‘ಗೋಹತ್ಯೆ ನಿಷೇಧ’ ಶಾಂತಿ ಕದಡುವ ಸನ್ನಾಹ: ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಆಕ್ಷೇಪ

Update: 2017-05-27 12:46 GMT

ಬೆಂಗಳೂರು, ಮೇ 27: ದೇಶದಲ್ಲಿ ಈಗಾಗಲೇ ಗೋಹತ್ಯೆ ನಿಷೇಧ ಕಾನೂನು ಇದೆ. ಆದರೆ, ಕೇಂದ್ರ ಸರಕಾರ ಅದೇ ಕಾನೂನನ್ನು ಇದೀಗ ಬೇರೆ ರೀತಿಯನ್ನು ಅನುಷ್ಠಾನಗೊಳಿಸಲು ಮುಂದಾಗಿದ್ದು, ಇದರಲ್ಲಿ ಹೊಸದೇನು ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.

ಶನಿವಾರ ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಪುಣ್ಯತಿಥಿ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗೋಹತ್ಯೆ ನಿಷೇಧದ ನೆಪದಲ್ಲಿ ಕೇಂದ್ರ ಸರಕಾರ ಗೊಂದಲ ಸೃಷ್ಟಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಸಂಬಂಧಿಸಿದ ನೂತನ ಕಾನೂನು ಜಾರಿ ಕುರಿತು ಪರಿಶೀಲಿಸಿದ ಬಳಿಕ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ಆದರೆ, ಕೇಂದ್ರ ಸರಕಾರ ಈ ಕಾನೂನು ಸಮಾಜದಲ್ಲಿ ಶಾಂತಿ ಕದಡುವ ರೀತಿಯಲ್ಲಿ ಕಾಣಿಸುತ್ತಿದೆ ಎಂದು ಪರಮೇಶ್ವರ್ ಆತಂಕ ವ್ಯಕ್ತಪಡಿಸಿದರು.

ಚುನಾವಣೆ ಬಳಿಕ ಘೋಷಣೆ: ಕಾಂಗ್ರೆಸ್‌ ಪಕ್ಷದಲ್ಲಿ ಚುನಾವಣಾ ಪೂರ್ವದಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಪದ್ಧತಿ ಇಲ್ಲ. ಚುನಾವಣೆ ಬಳಿಕ ನೂತನವಾಗಿ ಆಯ್ಕೆಯಾದ ಶಾಸಕರು ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲಿದ್ದು, ಅದಕ್ಕೆ ಹೈಕಮಾಂಡ್ ಸಮ್ಮತಿ ಸೂಚಿಸಲಿದೆ ಎಂದು ಪರಮೇಶ್ವರ್ ಸ್ಪಷ್ಟಪಡಿಸಿದರು.

ಬಿಜೆಪಿ ದ್ವಿಮುಖ ನೀತಿ: ಬಿಜೆಪಿ ಸಿಎಂ ಅಭ್ಯರ್ಥಿಯನ್ನಾಗಿ ಯಡಿಯೂರಪ್ಪ ಅವರ ಹೆಸರನ್ನು ಘೋಷಿಸಿದ್ದು, ಆ ಮೂಲಕ ದ್ವಿಮುಖ ನೀತಿ ಅನುಸರಿಸುತ್ತದೆ. ಈಗೊಂದು-ಆಗೊಂದು ಹೇಳಿಕೆ ನೀಡುತ್ತದೆ, ಪದೇ ಪದೇ ನಿಲುವು ಬದಲಿಸುತ್ತದೆ. 75 ವರ್ಷ ತುಂಬಿದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರನ್ನು ಸಿಎಂ ಅಭ್ಯರ್ಥಿಯನ್ನಾಗಿ ಘೋಷಿಸಿರುವುದೇ ಇದಕ್ಕೆ ನಿದರ್ಶನ ಎಂದು ಪರಮೇಶ್ವರ್ ಟೀಕಿಸಿದರು.

ಬಿಜೆಪಿಯಲ್ಲಿ ನಿಯಮದ ಪ್ರಕಾರ 75 ವರ್ಷ ವಯಸ್ಸಾದವರಿಗೆ ಯಾವುದೇ ಹುದ್ದೆ ನೀಡುವಂತಿಲ್ಲ. ಆದರೂ ಬಿಎಸ್ವೈ ಸಿಎಂ ಅಭ್ಯರ್ಥಿಯಾಗಿದ್ದಾರೆ. ಇದು ಅವರ ಪಕ್ಷದ ಆಂತರಿಕ ವಿಚಾರವಾದರೂ, ಮೊದಲು ಅವರ ಪಕ್ಷ ಅಧಿಕಾರಕ್ಕೆ ಬರಲಿ, ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಬಿಜೆಪಿ ಅಧಿಕಾರಕ್ಕೆ ಬರಲು ಬಿಡಲ್ಲ ಎಂದು ಎಚ್ಚರಿಸಿದರು.

ಹೊಸದಿಲ್ಲಿಗೆ: ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಗತ್ಯ ಕಾರ್ಯತಂತ್ರ ರೂಪಿಸುವ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ತನಗೆ ಹೈಕಮಾಂಡ್ ಬುಲಾವ್ ನೀಡಿದ್ದು, ಸಿಎಂ ಜೊತೆ ಹೊಸದಿಲ್ಲಿಗೆ ತೆರಳಲಿದ್ದೇನೆ ಎಂದರು.

ಅಜೆಂಡಾ ಏನು ಎಂಬುದು ನನಗೆ ಗೊತ್ತಿಲ್ಲ. ರಾಜ್ಯ ಉಸ್ತುವಾರಿ ಕೆ.ಸಿ.ವೇಣು ಗೋಪಾಲ್ ನೇತೃತ್ವದಲ್ಲಿ ಸಭೆ ನಡೆಸಿದ್ದು, ಪರಿಸ್ಥಿತಿಯನ್ನು ಅವಲೋಕನ ನಡೆಸಿದ್ದಾರೆ. 2018ರ ಚುನಾವಣೆ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕಾರ್ಯತಂತ್ರದ ಬಗ್ಗೆ ವರಿಷ್ಠರೊಂದಿಗೆ ಚರ್ಚಿಸಲಾಗುವುದು ಎಂದರು.

‘ಕೆಪಿಸಿಸಿ ಅಧ್ಯಕ್ಷ ಸ್ಥಾನದ ವಿಚಾರದಲ್ಲಿ ಹೊಸದಿಲ್ಲಿಯಲ್ಲಿ ವರಿಷ್ಠರೊಂದಿಗೆ ಚರ್ಚೆಯ ಬಳಿಕ ಈ ಸಂಬಂಧ ಯಾವ ತೀರ್ಮಾನ ಕೈಗೊಳ್ಳಲಿದ್ದಾ ರೆಂಬುದನ್ನು ಕಾದುನೋಡಬೇಕು. ಆದರೆ, ಹೈಕಮಾಂಡ್ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ’

-ಡಾ.ಜಿ.ಪರಮೇಶ್ವರ್ ಕೆಪಿಸಿಸಿ ಅಧ್ಯಕ್ಷ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News