×
Ad

ಲೋಕೋಪಯೋಗಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಹೈಕೋರ್ಟ್‌ನಿಂದ ನೋಟಿಸ್

Update: 2017-06-04 22:05 IST
ಬೆಂಗಳೂರು. ಜೂ.4: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಯುಕ್ತರಾಗಿದ್ದ ವೇಳೆ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಎಂ.ಲಕ್ಷ್ಮೀನಾರಾಯಣ ಅವರಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ. ಈ ಸಂಬಂಧ ನಮ್ಮ ಬೆಂಗಳೂರು ಪ್ರತಿಷ್ಠಾನ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಹಾಗೂ ನ್ಯಾಯಮೂರ್ತಿ ಪಿ.ಎಸ್.ದಿನೇಶ್‌ಕುಮಾರ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿತು.ಲಕ್ಷ್ಮೀನಾರಾಯಣ ವಿರುದ್ಧ ವಿಚಾರಣೆಗೆ ಅನುಮತಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಇಲಾಖೆ ವರದಿ ನೀಡುವಂತೆಯೂ ನ್ಯಾಯಪೀಠ ಸೂಚಿಸಿದೆ. ಪ್ರಕರಣವೇನು?: ಲಕ್ಷ್ಮೀನಾರಾಯಣ ಅವರು ಕೋರಮಂಗಲದ ಜನವಸತಿ ಪ್ರದೇಶದಲ್ಲಿ ಬ್ರೇಕ್ ಫಾಸ್ಟ್ ಕ್ಲಬ್‌ಗೆ ಅನುಮತಿ ದೊರಕಿಸಿಕೊಟ್ಟಿದ್ದಾರೆ. ಈ ಸಂಬಂಧ ಅವರು ಬಿಬಿಎಂಪಿ ಆರೋಗ್ಯ ಅಧಿಕಾರಿಗಳಿಗೆ ಪತ್ರ ಬರೆದು ಸಹಾಯ ಮಾಡಿದ್ದಾರೆ. 40 ಅಡಿ ಅಥವಾ ಅದಕ್ಕೂ ಕಡಿಮೆ ಇರುವ ರಸ್ತೆಗಳಲ್ಲಿ ವಾಣಿಜ್ಯ ಚಟುವಟಿಕೆಗಳಿಗೆ ಅನುಮತಿ ನೀಡುವ ಮೂಲಕ ಪರಿಷ್ಕೃತ ಮಾಸ್ಟರ್ ಪ್ಲಾನ್ 2015ಅನ್ನು ಉಲ್ಲಂಘಿಸಲಾಗಿದೆ ಎಂದು ನಮ್ಮ ಬೆಂಗಳೂರು ಪ್ರತಿಷ್ಠಾನ ಆರೋಪಿಸಿತ್ತು. ಈ ಕುರಿತಂತೆ ಲಕ್ಷ್ಮೀನಾರಾಯಣ ವಿರುದ್ಧ ವಿಚಾರಣೆಗೆ ಅನುಮತಿ ನೀಡುವಂತೆ ಕೋರಿ ಪ್ರತಿಷ್ಠಾನವು 2015ರ ಪೆಬ್ರುವರಿ 27 ನಗರಾಭಿವೃದ್ಧಿ ಇಲಾಖೆಗೆ ಪತ್ರ ಬರೆದಿತ್ತು. ಆದರೆ, ಇದಕ್ಕೆ ಯಾವುದೇ ಉತ್ತರ ಬಂದಿಲ್ಲ ಎಂದು ಆಕ್ಷೇಪಿಸಿ ಈ ಅರ್ಜಿ ಸಲ್ಲಿಸಲಾಗಿದೆ. ಲಕ್ಷ್ಮೀನಾರಾಯಣ ಅವರು ಸದ್ಯ ಲೋಕೋಪಯೋಗಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News