ಸರಕಾರದ ಸಾಧನೆ ಜನರಿಗೆ ತಲುಪಿಸಲು ಮಾರ್ಗದರ್ಶನ: ಎಚ್.ಕೆ.ಪಾಟೀಲ್‌

Update: 2017-05-22 12:46 GMT

ಬೆಂಗಳೂರು, ಮೇ 22: ರಾಜ್ಯ ಸರಕಾರವು ಕಳೆದ ನಾಲ್ಕು ವರ್ಷಗಳಲ್ಲಿ ಮಾಡಿರುವ ಸಾಧನೆಗಳನ್ನು ಜನರಿಗೆ ತಲುಪಿಸಲು ಅನುಸರಿಸಬೇಕಾದ ಕ್ರಮಗಳ ಕುರಿತು ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಮಾರ್ಗದರ್ಶನ ನೀಡಿದ್ದಾರೆ ಎಂದು ಗದಗ ಜಿಲ್ಲಾ ಉಸ್ತುವಾರಿಯೂ ಆಗಿರುವ ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.

ಸೋಮವಾರ ನಗರದ ಕ್ವೀನ್ಸ್‌ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಗದಗ ಜಿಲ್ಲೆಯ ಎಲ್ಲ ಪ್ರಮುಖ ನಾಯಕರು, ಹಿರಿಯ ಮುಖಂಡರೊಂದಿಗೆ ಆಯೋಜಿಸಲಾಗಿದ್ದ ಸಮಾಲೋಚನಾ ಸಭೆಯ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಗದಗ ಜಿಲ್ಲೆಯಲ್ಲಿ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಇಂದು ನಡೆದ ಸಭೆಯಲ್ಲಿ ಚರ್ಚಿಸಲಾಗಿದೆ. ವೇಣುಗೋಪಾಲ್ ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಕೂಡ ನಮಗೆ ಮಾರ್ಗದರ್ಶನ ಮಾಡಿದ್ದಾರೆ ಎಂದು ಅವರು ಹೇಳಿದರು.

ಗದಗ ಜಿಲ್ಲೆಯ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷ ಮಾಡಿರುವ ಸಾಧನೆ ಬಗ್ಗೆ ಪರಾಮರ್ಶೆ ನಡೆಸಲಾಯಿತು. ರಾಜ್ಯ ಸರಕಾರದ ಸಾಧನೆ ಏನು, ಸರಕಾರದ ಯೋಜನೆಗಳು ಜಿಲ್ಲೆಯ ಜನರಿಗೆ ತಲುಪಲು ಏನು ಮಾಡಬೇಕು ಎಂಬ ಬಗ್ಗೆಯೂ ಚರ್ಚೆ ಮಾಡಿದ್ದಾರೆ ಎಂದು ಎಚ್.ಕೆ.ಪಾಟೀಲ್ ತಿಳಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆದಿದೆ. ಗದಗ ಜಿಲ್ಲೆಯ ವ್ಯಾಪ್ತಿಗೆ ಬರುವ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲುವುದಕ್ಕೆ ಮಾರ್ಗದರ್ಶನ ಮಾಡಿದ್ದಾರೆ. ಖಂಡಿತವಾಗಿಯೂ ನಾವು ಎಲ್ಲ ಸ್ಥಾನಗಳನ್ನು ಗೆಲ್ಲಲು ಶ್ರಮಿಸುತ್ತೇವೆ ಎಂದು ಅವರು ಹೇಳಿದರು.

ಬಾಗಲಕೋಟೆ: ಮುಂದಿನ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟು ಕೊಂಡು ರಾಜ್ಯ ಉಸ್ತುವಾರಿಗಳು ಕೆಲವು ಸಲಹೆ, ಸೂಚನೆಗಳನ್ನು ನೀಡಿದ್ದಾರೆ. ಅವುಗಳನ್ನು ಗಮನದಲ್ಲಿಟ್ಟುಕೊಂಡು ಜಿಲ್ಲೆಯಲ್ಲಿ ಪಕ್ಷದ ಸಂಘಟನೆ ಹಾಗೂ ಅಭ್ಯರ್ಥಿಗಳ ಗೆಲುವಿಗೆ ಕಾರ್ಯತಂತ್ರ ರೂಪಿಸಲಾಗುವುದು ಎಂದು ಮಾಜಿ ಸಚಿವ ಎಸ್.ಆರ್.ಪಾಟೀಲ್ ತಿಳಿಸಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ತಾನು ಯಾವುದೆ ಲಾಬಿ ನಡೆಸಿಲ್ಲ. ಪಕ್ಷದ ವರಿಷ್ಠರು ತನಗೆ ಜವಾಬ್ದಾರಿ ನೀಡಿದರೆ ಅದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ. ಕಾಂಗ್ರೆಸ್ ಪಕ್ಷವನ್ನು ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಅವರು ಹೇಳಿದರು.

ಸಚಿವ ಸಂಪುಟ ಪುನರ್ರಚನೆ ಸಂದರ್ಭದಲ್ಲಿ ತಮ್ಮನ್ನು ಕೈ ಬಿಟ್ಟು, ಮೂಲೆಗುಂಪು ಮಾಡಲಾಗಿದೆ ಎಂಬುದು ಸರಿಯಲ್ಲ. ಸಚಿವ ಸಂಪುಟದಲ್ಲಿ ಯಾರನ್ನೂ ಸೇರಿಸಬೇಕು, ಯಾರನ್ನೂ ಕೈ ಬಿಡಬೇಕು ಎಂಬುದು ಮುಖ್ಯಮಂತ್ರಿಯ ವಿವೇಚನೆಗೆ ಬಿಟ್ಟ ವಿಷಯ. ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ತನಗೇನು ಬೇಸರವಿಲ್ಲ ಎಂದು ಎಸ್.ಆರ್.ಪಾಟೀಲ್ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News