ಎಚ್‌ಐವಿ ಪೀಡಿತರಿಗೆ ಉಚಿತ ಚಿಕಿತ್ಸೆ:ಶರಣಪ್ರಕಾಶ್ ಪಾಟೀಲ್

Update: 2017-06-14 14:53 GMT

ಬೆಂಗಳೂರು, ಜೂ.14: ಇಂದಿನಿಂದ ಸರಕಾರಿ ಆಸ್ಪತ್ರೆಗಳಲ್ಲಿ ಎಚ್‌ಐವಿ ಪೀಡಿತರಿಗೆ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಇಂದಿಲ್ಲಿ ಪ್ರಕಟಿಸಿದರು.

ಬುಧವಾರ ನಗರದ ವಿಕ್ಟೋರಿಯಾ ಆಸ್ಪತ್ರೆಯ ಸಭಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‌ಷನ್ ಸೊಸೈಟಿ ಮತ್ತು ಬೆಂಗಳೂರು ವೈದ್ಯಕೀಯ ಮಹಾ ವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆವತಿಯಿಂದ ಹಮ್ಮಿಕೊಂಡಿದ್ದ ‘ವಿಶ್ವ ರಕ್ತದಾನಿಗಳ ದಿನಾಚರಣೆ’ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿದರು.

ಈ ಹಿಂದೆ ಬಿಪಿಎಲ್ ಪಡಿತರಚೀಟಿ ಹೊಂದಿರುವವರಿಗೆ ಶೇ.50ರ ರಿಯಾಯಿತಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಚಿಕಿತ್ಸೆಯನ್ನು ಸಂಪೂರ್ಣವಾಗಿ ಉಚಿತ ಮಾಡಲಾಗಿದೆ. ವೈದ್ಯರು ಈ ಬಗ್ಗೆ ಗಮನಹರಿಸಿ ಎಚ್‌ಐವಿ ಬಾಧಿತರಿಗೆ ಉಚಿತ ಚಿಕಿತ್ಸೆ ನೀಡುವಂತೆ ಇದೇ ವೇಳೆ ಶರಣಪ್ರಕಾಶ್ ಪಾಟೀಲ್ ಸೂಚಿಸಿದರು.

 ರಕ್ತದಾನ ಮಾಡುವುದರಿಂದ ತೊಂದರೆ ಎದುರಾಗಲಿದೆ ಎನ್ನುವ ಆತಂಕ ಜನರಲ್ಲಿದ್ದು, ಅದನ್ನು ದೂರ ಮಾಡುವ ನಿಟ್ಟಿನಲ್ಲಿ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಬೇಕೆಂದ ಅವರು, ರಕ್ತದಾನ ಮಾಡುವುದರಿಂದ ಆರೋಗ್ಯದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಬದಲಾಗಿ ಮನುಷ್ಯ ಇನ್ನಷ್ಟು ಆರೋಗ್ಯವಾಗುವುದರ ಜತೆಗೆ ಮತ್ತೊಬ್ಬರ ಜೀವ ಉಳಿಸಲು ಸಹಕಾರಿಯಾಗಲಿದೆ ಎಂದರು.

ಬಿಬಿಎಂಪಿ ಮೇಯರ್ ಜಿ.ಪದ್ಮಾವತಿ ಮಾತನಾಡಿ, ಮಾನವೀಯತೆ ಮರೆಯುವ ಜನರ ಸಂಖ್ಯೆ ಹೆಚ್ಚಾಗುತ್ತಿದ್ದು, ಅಪಘಾತದಂತಹ ಸಂದರ್ಭದಲ್ಲಿ ರಕ್ತದಾನ ಮಾಡುವ ಮೂಲಕ ಜನರ ಪ್ರಾಣ ಉಳಿಸಲು ಮುಂದಾಗಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಸದೀಯ ಕಾರ್ಯದರ್ಶಿ ಡಾ.ಉಮೇಶ್ ಜಿ.ಜಾದವ್, ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಭಿಯಾನ ನಿರ್ದೇಶಕ ಡಾ.ರತನ್ ತೇಲ್ಕರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ದೇಶಕ ಡಾ.ಪಿ.ನಟರಾಜ್, ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯದ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ.ಸಚ್ಚಿದಾನಂದ, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‌ಷನ್ ಸೊಸೈಟಿಯ ಯೋಜನಾ ನಿರ್ದೇಶಕಿ ಡಾ. ಶಮ್ಲಾ ಇಕ್ಬಾಲ್, ಉಪನಿರ್ದೇಶಕ ಡಾ.ಕೆ.ಎಸ್.ಪ್ರಕಾಶ್ ಸೇರಿ ಪ್ರಮುಖರು ಹಾಜರಿದ್ದರು.

ಸಾರ್ವಜನಿಕರಿಗೆ ಅನುಕೂಲವಾಗುವ ಜತೆಗೆ ಬಡ ಮಕ್ಕಳಿಗೆ ವೈದ್ಯಕೀಯ ಚಿಕಿತ್ಸೆ ಸಿಗಬೇಕು ಎನ್ನುವ ಕಾರಣದಿಂದ ಬಡ ಪ್ರತಿಭಾವಂತ ಮಕ್ಕಳಿಗೆ ಜಿಲ್ಲೆಗೊಂದು ಸರಕಾರಿ ವೈದ್ಯಕೀಯ ಕಾಲೇಜು ಆರಂಭಿಸಲು ಸರಕಾರ ಮುಂದಾಗಿದೆ. ಕೆಲವು ಜಿಲ್ಲೆಗಳಲ್ಲಿ ಈಗಾಗಲೇ ಕಾರ್ಯನಿರ್ವಹಿಸುತ್ತಿದ್ದು, ಇನ್ನುಳಿದ ಜಿಲ್ಲೆಗಳಲ್ಲಿ ಹಂತ ಹಂತವಾಗಿ ಕೈಗೆತ್ತಿಕೊಳ್ಳಲಾಗುವುದು.

-ಶರಣಪ್ರಕಾಶ್ ಪಾಟೀಲ್, ವೈದ್ಯಕೀಯ ಶಿಕ್ಷಣ ಸಚಿವ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News