ರಾಮಕೃಷ್ಣರನ್ನು ರಾಷ್ಟ್ರಪತಿ ಅಭ್ಯರ್ಥಿಯಾಗಿ ಪರಿಗಣಿಸಲು ಆಗ್ರಹ
ಬೆಂಗಳೂರು, ಜೂ. 15: ಮುಂದಿನ ದಿನಗಳಲ್ಲಿ ನಡೆಯಲಿರುವ ರಾಷ್ಟ್ರಪತಿ ಚುನಾವಣೆಯಲ್ಲಿ ಹಲವು ಹೈಕೋರ್ಟ್‌ಗಳಲ್ಲಿ ಮುಖ್ಯನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿರುವ ನಿವೃತ್ತ ನ್ಯಾಯಮೂರ್ತಿ ಎಂ.ರಾಮಕೃಷ್ಣರನ್ನು ಅಭ್ಯರ್ಥಿಯಾಗಿ ಪರಿಗಣಿಸಬೇಕು ಎಂದು ಅಖಿಲ ಭಾರತ ವಕೀಲರ ಸಂಘ ಆಗ್ರಹಿಸಿದೆ.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಭಕ್ತವತ್ಸಲ, ರಾಷ್ಟ್ರಪತಿ ಸ್ಥಾನಕ್ಕೆ ಆಯ್ಕೆ ಮಾಡುವವರು ಪಕ್ಷಾತೀತವಾಗಿರಬೇಕು, ಎಲ್ಲ ಜಾತಿ, ಧರ್ಮ ಸೇರಿದಂತೆ ಎಲ್ಲರನ್ನೂ ಸಮಾನವಾಗಿ ಕಾಣುವಂತವರಾಗಿರಬೇಕು. ಹೀಗಾಗಿ ದೇಶದ ಮೊದಲ ಪ್ರಜೆ ಆಯ್ಕೆ ವಿಚಾರದಲ್ಲಿ ಪ್ರಾಮಾಣಿಕವಾದ, ಯಾವುದೇ ಪಕ್ಷದಡಿ ಗುರುತಿಸಿಕೊಳ್ಳದ ವ್ಯಕ್ತಿಯನ್ನು ಎಲ್ಲರೂ ಬೆಂಬಲಿಸಬೇಕು ಎಂದು ಹೇಳಿದರು.
ರಾಮಕೃಷ್ಣ ಅವರು ಮೈಸೂರು ಜಿಲ್ಲಾ ನ್ಯಾಯಾಧೀಶರಾಗಿ ಆಯ್ಕೆಯಾಗಿ, ಕರ್ನಾಟಕ ಹೈಕೋರ್ಟ್, ಜಮ್ಮು ಮತ್ತು ಕಾಶ್ಮೀರದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದಾರೆ. ಈ ನಿಟ್ಟಿನಲ್ಲಿ ರಾಮಕೃಷ್ಣ ರಾಷ್ಟ್ರಪತಿ ಅಭ್ಯರ್ಥಿ ಸ್ಥಾನಕ್ಕೆ ಸೂಕ್ತ ವ್ಯಕ್ತಿಯಾಗಿದ್ದಾರೆ. ಆದುದರಿಂದ ಎಲ್ಲ ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳು ಇವರನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.