ಸ್ವಚ್ಛತಾಕಾರ್ಯ ಸ್ಥಗಿತಗೊಳಿಸುವುದಾಗಿ ಸರಕಾರಕ್ಕೆ ಪೌರಕಾರ್ಮಿಕರಿಂದ ಎಚ್ಚರಿಕೆ

Update: 2017-06-12 14:54 GMT

ಬೆಂಗಳೂರು, ಜೂ.12: ಗುತ್ತಿಗೆ ಆಧಾರದ ಮೇಲೆ ನಗರ ಪಾಲಿಕೆ, ನಗರಸಭೆ, ಪುರಸಭೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಖಾಯಂಗೊಳಿಸಬೇಕು ಮತ್ತು ಗುತ್ತಿಗೆ ಪದ್ಧತಿಯನ್ನು ಕೈಬಿಡಬೇಕು ಎಂದು ಆಗ್ರಹಿಸಿ ನಗರದಲ್ಲಿ ಪೌರಕಾರ್ಮಿಕರು ಬೃಹತ್ ರ್ಯಾಲಿ ನಡೆಸಿದರು.

ಸೋಮವಾರ ನಗರದ ಬನ್ನಪ್ಪ ಪಾರ್ಕ್‌ನಲ್ಲಿ ಆಯೋಜಿಸಿದ್ದ ರ್ಯಾಲಿಯಲ್ಲಿ ಬಿಬಿಎಂಪಿ ಪಾಲಿಕೆ, ಮಂಗಳೂರು, ಮೈಸೂರು, ಹುಬ್ಬಳ್ಳಿ ಧಾರವಾಡ ಪಾಲಿಕೆಗಳ ಸಾವಿರಾರು ಪೌರಕಾರ್ಮಿಕರು ಬೆಳಗ್ಗೆಯಿಂದಲೇ ಸ್ವಚ್ಛತಾಕಾರ್ಯವನ್ನು ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರದಲ್ಲಿ ಪಾಲ್ಗೊಂಡು ಕೂಡಲೆ ಖಾಯಂಗೊಳಿಸುವಂತೆ ಆಗ್ರಹಿಸಿದರು.

 ಪೌರಕಾರ್ಮಿಕರ ಸೇವೆಯನ್ನು ಖಾಯಂಗೊಳಿಸಲು ಕೂಡಲೆ ಮುಂದಾಗದಿದ್ದರೆ ಸ್ವಚ್ಛಾತಾ ಕಾರ್ಯವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿ ಮುಷ್ಕರದ ತೀವ್ರತೆಯನ್ನು ಹೆಚ್ಚಿಸಲಾಗುವುದು ಎಂದು ಸರಕಾರಕ್ಕೆ ಎಚ್ಚರಿಕೆ ನೀಡಿದರು.

ಸಫಾಯಿ ಕರ್ಮಚಾರಿ ಆಯೋಗದ ಮಾಜಿ ಅಧ್ಯಕ್ಷ ನಾರಾಯಣ ಮಾತನಾಡಿ, ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರುವ ಮೊದಲು ಚುನಾವಣೆಯ ಪ್ರಣಾಳಿಕೆಯಲ್ಲಿ ಗುತ್ತಿಗೆ ಪೌರಕಾರ್ಮಿಕರ ಹುದ್ದೆಯನ್ನು ಖಾಯಂಗೊಳಿಸುವುದಾಗಿ ಆಶ್ವಾಸನೆ ನೀಡಿತ್ತು. ಅಲ್ಲದೆ ಹೈ ಕೋರ್ಟ್ ಗುತ್ತಿಗೆ ಪದ್ಧತಿಯನ್ನು ರದ್ದುಪಡಿಸಿ ಹಾಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಪೌರಕಾರ್ಮಿಕರ ಹುದ್ದೆಯನ್ನು ಖಾಯಂಗೊಳಿಸುವಂತೆ ಸೂಚನೆ ನೀಡಿದೆ. ಆದರೆ ಈವರೆಗೆ ಅವು ಕಾರ್ಯಗತಗೊಂಡಿಲ್ಲ ಎಂದು ಆರೋಪಿಸಿದರು.

ಅಹಿಂದ ಮತ್ತು ಸಾಮಾಜಿಕ ನ್ಯಾಯದ ಪ್ರತಿಪಾದಕರಂತೆ ಬಿಂಬಿಸಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದಂತೆ ನಡೆಯಬೇಕು. ಮಾರ್ಚ್ ಅಂತ್ಯದೊಳಗೆ ಗುತ್ತಿಗೆ ಪೌರಕಾರ್ಮಿಕರನ್ನು ಖಾಯಂಗೊಳಿಸಲಾಗುವುದು ಎಂದು ಭರವಸೆ ನೀಡಿದ್ದರು. ಆದರೆ ನೀಡಿದ್ದ ಗಡುವು ಮುಗಿದು ಎರಡು ತಿಂಗಳಾದರೂ ಖಾಯಂಗೊಳಿಸುವ ಪ್ರಕ್ರಿಯೆ ಆರಂಭವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೂಡಲೆ ರಾಜ್ಯದಲ್ಲಿನ 35 ಸಾವಿರಕ್ಕೂ ಅಧಿಕ ಗುತ್ತಿಗೆ ಪೌರ ಕಾರ್ಮಿಕರನ್ನು ಖಾಯಂಗೊಳಿಸಬೇಕು ಸ್ವಚ್ಛತಾ ಗುತ್ತಿಗೆ ಪದ್ಧತಿಯನ್ನು ಸಂಪೂರ್ಣವಾಗಿ ರದ್ದುಪಡಿಸಬೇಕು. ಸ್ವಚ್ಛತಾ ಗುತ್ತಿಗೆ ಪದ್ಧತಿಯಲ್ಲಿ ಇಎಸ್‌ಐ ಮತ್ತು ಪಿಎಫ್ ವಿಚಾರದಲ್ಲಿ ಕೋಟ್ಯಂತರ ರೂ. ಹಗರಣ ನಡೆದಿದ್ದು ಈ ಬಗ್ಗೆಯೂ ರಾಜ್ಯ ಸರಕಾರ ಸಂಪೂರ್ಣ ತನಿಖೆಗೊಳಪಡಿಸಬೇಕು ಎಂದು ಆಗ್ರಹಿಸಿದರು.

ನಮ್ಮ ಬೇಡಿಕೆಗಳನ್ನು ಈಡೇರಿಸುವವರಿಗೂ ಪ್ರತಿಭಟನೆಯನ್ನು ಕೈಬಿಡುವುದಿಲ್ಲ. ಅಲ್ಲಿಯವರೆಗೂ ಸ್ವಚ್ಛತಾ ಕಾರ್ಯವನ್ನು ಸ್ಥಗಿತಗೊಳಿಸಲಾಗುವುದು. ಇಂದಿನಿಂದ ಆರಂಭವಾಗಿರುವ ಅನಿರ್ದಿಷ್ಟಾವಧಿ ಮುಷ್ಕರದಲ್ಲಿ ಪ್ರತಿದಿನ ಐದು ಜನರಂತೆ ಉಪವಾಸ ಸತ್ಯಾಗ್ರಹ ಆರಂಭಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

 ನಗರಕ್ಕೆ ತಟ್ಟಿದ ಕಸದ ಬಿಸಿ

ಪೌರ ಕಾರ್ಮಿಕರು ಖಾಯಾಮಾತಿಗೆ ಆಗ್ರಹಿಸಿ ಕರ್ತವ್ಯ ಬಹಿಷ್ಕರಿಸಿ ಅನಿದಿಷ್ಟಾವಧಿ ಮುಷ್ಕರ ಆರಂಭಿಸಿರುವ ಹಿನ್ನೆಲೆಯಲ್ಲಿ ನಗರದ ಹಲವು ವಾರ್ಡ್‌ಗಳಲ್ಲಿ ಕಸದ ಸಮಸ್ಯೆ ತಲೆದೋರಿದೆ. ಸಾರ್ವಜನಿಕ ಆಸ್ಪತ್ರೆಗಳು ಕಸದ ತೊಟ್ಟಿಗಳಾಗಿವೆ. ಬಡಾವಣೆಗಳ ಪ್ರಮುಖ ರಸ್ತೆೆಗಳಲ್ಲಿ ಕಸ ಸಂಗ್ರಹಣೆ ಹೆಚ್ಚಾಗಿದೆ.

ಪೌರಕಾರ್ಮಿಕರ ಮುಷ್ಕರದಿಂದ ನಗರದ ಹಲವು ವಾರ್ಡ್‌ಗಳಲ್ಲಿ ಕಸ ವಿಲೇವಾರಿ ನಡೆದಿಲ್ಲ. ಪ್ರತಿಭಟನೆಯಲ್ಲಿ ಪಾಲ್ಗೊಳ್ಳದೇ ಇರುವ ಪೌರ ಕಾರ್ಮಿಕರಿಂದ ತ್ಯಾಜ್ಯ ವಿಲೇವಾರಿ ಮಾಡಲು ಸೂಚಿಸಲಾಗುವುದು ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.

ಗುತ್ತಿಗೆ ಪೌರಕಾರ್ಮಿಕ ಖಾಯಾಮಾತಿ ಕುರಿತು ಸರಕಾರದ ಮಟ್ಟದಲ್ಲಿ ನಿರ್ಧಾರವಾಗಲಿದೆ. ಪೌರಕಾರ್ಮಿಕರ ನ್ಯಾಯಯುತ ಬೇಡಿಕೆಗಳು ಶೀಘ್ರದಲ್ಲೇ ಇತ್ಯಾರ್ಥವಾಗಲಿವೆ.

-ಮಂಜುನಾಥ್ ಪ್ರಸಾದ್, ಬಿಬಿಎಂಪಿ ಆಯುಕ್ತ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News