ಮುಖ್ಯಮಂತ್ರಿ ವಿರುದ್ಧ ಪ್ರತಿಭಟನೆ: ಕೊಪ್ಪಳ ಕಾಂಗ್ರೆಸ್ ಮುಖಂಡರಿಗೆ ಕೆಪಿಸಿಸಿ ನೋಟಿಸ್
ಬೆಂಗಳೂರು, ಮೇ 24: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಹಠಾವೋ, ಕಾಂಗ್ರೆಸ್ ಬಚಾವೋ’ ಎಂದು ಬಹಿರಂಗವಾಗಿ ಪ್ರತಿಭಟನೆ ನಡೆಸಿದ ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಮುಖಂಡರಿಗೆ ಕೆಪಿಸಿಸಿ ವತಿಯಿಂದ ಎಚ್ಚರಿಕೆಯ ನೋಟಿಸ್ ನೀಡಲಾಗಿದೆ.
ನಾಯಕರ ವಿರುದ್ಧ ಬಹಿರಂಗ ಹೇಳಿಕೆಗಳನ್ನು ನೀಡುವುದಕ್ಕೆ ಕಡಿವಾಣ ಹಾಕುವಂತೆ ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಿಗೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸ್ಪಷ್ಟ ಸೂಚನೆ ನೀಡಿದ್ದಾರೆ.
ಪಕ್ಷ ಹಾಗೂ ಸರಕಾರದ ನಾಯಕತ್ವದ ವಿರುದ್ಧ ಬಹಿರಂಗ ಹೇಳಿಕೆಗಳನ್ನು ನೀಡಿದರೆ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಲಿದೆ ಎಂದು ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ ಪಕ್ಷ ಹಾಗೂ ನಾಯಕರಿಗೆ ಸಂಬಂಧಿಸಿದಂತೆ ಏನೆ ಆಕ್ಷೇಪಗಳು, ಅಸಮಾಧಾನಗಳು ಇದ್ದರೂ ಅದನ್ನು ಕೆಪಿಸಿಸಿ ಅಧ್ಯಕ್ಷನಾದ ನನ್ನ ಗಮನಕ್ಕೆ ತಂದು ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕು. ಅದನ್ನು ಬಿಟ್ಟು ಬಹಿರಂಗವಾಗಿ ಪ್ರತಿಭಟನೆಗಳನ್ನು ನಡೆಸುವ ಮೂಲಕ ಪಕ್ಷ ಹಾಗೂ ಸರಕಾರದ ನಾಯಕತ್ವವನ್ನು ಮುಜುಗರಕ್ಕೊಳಪಡಿಸುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಅವರು ಸೂಚನೆ ನೀಡಿದ್ದಾರೆ.
ಎಐಸಿಸಿ ಕಾರ್ಯದರ್ಶಿ ಡಾ.ಸಾಕೆ ಶೈಲಜನಾಥ್ ಎದುರು ಕೊಪ್ಪಳದಲ್ಲಿ ‘ಮುಖ್ಯಮಂತ್ರಿ ಸಿದ್ದರಾಮಯ್ಯ ಹಠಾವೋ, ಕಾಂಗ್ರೆಸ್ ಬಚಾವೋ’ ಎಂದು ಭಿತ್ತಿ ಪತ್ರಗಳನ್ನು ಪ್ರದರ್ಶಿಸಿ, ಮುಖ್ಯಮಂತ್ರಿ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿದವರಿಗೆ ಎಚ್ಚರಿಕೆ ನೋಟಿಸ್ ನೀಡುವಂತೆ ಜಿಲ್ಲಾ ಸಮಿತಿಗೆ ಪರಮೇಶ್ವರ್ ಆದೇಶಿಸಿದ್ದಾರೆ.