ಅಧಿವೇಶನದ ಬಳಿಕ ಸಂಪುಟ ವಿಸ್ತರಣೆ:ಮುಖ್ಯಮಂತ್ರಿ

Update: 2017-06-06 13:00 GMT

ಬೆಂಗಳೂರು, ಜೂ. 6: ವಿಧಾನ ಮಂಡಲ ಅಧಿವೇಶನದ ಬಳಿಕ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು. ಅಲ್ಲದೆ, ಸಂಪುಟದಲ್ಲಿ ಖಾಲಿ ಇರುವ ಮೂರು ಸ್ಥಾನಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮಂಗಳವಾರ ವಿಧಾನಸೌಧದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಪುಣ್ಯತಿಥಿ ಅಂಗವಾಗಿ ವಿಧಾನಸೌಧದ ಪಶ್ಚಿಮ ದ್ವಾರದಲ್ಲಿನ ಅರಸು ಪುತ್ಥಳಿಗೆ ಸಮೀಪದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಅಧಿವೇಶನದ ಬಳಿಕ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದರು.

ಸಹಕಾರ ಸಚಿವ ಎಚ್.ಎಸ್.ಮಹದೇವಪ್ರಸಾದ್ ಅಕಾಲಿಕ ನಿಧನ, ಅಬಕಾರಿ ಸಚಿವ ಎಚ್.ವೈ.ಮೇಟಿ ರಾಜೀನಾಮೆಯಿಂದ ಎರಡು ಸ್ಥಾನಗಳು ಖಾಲಿಯಾಗಿದ್ದವು. ಇತ್ತೀಚೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಮತ್ತೊಂದು ಅವಧಿಗೆ ಮುಂದುವರೆದಿರುವ ಹಿನ್ನೆಲೆಯಲ್ಲಿ ಡಾ.ಜಿ.ಪರಮೇಶ್ವರ್ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಮೂರು ಸ್ಥಾನಗಳನ್ನು ಭರ್ತಿ ಮಾಡುವ ನಿರೀಕ್ಷೆ ಇದೆ.

ಸಾಮಾಜಿಕ ನ್ಯಾಯದ ಹರಿಕಾರ:ದೇವರಾಜ ಅರಸು ಅವರು ಸಾಮಾಜಿಕ ನ್ಯಾಯದ ಹರಿಕಾರರಾಗಿದ್ದರು. ಧ್ವನಿ ಇಲ್ಲದವರಿಗೆ ಧ್ವನಿಯಾಗಿ, ಶೋಷಿತರು, ಹಿಂದುಳಿದವರು, ದಲಿತರ ಏಳ್ಗೆಗೆ ಅಪಾರವಾಗಿ ಶ್ರಮಿಸಿದ್ದರು ಎಂದು ಸಿದ್ದರಾಮಯ್ಯ ಸ್ಮರಿಸಿದರು.

ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ, ವಿಧಾನ ಪರಿಷತ್‌ನ ಸರಕಾರಿ ಮುಖ್ಯ ಸಚೇತಕ ಐವಾನ್ ಡಿಸೋಜ, ಮಾಜಿ ಸಚಿವ ಎಂ.ವಿ.ರಾಜಶೇಖರನ್ ಸೇರಿದಂತೆ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News