ಎಸ್ಸಿ, ಎಸ್ಟಿ ದೌರ್ಜನ್ಯ ಪ್ರಕರಣ ವಿಲೇವಾರಿಗೆ 8 ವಿಶೇಷ ನ್ಯಾಯಾಲಯಗಳ ಸ್ಥಾಪನೆ: ಎಚ್.ಆಂಜನೇಯ
ಬೆಂಗಳೂರು, ಜೂ.12: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ಕಾಯ್ದೆ-1986ರಡಿ ದಾಖಲಾಗುವ ಪ್ರಕರಣಗಳನ್ನು ವಿಲೇವಾರಿ ಮಾಡಲು ಎಂಟು ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಆಂಜನೆೀಯ ಹೇಳಿದ್ದಾರೆ.
ಸೋಮವಾರ ವಿಧಾನ ಪರಿಷತ್‌ನ ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಕೆ.ಅಬ್ದುಲ್ ಜಬ್ಬಾರ್ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಶೇ.5ರ ಪ್ರಮಾಣದಲ್ಲಿ ಶಿಕ್ಷೆಯಾಗಿದೆ ಎಂದು ಹೇಳಿದರು.
ದೌರ್ಜನ್ಯಕ್ಕೊಳಗಾದ ಸಂತ್ರಸ್ತರು ಹಾಗೂ ಸಾಕ್ಷಿಗಳನ್ನು ನ್ಯಾಯಾಲಯದ ವಿಚಾರಣೆಗೆ ಹಾಗೂ ತನಿಖಾ ಸಮಯದಲ್ಲಿ ಹಾಜರಾಗಲು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಯಾಣ ಭತ್ತೆ, ದಿನ ಭತ್ತೆ, ಆಹಾರ ಭತ್ತೆ ಮತ್ತು ವಿಶೇಷ ವೈದ್ಯಕೀಯ ವೆಚ್ಚಗಳನ್ನು ಪಾವತಿಸಿ ಪ್ರೋತ್ಸಾಹಿಸಲಾಗುತ್ತಿದೆ ಎಂದು ಹೇಳಿದರು. ದೌರ್ಜನ್ಯ ಪ್ರಕರಣಗಳ ತನಿಖೆಯ ಜವಾಬ್ದಾರಿಯನ್ನು ಡಿವೈಎಸ್‌ಪಿ ಮಟ್ಟದ ಅಧಿಕಾರಿಗಳಿಗೆ ವಹಿಸಲಾಗಿದೆ. ಹಾಗೂ 136 ದೌರ್ಜನ್ಯ ಪ್ರಕರಣಗಳಲ್ಲಿ 33 ಪ್ರಕರಣಗಳನ್ನು ಮೇಲ್ಮನವಿ ಸಲ್ಲಿಸಲಾಗಿದೆ ಎಂದು ಹೇಳಿದರು.
ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಹಾಗೂ ಇತರೆ ಹಿಂದುಳಿದ ವರ್ಗಗಳ ಅಧಿನಿಯಮ 2011ರ ‘5ಎ’ ಪ್ರಕಾರ ಸುಳ್ಳು ಜಾತಿ ಪ್ರಮಾಣ ಪತ್ರ ಅಥವಾ ಆದಾಯ ಮತ್ತು ಜಾತಿ ಪ್ರಮಾಣ ಪತ್ರ ಪಡೆದವರಿಗೆ ಆರು ತಿಂಗಳಿಂದ ಎರಡು ವರ್ಷಗಳವರೆಗೆ ಕಾರಾಗೃಹ ವಾಸ ಹಾಗೂ ಒಂದು ಸಾವಿರ ರೂ.ದಂಡ ವಿಧಿಸಲಾಗುವುದು ಎಂದು ತಿಳಿಸಿದರು.