ಕಾರ್ಮಿಕ ಇಲಾಖೆ ಕಾರ್ಮಿಕ ಸ್ನೇಹಿಯಂತೆ ಕೆಲಸ ಮಾಡಲಿ: ಜಯಶಂಕರ್

Update: 2017-06-21 13:06 GMT

ಬೆಂಗಳೂರು, ಜೂ.21: ಕಾರ್ಮಿಕರಿಗೆ ಸಲ್ಲಬೇಕಾದ ಸೌಲಭ್ಯಗಳನ್ನು ಕಲ್ಪಿಸಿಕೊಡುವುದು ಕಾರ್ಮಿಕ ಇಲಾಖೆ ಅಧಿಕಾರಿಗಳ ಆದ್ಯ ಕರ್ತವ್ಯವೆಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜಯಶಂಕರ್ ತಿಳಿಸಿದ್ದಾರೆ.

ಬುಧವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಬಿಬಿಎಂಪಿ ಹಾಗೂ ಸಿಫಾರ್ ಸಂಸ್ಥೆ ನಗರದ ಅಂಜನಪ್ಪ ಗಾರ್ಡನ್‌ನಲ್ಲಿರುವ ಸಭಾಂಗಣದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಕಾರ್ಮಿಕ ಇಲಾಖೆಯಲ್ಲಿರುವ ಮಾಹಿತಿ ಮತ್ತು ಕಾರ್ಮಿಕ ಗುರುತಿನ ಚೀಟಿ ವಿತರಿಸಿ ಅವರು ಮಾತನಾಡಿದರು.
ಕಾರ್ಮಿಕ ವರ್ಗ ಸದಾ ಅಪಾಯದ ಅಂಚಿನಲ್ಲಿಯೇ ಕಾರ್ಯನಿರ್ವಹಿಸುತ್ತಾರೆ. ಹೀಗಾಗಿ ರಾಜ್ಯ ಸರಕಾರ ಕಾರ್ಮಿಕರ ಅಭಿವೃದ್ಧಿಗೆ ಅನೇಕ ಸೌಲಭ್ಯಗಳನ್ನು ಒದಗಿಸಲಾಗಿದೆ. ಆದರೆ, ಈ ಯಾವ ಸೌಲಭ್ಯಗಳು ನಿಗದಿತ ವೇಳೆಗೆ ಕಾರ್ಮಿಕರಿಗೆ ತಲುಪುತ್ತಿಲ್ಲ. ಈ ಬಗ್ಗೆ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಗಂಭೀರವಾಗಿ ಚಿಂತಿಸಬೇಕು ಎಂದು ಅವರು ಆಶಿಸಿದರು.

ಕಾರ್ಮಿಕರ ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ಆರ್ಥಿಕ ನೆರವು ನೀಡಲು ರಾಜ್ಯ ಸರಕಾರ ಅನೇಕ ಕಾರ್ಯಕ್ರಮಗಳನ್ನು ರೂಪಿಸಿದೆ. ಆದರೆ, ಇಲ್ಲಿಯವರೆಗೆ ಎಷ್ಟು ಮಂದಿ ಕಾರ್ಮಿಕರ ಮಕ್ಕಳು ಉನ್ನತ ಶಿಕ್ಷಣಕ್ಕಾಗಿ ಸೌಲಭ್ಯಗಳನ್ನು ಹೊಂದಿದ್ದಾರೆ ಎಂಬುದನ್ನು ಗಮನಿಸಿದರೆ ಬೆರಳೆಣಿಕೆಯಷ್ಟು ಸಿಗುವುದಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಸಿ ಫಾರ್ ಸಂಸ್ಥೆಯ ಯೋಜನಾ ವ್ಯವಸ್ಥಾಪಕ ಪ್ರಭಾನಂದ ಹೆಗ್ಡೆ ಮಾತನಾಡಿ, ಕಾರ್ಮಿಕ ಇಲಾಖೆಯ ಕಾರ್ಮಿಕರ ಅಭಿವೃದ್ಧಿಗೆ ಅನೇಕ ಯೋಜನೆಗಳನ್ನು ರೂಪಿಸುತ್ತವೆ. ಆದರೆ, ಅದು ಕಾರ್ಯರೂಪಕ್ಕೆ ತರುವಲ್ಲಿ ವಿಳಂಬವಾಗುತ್ತದೆ. ಬಹುತೇಕ ಸಮಯದಲ್ಲಿ ಆ ಸೌಲಭ್ಯಗಳು ಮುಟ್ಟುವುದಿಲ್ಲ. ಹೀಗಾಗಿ ಸಿಫಾರ್ ಸಂಸ್ಥೆಯು ಕಾರ್ಮಿಕ ಇಲಾಖೆ ಹಾಗೂ ಕಾರ್ಮಿಕರ ನಡುವೆ ಸೇತುವೆಯಾಗಿ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಬಿಬಿಎಂಪಿ ಸದಸ್ಯೆ ರೇಖಾ ಖದರೇಶ್, ಕಾರ್ಮಿಕ ಅಧಿಕಾರಿ ಸಂತೋಷ್ ಹಿಪ್ಪರಗಿ, ಕಾರ್ಮಿಕ ಇಲಾಖೆಯ ನಿರೀಕ್ಷಕಿ ಶೋಭಾ ಪಟೇಲ್, ಬಿಬಿಎಂಪಿ ಸಮುದಾಯ ಸಂಘಟಕ ವೆಂಕಟೇಶ್, ಸಿಫಾರ್ ಸಂಸ್ಥೆಯ ಮಂಜುಳಾ ಮತ್ತಿತರರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News