಾಯುಕ್ತ ಡಿ. ಮಂಜುನಾಥಯ್ಯ, ಜಿಲ್ಲೆಯ ಮೂರು ತಾಪಂಗಳ ಕಾರ್ಯನಿರ್ವಹಣಾಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಇಂಜಿನಿಯರ್‌ಗಳು, ಮೆಸ್ಕಾಂ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News