ಪಶು ವೈದ್ಯರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲು ಆಗ್ರಹ

Update: 2017-05-22 13:00 GMT

 ಬೆಂಗಳೂರು, ಮೇ 22: ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ 550 ಪಶು ವೈದ್ಯರ ನೇಮಕಾತಿ ಪ್ರಕ್ರಿಯೆಯನ್ನು ಶೀಘ್ರ ಪೂರ್ಣಗೊಳಿಸಬೇಕು ಎಂದು ನೊಂದ ನಿರುದ್ಯೋಗಿ ಪಶು ವೈದ್ಯರು ಇಂದಿಲ್ಲಿ ಆಗ್ರಹಿಸಿದ್ದಾರೆ.

ರಾಜ್ಯ ಸರಕಾರವು 2015 ರ ಜೂನ್‌ನಲ್ಲಿ 350 ಪಶು ವೈದ್ಯರ ನೇಮಕಾತಿಗೆ ಅಧಿಸೂಚನೆ ಹೊರಡಿಸಿ, ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಆದರೆ, ನೇಮಕಾತಿ ಪ್ರಕ್ರಿಯೆಗೆ ಅಗತ್ಯವಾದ ಪರೀಕ್ಷೆ ನಡೆಸಿರಲಿಲ್ಲ. ಇದಾದ ಆರು ತಿಂಗಳ ನಂತರ ಮೂಲ ಅಧಿಸೂಚನೆಗೆ ತಿದ್ದುಪಡಿ ಮಾಡಿ, ಅಧಿಸೂಚನೆ ಹೊರಡಿಸಲಾಗಿತ್ತು. ಅನಂತರ 2016 ರ ಮೇ 5 ರಂದು ಅರ್ಹ ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆಗೆ ಆಹ್ವಾನಿಸಿ ದಾಖಲೆಗಳನ್ನು ಪರಿಶೀಲಿಸಲಾಗಿತ್ತು ಎಂದು ನಿರುದ್ಯೋಗಿ ವೈದ್ಯ ಡಾ.ಮಹೇಂದ್ರ ಹೇಳಿದರು.

ಇದಾದ ಹತ್ತು ತಿಂಗಳ ನಂತರ ಹಾಲಿ ಹುದ್ದೆಗಳು ಸೇರಿದಂತೆ 550 ಪಶು ವೈದ್ಯರ ನೇಮಕಾತಿಗೆ ಅಧಿಸೂಚನೆ ಹೊರಡಿಸಿ, ಹೊಸದಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅರ್ಹ ಆಕಾಂಕ್ಷಿಗಳು ಅರ್ಜಿಗಳನ್ನು ಸಲ್ಲಿಸಿದ್ದರು. ಆದರೆ, ಇದುವರೆಗೂ ಇಲಾಖೆ ನೇಮಕಾತಿ ಪ್ರಕ್ರಿಯೆಗೆ ವಿಳಂಬ ನೀತಿ ಅನುಸರಿಸುತ್ತಿದೆ. ಈ ಕುರಿತು ಕಳೆದ ಎರಡು ವರ್ಷಗಳಿಂದ ಇಲಾಖೆಗೆ ಸಂಬಂಧಿಸಿದ ಸಚಿವರಿಗೆ, ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಸರಕಾರ ಕೂಡಲೇ ಈ ಕುರಿತು ಕ್ರಮ ಕೈಗೊಂಡು ಮೇ 25 ರೊಳಗೆ ತೀರ್ಮಾನ ಪ್ರಕಟಿಸಬೇಕು. ಇಲ್ಲದಿದ್ದರೆ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ರಾಜ್ಯದಲ್ಲಿ ಪ್ರಸ್ತುತವಾಗಿ 664 ಪಶು ಆಸ್ಪತ್ರೆಗಳಿದ್ದು, 1883 ಪಶು ಚಿಕಿತ್ಸಾಲಯಗಳಲ್ಲಿ 800 ಪಶು ವೈದ್ಯರ ಕೊರತೆಯಿದೆ. ಹೀಗಾಗಿ ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ರೈತರು ಕೃಷಿಯ ಜೊತೆಗೆ ಹೈನುಗಾರಿಕೆಯನ್ನು ಉಪಕಸುಬನ್ನಾಗಿ ಮಾಡಿಕೊಂಡು ಬರುತ್ತಿದ್ದಾರೆ. ಈಗ ವೈದ್ಯರ ಕೊರತೆಯಿಂದ ರಾಸುಗಳಿಗೆ ಸೂಕ್ತ ಚಿಕಿತ್ಸೆ ಲಭಿಸದೇ ಹಾಗೂ ರಾಸುಗಳ ಪೋಷಣೆ ಬಗ್ಗೆ ಅಗತ್ಯ ಮಾಹಿತಿ ಸಿಗದೇ ಹಸುಗಳು ಮಾರಕ ರೋಗಗಳಿಗೆ ಬಲಿಯಾಗುತ್ತಿವೆ ಎಂದು ಅವರು ಇದೇ ವೇಳೆ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News