×
Ad

ಶೈಕ್ಷಣಿಕ ಸೌಲಭ್ಯಗಳು ಮಕ್ಕಳ ವಿಕಾಸಕ್ಕೆ ಪೂರಕ: ಏಳುಮಲೈ

Update: 2017-06-04 16:22 IST

ಶಿವಮೊಗ್ಗ, ಜೂ. 4: ಸರ್ಕಾರ ಮಕ್ಕಳಿಗೆ ನೀಡುತ್ತಿರುವ ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಪೌಷ್ಠಿಕ ಹಾಲು, ಶೂ-ಸಾಕ್ಸ್‌ಗಳು ಮಕ್ಕಳ ಶೈಕ್ಷಣಿಕ ಚಟುವಟಿಕೆಗೆ ಪೂರಕವಾಗಿವೆ ಎಂದು ಶಿವಮೊಗ್ಗ ಮಹಾನಗರಪಾಲಿಕೆಯ ಮಹಾಪೌರ ಏಳುಮಲೈ ಅವರು ಹೇಳಿದರು.

ದುರ್ಗಿಗುಡಿಯಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸೌಲಭ್ಯಗಳ ವಿತರಣಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಸಾರ್ವಜನಿಕ ವಲಯದಲ್ಲಿ ಖಾಸಗಿ ಶಾಲೆಗಳ ವ್ಯಾಮೋಹ ಮತ್ತು ಸರ್ಕಾರಿ ಶಾಲೆಗಳ ಬಗ್ಗೆ ನಿರ್ಲಕ್ಷ್ಯ ದೋರಣೆ ಇದೆ. ಇದು ಸಲ್ಲದು. ಸಮಾಜದ ಎಲ್ಲ ವರ್ಗಗಳ ಮಕ್ಕಳು ಸರ್ಕಾರಿ ಶಾಲೆಯಲ್ಲಿ ಶಿಕ್ಷಣ ಪಡೆಯುವಂತಾಗಬೇಕು ಎಂದರು.


ಶಾಲೆಯಲ್ಲಿ ಶಿಕ್ಷಕರ ನಿತ್ಯದ ಪಾಠ-ಪ್ರವಚನಗಳಿಗೆ ಪೂರಕವಾಗಿ ಪೋಷಕರು ತಮ್ಮ ಮಕ್ಕಳನ್ನು ತಯಾರು ಮಾಡಬೇಕು. ಮತ್ತು ಮಕ್ಕಳ ಚಟುವಟಿಕೆಗಳನ್ನು ಸೂಕ್ಷ್ಮವಾಗಿ ಗಮನಿಸಿ ಸಕಾಲಿಕ ಮಾರ್ಗದರ್ಶನ ನೀಡಬೇಕು ಎಂದರು.ಸಮಾಜದ ಯಾವುದೇ ವ್ಯಕ್ತಿ ಶಿಕ್ಷಣದಿಂದ ವಂಚಿತನಾಗಬಾರದೆಂಬ ಕಾರಣಕ್ಕಾಗಿ ಎಲ್ಲರಿಗೂ ಉಚಿತ ಶೈಕ್ಷಣಿಕ ಸೌಲಭ್ಯಗಳನ್ನು ನೀಡಿ ಪ್ರೋತ್ಸಾಹಿಸಲಾಗುತ್ತಿದೆ ಎಂದರು.

ವಿಧಾನಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್ ಅವರು ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರತಿ ವಿದ್ಯಾರ್ಥಿಯೂ ಒಂದಿಲ್ಲೊಂದು ಚಟುವಟಿಕೆಯಲ್ಲಿ ಪ್ರಾವಿಣ್ಯತೆ ಸಾಧಿಸಬೇಕು. ಆ ವಿಶೇಷತೆಯಿಂದಲೇ ವಿದ್ಯಾರ್ಥಿ ಗುರುತಿಸಿಕೊಳ್ಳುವಂತಾಗಬೇಕು ಆಗ ಮಾತ್ರ ಸರ್ಕಾರದ ಶ್ರಮ ಸಾರ್ಥಕವಾಗಲಿದೆ ಎಂದರು.


ಶಾಲಾ ಮಕ್ಕಳಿಗೆ ಸಾಂಕೇತಿಕವಾಗಿ ಪಠ್ಯಪುಸ್ತಕ, ಸಮವಸ್ತ್ರ, ಶೂ-ಸಾಕ್ಸ್‌ಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಹಾನಗರಪಾಲಿಕೆ ಸದಸ್ಯ ಐಡಿಯಲ್ ಗೋಪಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಪಿ.ಎಸ್. ಮಚ್ಛಾಡೋ, ಕ್ಷೇತ್ರಶಿಕ್ಷಣಾಧಿಕಾರಿ ಹಾಲಾನಾಯ್ಕಾ, ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಪೋಷಕರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News