ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ: ಕೆ.ಸಿ.ವೇಣುಗೋಪಾಲ್
ಬೆಂಗಳೂರು, ಮೇ 25: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಜನ ಮೆಚ್ಚುವ ಆಡಳಿತವನ್ನು ನೀಡಿರುವುದರಿಂದ 2018ಕ್ಕೆ ಮತ್ತೆ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಭವಿಷ್ಯ ನುಡಿದಿದ್ದಾರೆ.
ಗುರುವಾರ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಜಂಟಿ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ ವೇಣುಗೋಪಾಲ್ ಅವರು, ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಪಕ್ಷ ಅನ್ನಭಾಗ್ಯ, ಕ್ಷೀರ ಭಾಗ್ಯ, ಶಾದಿ ಭಾಗ್ಯದಂತಹ ಹಲವು ಉತ್ತಮ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ಈ ಹಿನ್ನೆಲೆಯಲ್ಲಿ 2018ಕ್ಕೆ ಮತ್ತೆ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದರು.
ರಾಜ್ಯದ ಕಾಂಗ್ರೆಸ್ ಶಾಸಕರು, ಸಚಿವರು, ಕಾಂಗ್ರೆಸ್ ಹಿರಿಯ ಮುಖಂಡರೊಂದಿಗೆ ನಾಲ್ಕು ದಿನಗಳಿಂದ ನಿರಂತರವಾಗಿ ಸಭೆ ನಡೆಸಲಾಗಿದೆ. ಹಾಗೂ ಜಿಲ್ಲಾ ಸಮಿತಿಗಳಲ್ಲಿದ್ದ ಸಣ್ಣ ಪುಟ್ಟ ಸಮಸ್ಯೆಗಳನ್ನೂ ಬಗೆಹರಿಸಲಾಗಿದೆ ಎಂದು ಹೇಳಿದರು.
ಜೂನ್ 30ರ ಒಳಗೆ ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಘಟನೆಗೆ ಒತ್ತು ನೀಡಲಾಗುವುದು. ಹಾಗೂ ಪಕ್ಷವನ್ನು ಸಂಘಟಿಸಲು ಜುಲೈ ತಿಂಗಳಲ್ಲಿ ರಾಯಚೂರಿನಲ್ಲಿ ರಾಜ್ಯಮಟ್ಟದ ಸಮಾವೇಶವನ್ನು ನಡೆಸಲು ನಿರ್ಧರಿಸಲಾಗಿದೆ. ಅಲ್ಲದೆ, ಇಂದಿರಾಗಾಂಧಿ ಹೆಸರಿನಲ್ಲಿ ಚಿಕ್ಕಮಗಳೂರಿನಲ್ಲಿ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷದ ನಾಯಕತ್ವ ಮತ್ತು ಪಕ್ಷದ ವಿರುದ್ಧ ಮಾಧ್ಯಮಗಳ ಮುಂದೆ ಬಹಿರಂಗವಾಗಿ ಹೇಳಿಕೆಗಳನ್ನು ನೀಡಿದರೆ ಅಂತಹವರ ವಿರುದ್ಧ ಯಾವುದೇ ಮುಲಾಜಿಗೂ ಒಳಗಾಗದೆ ಶಿಸ್ತು ಕ್ರಮ ಜರುಗಿಸಲಾಗುವುದು. ಹಾಗೊಂದು ಬಾರಿ ಸಮಸ್ಯೆಗಳನ್ನು ಹೇಳಿಕೊಳ್ಳಬೇಕೆಂದರೆ ನಮ್ಮ ಬಳಿ ಹೇಳಿಕೊಂಡು ಪರಿಹಾರ ಕಂಡುಕೊಳ್ಳಬೇಕೆಂದು ಹೇಳಿದರು.
ರಾಜ್ಯದಲ್ಲಿ ಬಿಜೆಪಿ ಸರಕಾರ ಆಡಳಿತದಲ್ಲಿದ್ದಾಗ ಎಸ್ಸಿ, ಎಸ್ಟಿ ಹಾಗೂ ಹಿಂದುಳಿದವರ ಅಭಿವೃದ್ಧಿಗಾಗಿ ಶ್ರಮಿಸಲಿಲ್ಲ. ಆದರೆ, ಈಗ ಅಧಿಕಾರಕ್ಕೆ ಬಂದರೆ ಅಭಿವೃದ್ಧಿ ಮಾಡುತ್ತೇವೆ ಎಂಬ ಸುಳ್ಳು ಭರವಸೆಗಳನ್ನು ನೀಡುತ್ತಿದ್ದಾರೆ. ಹೀಗಾಗಿ, ಅಹಿಂದ ಜನಾಂಗ ಬಿಜೆಪಿ ಪಕ್ಷದ ಸುಳ್ಳು ಭರವಸೆಗಳನ್ನು ನಂಬಬಾರದು ಎಂದು ಹೇಳಿದರು.
ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬರೀ ಆರೋಪಗಳನ್ನು ಮಾಡುತ್ತಿದ್ದಾರೆಯೇ ವಿನಹ ಯಾವುದೇ ದಾಖಲೆಗಳು ಲಭ್ಯವಾಗಿಲ್ಲ. ಹೀಗಾಗಿ, ತನಿಖೆ ಬಳಿಕ ಇದರ ಬಗ್ಗೆ ಸತ್ಯ ಹೊರ ಬರಲಿದೆ ಎಂದು ಹೇಳಿರು.
ಕಾಂಗ್ರೆಸ್ ಮುಖಂಡ ಎಚ್.ವಿಶ್ವನಾಥ್ ಅವರು ಜೆಡಿಎಸ್ ಪಕ್ಷವನ್ನು ಸೇರುವ ಮಾತುಗಳು ಕೇಳಿ ಬರುತ್ತಿವೆಯಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ವೇಣುಗೋಪಾಲ್ ಅವರು ನಮಗೆ ಪ್ರತಿಯೊಬ್ಬ ಮುಖಂಡರೂ ಮುಖ್ಯ ಹಾಗೂ ಅವರಿಂದ ಶಿಸ್ತನ್ನೂ ಬಯಸುತ್ತೇವೆ ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಮೈಸೂರು ಕಾಂಗ್ರೆಸ್‌ನಲ್ಲಿ ಯಾವುದೇ ಭಿನ್ನಮತವಿಲ್ಲ. ಹಾಗೂ ಎಚ್.ವಿಶ್ವನಾಥ್ ಅವರ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲ್ಲ ಎಂದು ಹೇಳಿದರು.
‘ಮೇ 31ರೊಳಗೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಸದ್ಯಕ್ಕೆ ಯಾವುದೇ ಕಾರಣಕ್ಕೂ ಸಿಎಂ ಸಿದ್ದರಾಮಯ್ಯ ಅವರನ್ನು ಬದಲಾಯಿಸುವುದಿಲ್ಲ. ಆದರೆ, ಯಾರ ನಾಯಕತ್ವದಲ್ಲಿ ಚುನಾವಣೆಯನ್ನು ನಡೆಸುತ್ತೇವೆ ಎಂಬುದರ ಬಗ್ಗೆ ಮೇ 31ರೊಳಗೆ ಘೋಷಣೆ ಮಾಡುತ್ತೇವೆ.’
-ಕೆ.ಸಿ.ವೇಣುಗೋಪಾಲ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ