×
Ad

ಪತ್ನಿಯ ಮೇಲೆಯೇ ಅತ್ಯಾಚಾರ: ಆರೋಪ

Update: 2017-06-17 21:36 IST

ಬೆಂಗಳೂರು, ಜೂ.17: ಪತಿಯೋರ್ವ ತನ್ನ ಪತ್ನಿಯ ಮೇಲೆಯೇ ಅತ್ಯಾಚಾರ ಎಸಗಿ ನಡುರಸ್ತೆಯಲ್ಲಿ ಬಿಟ್ಟು ಹೋಗಿರುವ ಆರೋಪ ಸಂಬಂಧ ಇಲ್ಲಿನ ಭಾರತೀನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೊಕದ್ದಮೆ ದಾಖಲಾಗಿದೆ. ಭಾರತೀನಗರದ ಫೈಝಲ್ ಬಂಧಿತ ಆರೋಪಿ ಎಂದು ತಿಳಿದುಬಂದಿದೆ.

ಪ್ರಕರಣದ ವಿವರ: ಆರೋಪಿ ಫೈಝಲ್ ಜೂ.11ರಂದು ಶಿವಾಜಿನಗರದ ಬಂಬೂ ಬಜಾರ್‌ನಲ್ಲಿ ತನ್ನ ಪತ್ನಿಯ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿ, ರಸ್ತೆ ಸಮೀಪ ಆಕೆಯನ್ನು ಬಿಟ್ಟು ಹೋಗಿದ್ದಾನೆ ಎನ್ನಲಾಗಿದೆ.
ಅತ್ಯಾಚಾರಕ್ಕೊಳಗಾದ 34 ವರ್ಷದ ಸಂತ್ರಸ್ತೆಯು ಚೇತರಿಸಲಾಗದೆ ರಸ್ತೆ ಮಧ್ಯೆ ಬಿದ್ದು ಒದ್ದಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ವಿಚಾರ ತಿಳಿಸಿದ್ದಾರೆ. ಪೊಲೀಸರು ಸಂತ್ರಸ್ತೆಯನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ವೈದ್ಯಕೀಯ ಪರೀಕ್ಷೆಯಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ನಡೆದಿರುವುದು ಬೆಳಕಿಗೆ ಬಂದಿದೆ. ಕೃತ್ಯ ನಡೆದ ನಾಲ್ಕೈದು ದಿನಗಳ ಬಳಿಕ ಪ್ರಕರಣ ಬೆಳಕಿಗೆ ಬಂದಿದ್ದು, ಮಹಿಳೆ ರಮಝಾನ್ ಉಪವಾಸ ಇರುವ ಕಾರಣ ದೂರು ನೀಡಲು ಹಿಂದೇಟು ಹಾಕಿದ್ದಾಳೆ. ಈ ಬಗ್ಗೆ ಪೊಲೀಸರು ವಿಚಾರಿಸಿದಾಗ ಕೃತ್ಯದ ಬಗ್ಗೆ ತಿಳಿಸಿದ್ದಾರೆ.

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿ ಕತ್ಯ ಎಸಗಿದ್ದಾನೆ ಎಂದು ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ. ಅತ್ಯಾಚಾರದಿಂದ ಆಘಾತಕ್ಕೊಳಗಾಗಿರುವ ಮಹಿಳೆ ಪೂರ್ಣಪ್ರಮಾಣದಲ್ಲಿ ಚೇತರಿಸಿಕೊಂಡ ಬಳಿಕ ಈ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News