ಜೂನ್ 21; 3ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ
ಶಿವಮೊಗ್ಗ,ಜೂ.18: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಮಹಾನಗರಪಾಲಿಕೆ ಹಾಗೂ ನಗರದ ವಿವಿಧ ಯೋಗ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಜೂನ್ 21ರಂದು ಬೆಳಿಗ್ಗೆ 7ಗಂಟೆಯಿಂದ ನಗರದ ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ 3ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಏರ್ಪಡಿಸಲಾಗಿದೆ.
ಈ ಕಾರ್ಯಕ್ರಮವನ್ನು ಕರ್ನಾಟಕ ವಿಧಾನ ಪರಿಷತ್ ಸಭಾಪತಿಗಳಾದ ಡಿ.ಹೆಚ್.ಶಂಕರಮೂರ್ತಿ ಅವರ ಉಪಸ್ಥಿತಿಯಲ್ಲಿ ಕಂದಾಯ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕಾಗೋಡು ತಿಮ್ಮಪ್ಪ ಅವರು ಉದ್ಘಾಟಿಸುವರು. ಶಾಸಕ ಕೆ.ಬಿ.ಪ್ರಸನ್ನಕುಮಾರ್ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ವಿಧಾನ ಪರಿಷತ್ತಿನ ವಿರೋಧಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ, ವಿಧಾನ ಪರಿಷತ್ತಿನ ವಿರೋಧಪಕ್ಷದ ಮುಖ್ಯ ಸಚೇತಕ ಕ್ಯಾ.ಗಣೇಶ್ ಕಾರ್ಣಿಕ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಜ್ಯೋತಿ ಎಸ್.ಕುಮಾರ್ ಸೇರಿದಂತೆ ಜಿಲ್ಲೆಯ ಎಲ್ಲಾ ಶಾಸಕರು, ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರು ಹಾಗೂ ಚುನಾಯಿತ ಪ್ರತಿನಿಧಿಗಳು ಆಗಮಿಸುವರು.
ಜಿಲ್ಲಾಧಿಕಾರಿ ಡಾ.ಎಂ.ಲೋಕೇಶ್, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ರಾಕೇಶ್‌ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ ಖರೆ ಹಾಗೂ ಮಹಾನಗರಪಾಲಿಕೆ ಆಯುಕ್ತ ಮುಲ್ಲೈ ಮುಹಿಲನ್ ಎಂ.ಪಿ. ಹಾಗೂ ಜಿಲ್ಲಾ ಆಯುಷ್ ಅಧಿಕಾರಿ ಡಾ.ಹರ್ಷಪುತ್ರಾಯ ಉಪಸ್ಥಿತರಿರುವರು.
ಈ ಕಾರ್ಯಕ್ರಮದಲ್ಲಿ ಯೋಗ ಪ್ರಾತ್ಯಕ್ಷಿಕೆ, ಮೈಸೂರಿನ ಮಹರ್ಷಿ ನಾಗರಾಜ ಸೂರ್ಯನಾರಾಯಣ ಪಾಂಡೆ ಅವರಿಂದ ಉಪನ್ಯಾಸ, ಯೋಗನಡಿಗೆ ಹಾಗೂ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗಾಗಿ ಹಿರಿಯ ಮತ್ತು ಕಿರಿಯರ ಪ್ರತ್ಯೇಕ ವಿಭಾಗಗಳಲ್ಲಿ ಯೋಗಸ್ಪರ್ಧೆಗಳು ನಡೆಯಲಿವೆ.