ಇನ್ನರೆಡು ದಿನಗಳಲ್ಲಿ ಕೆಪಿಸಿಸಿ ಅಧ್ಯಕ್ಷರ ಹೆಸರು ಘೋಷಣೆ: ವೇಣುಗೋಪಾಲ್
ಹೊಸದಿಲ್ಲಿ, ಮೇ 29: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ ಆಯ್ಕೆಯಾಗಿರುವ ಅಧ್ಯಕ್ಷರ ಹೆಸರನ್ನು ಇನ್ನರೆಡು ದಿನಗಳಲ್ಲಿ ಘೋಷಿಸಲಾಗುವುದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ತಿಳಿಸಿದ್ದಾರೆ.
ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ನಿವಾಸದಲ್ಲಿ ಇಂದು ನಡೆದ ಕೆಪಿಸಿಸಿಯ ಸಮನ್ವಯ ಸಮಿತಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಧ್ಯಕ್ಷರ ನೇಮಕ ಹೈಕಮಾಂಡ್‌ಗೆ ಬಿಟ್ಟ ವಿಚಾರವಾಗಿದೆ ಎಂದರು.
ಸಂಜೆ ನಾಲ್ಕು ಗಂಟೆಯೊಳಗೆ ಅಧ್ಯಕ್ಷರ ಆಯ್ಕೆಗೆ ಸಂಬಂಧಿಸಿ ಮತ್ತೊಂದು ಸುತ್ತಿನ ಮಾತುಕತೆಯನ್ನು ರಾಹುಲ್ ಗಾಂಧಿ ಅವರು ನಡೆಸಲಿದ್ದಾರೆ. ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಸಭೆಯಲ್ಲಿ ಭಾಗವಹಿಸಲಿದ್ದಾರೆ .
ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ನ್ನು ಮರಳಿ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ತಯಾರಿಯ ಬಗ್ಗೆ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚಿಸಲಾಗಿದೆ. ಪಕ್ಷದ ಬಲವರ್ಧನೆಗೆ ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುವುದು. ಸಾಮೂಹಿಕ ನಾಯಕತ್ವದಲ್ಲಿ ಮುಂದಿನ ಚುನಾವಣೆ ಎದುರಿಸಲಾಗುವುದು ಎಂದು ಕೆ.ಸಿ. ವೇಣುಗೋಪಾಲ್ ತಿಳಿಸಿದರು.