×
Ad

ಜೂ.12: ಕರ್ನಾಟಕ ಬಂದ್‌

Update: 2017-06-10 20:11 IST

ಬೆಂಗಳೂರು, ಜೂ. 10: ಕೋಲಾರ-ಚಿಕ್ಕಬಳ್ಳಾಪುರ ಸೇರಿದಂತೆ ಬಯಲು ಸೀಮೆ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ಯೋಜನೆ ಜಾರಿಗೆ ಆಗ್ರಹಿಸಿ, ಮೇಕೆದಾಟು ಯೋಜನೆ ಜಾರಿ, ಮಹಾದಾಯಿ ವಿವಾದ ಪರಿಹಾರಕ್ಕಾಗಿ ಆಗ್ರಹಿಸಿ ಜೂ.12 ರಂದು ಕನ್ನಡ ಚಳವಳಿ ಒಕ್ಕೂಟದಿಂದ ಕರ್ನಾಟಕ ಬಂದ್‌ಗೆ ಕರೆ ನೀಡಿದೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಒಕ್ಕೂಟದ ಅಧ್ಯಕ್ಷ ವಾಟಾಳ್‌ನಾಗರಾಜ್, ಸದಸ್ಯರಾದ ಅಧ್ಯಕ್ಷ ಸಾ.ರಾ.ಗೋವಿಂದು, ಕೆ.ಆರ್.ಕುಮಾರ್, ಪ್ರವೀಣ್ ಶೆಟ್ಟಿ, ಮಂಜುನಾಥ್ ದೇವ್ ಸೇರಿದಂತೆ ನಾನಾ ಕನ್ನಡ ಪರ ಸಂಘಟನೆಗಳು ಪತ್ರಿಕಾಗೋಷ್ಠಿ ನಡೆಸಿ ಕರ್ನಾಟಕ ಬಂದ್ ಮಾಡಿಯೇ ತೀರುತ್ತೇವೆ ಎಂದು ಹೇಳಿದರು.

ವಾಟಾಳ್ ನಾಗರಾಜ್ ಮಾತನಾಡಿ, ಉತ್ತರ ಕರ್ನಾಟಕ ಭಾಗದ ಜನರ ಕುಡಿಯುವ ನೀರಿನ ಸಮಸ್ಯ ಬಗೆಹರಿಸಲು ಮಹಾದಾಯಿ ಯೋಜನೆ ಜಾರಿಗೆ ಆಗ್ರಹಿಸಿ ಎರಡು ವರ್ಷಗಳಿಂದ ನಿರಂತರ ಹೋರಾಟ ಮಾಡುತ್ತಿದ್ದಾರೆ. ಈ ಬಗ್ಗೆ ಕೇಂದ್ರ ಸರಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಗೋವಾ, ಮಹಾರಾಷ್ಟ್ರ, ಕರ್ನಾಟಕದ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಿ ಪ್ರಧಾನಿ ಅವರೇ ಸಮಸ್ಯೆ ಬಗೆಹರಿಸಬಹುದಿತ್ತು. ಆದರೆ ಬಿಜೆಪಿ ಸಂಸದರಾಗಲಿ ಪ್ರಧಾನಿಯನ್ನು ಭೇಟಿಯಾಗಿ ಈ ಕುರಿತು ಮಾತುಕತೆ ನಡೆಸಿಲ್ಲ ಎಂದು ಕಿಡಿಕಾರಿದರು.

ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಬಯಲು ಸೀಮೆ ಜಿಲ್ಲೆಗಳ ಜನ ಶಾಶ್ವತ ನೀರಿಗೆ ಆಗ್ರಹಿಸಿ ಒಂದು ವರ್ಷದಿಂದ ಸತ್ಯಾಗ್ರಹ ನಡೆಸುತ್ತಿದ್ದರೂ ಸರಕಾರ ಮೂಕ ಪ್ರೇಕ್ಷಕನಂತೆ ವರ್ತಿಸುತ್ತಿದೆ. ಅದೇ ರೀತಿ ಮೇಕೆದಾಟು ಯೋಜನೆಗೆ ಎಲ್ಲಾ ರೂಪುರೇಷೆ ಸಿದ್ಧಗೊಂಡಿದ್ದರೂ ಯೋಜನೆ ಪ್ರಾರಂಭಿಸಲು ಸರಕಾರ ಮೀನಾಮೇಷ ಎಣಿಸುತ್ತಿದೆ. ಹಾಗೂ ಸಂಕಷ್ಟಕ್ಕೆ ಸಿಲುಕಿರುವ ಅನ್ನದಾತನ ಸಾಲ ಮನ್ನಾ ಮಾಡಲು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಬೃಹನ್ನಾಟಕವಾಡುತ್ತಿವೆ ಎಂದರು.

ಕೇಂದ್ರ ಸರಕಾರ ಸ್ವಾಮ್ಯದ ಎಲ್ಲಾ ಕಾರ್ಖಾನೆಗಳನ್ನು ಮುಚ್ಚಲಾಗಿದೆ. ಈಗ ಕೆಜಿಎ್ನಲ್ಲಿರುವ ಬೆಮೆಲ್ ಕಾರ್ಖಾನೆಯನ್ನೂ ಖಾಸಗಿಯವರಿಗೆ ಮಾರಲು ಕೇಂದ್ರ ಸರಕಾರ ಮುಂದಾಗಿದೆ. ಈ ಎಲ್ಲಾ ಜನವಿರೋಧಿ ಧೋರಣೆಗಳನ್ನು ಖಂಡಿಸಿ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದ್ದು, ಸುಮಾರು 2 ಸಾವಿರ ಸಂಘಟನೆಗಳು ಬೆಂಬಲ ನೀಡಲಿವೆ ಎಂದರು.

ಬಂದ್ ಹಿನ್ನೆಲೆಯಲ್ಲಿ ಜೂ.12 ರಂದು ಬೆಳಗ್ಗೆ 11ಕ್ಕೆ ನಗರದ ಪುರಭವನದಿಂದ ಬೃಹತ್ ಮೆರವಣಿಗೆ ಮೂಲಕ ವಿಧಾನಸೌಧ ಮುತ್ತಿಗೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಂದು 6 ರಿಂದ ಸಂಜೆ 6ರವರೆಗೆ ಬಂದ್ ನಡೆಯಲಿದ್ದು, ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಕೋರಿದರು.

ಬಂದ್‌ಗೆ ಬೆಂಬಲವಿಲ್ಲ: ಜೂ.12 ರಂದು ರಾಜ್ಯಾದ್ಯಂತ ಕರೆ ನೀಡಿರುವ ಬಂದ್‌ಗೆ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಮೆಟ್ರೋ, ಹೊಟೇಲ್ ಮಾಲಕರ ಸಂಘ ಸೇರಿದಂತೆ ಹಲವು ಕಾರ್ಮಿಕ ಸಂಘಟನೆಗಳು ಬಂದ್‌ಗೆ ಬೆಂಬಲ ನೀಡುತ್ತಿಲ್ಲ ಎಂದು ಪ್ರಕಟಿಸಿವೆ. ಇದಲ್ಲದೆ ಪೆಟ್ರೋಲ್ ಬಂಕ್‌ಗಳು ಎಂದಿನಂತೆ ತೆರೆದಿರುತ್ತವೆ. ಆಟೋಗಳು ರಸ್ತೆಗಿಳಿದು ಓಡಾಡಲಿವೆ. ಕರ್ನಾಟಕ ರಕ್ಷಣಾ ವೇದಿಕೆ(ಸ್ವಾಭಿಮಾನ), ಕರ್ನಾಟಕ ಕಾರ್ಮಿಕರ ವೇದಿಕೆ, ಕರ್ನಾಟಕ ಕ್ರಾಂತಿರಂಗ, ಜಯ ಭಾರತ ರಕ್ಷಣಾ ವೇದಿಕೆ, ಕಸ್ತೂರಿ ಕರ್ನಾಟಕ ಜನಪರ ವೇದಿಕೆ, ಕರ್ನಾಟಕ ಯುವ ರಕ್ಷಣಾ ವೇದಿಕೆ, ಕರ್ನಾಟಕ ರಕ್ಷಣಾ ಸೇನೆ ಸೇರಿದಂತೆ ಅನೇಕ ಕನ್ನಡಪರ ಸಂಘಟನೆಗಳು ಪ್ರತ್ಯೇಕ ಸುದ್ದಿಗೋಷ್ಠಿ ನಡೆಸಿ ಬಂದ್‌ ಅನ್ನು ವಿರೋಧಿಸಿ, ಬಂದ್‌ಗೆ ನಮ್ಮ ಬೆಂಬಲವಿಲ್ಲ ಎಂದು ಸ್ಪಷ್ಟಪಡಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News