ಅಶ್ರಫ್ ಹತ್ಯೆ ಪ್ರಕರಣ ಖಂಡಿಸಿ ಎಸ್‌ಡಿಪಿಐ ಪ್ರತಿಭಟನೆ

Update: 2017-06-22 13:06 GMT

ಮಡಿಕೇರಿ ಜೂ. 22 : ದಕ್ಷಿಣ ಜಿಲ್ಲೆಯ ಬಂಟ್ವಾಳದಲ್ಲಿ ನಡೆದ ಅಶ್ರಫ್ ಕೊಲೆ ಪ್ರಕರಣವನ್ನು ಖಂಡಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸಂಘಟನೆ ನಗರದಲ್ಲಿ ಪ್ರತಿಭಟನೆ ನಡೆಸಿತು.

ನಗರದ ಇಂದಿರಾಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಎಸ್‌ಡಿಪಿಐ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಅಶ್ರಫ್ ಹತ್ಯೆ ಪ್ರಕರಣದ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದರು.  ಸಾಮಾಜಿಕ ಕಾರ್ಯಕರ್ತನಾಗಿ ಕಾರ್ಯ ನಿರ್ವಹಿಸುತ್ತಾ, ಆಟೋ ಚಾಲಕನಾಗಿ ದುಡಿಯುತ್ತಿದ್ದ ಅಶ್ರಫ್ ಅವರು ಸರ್ವ ಧರ್ಮೀಯರೊಂದಿಗೆ ಸೌಹಾರ್ದತೆಯಿಂದ ನಡೆದುಕೊಳ್ಳುತ್ತಿದ್ದ ವ್ಯಕ್ತಿಯಾಗಿದ್ದಾರೆ. ದುಷ್ಕರ್ಮಿಗಳು ಈ ಅಮಾಯಕನನ್ನು ವಿನಾಕಾರಣ ಕೊಲೆ ಮಾಡಿದ್ದು, ಆರೋಪಿಗಳಿಗೆ ಜಾಮೀನು ನೀಡದೆ ಕಠಿಣ ಶಿಕ್ಷೆಗೆ ಗುರಿ ಮಾಡಬೇಕೆಂದು ಪ್ರಮುಖರು ಆಗ್ರಹಿಸಿದರು.

ಈ ಸಂದರ್ಭ ಮಾತನಾಡಿದ ಎಸ್‌ಡಿಪಿಐ ಜಿಲ್ಲಾಧ್ಯಕ್ಷರಾದ ಅಮಿನ್ ಮೊಹಿಸಿನ್, ಸಂಘ ಪರಿವಾರ ಚುನಾವಣೆ ಸಮೀಪಿಸುವಾಗ ಮತ್ತು ಅಲ್ಪಸಂಖ್ಯಾತರ ಹಬ್ಬಗಳ ಸಂದರ್ಭದಲ್ಲಿ ಕೋಮು ಗಲಭೆ ಸೃಷ್ಟಿಸುವ ಹುನ್ನಾರವನ್ನು ಬಹಳ ಹಿಂದಿನಿಂದಲೂ ನಡೆಸಿಕೊಂಡು ಬಂದಿದೆ ಎಂದು ಆರೋಪಿಸಿದರು.  

ರಾಜ್ಯ ಸರಕಾರದ ಮಂತ್ರಿಗಳೇ ಕರಾವಳಿಯ ಗಲಭೆಗಳಿಗೆ ಕಲ್ಲಡ್ಕ ಪ್ರಭಾಕರ ಭಟ್ ನೇರ ಹೊಣೆ ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ. ಆದರೆ ಇಲ್ಲಿಯವರೆಗೆ ಅವರನ್ನು ಬಂಧಿಸಿ ಶಿಕ್ಷೆಗೆ ಗುರಿ ಪಡಿಸದೆ ಇರುವುದೇ ಈ ರೀತಿಯ ಘಟನೆಗಳು ಮರುಕಳಿಸಲು ಕಾರಣವೆಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಶಾಂತಿ ಸೌಹಾರ್ದತೆ ಶಾಶ್ವತವಾಗಿ ಉಳಿಯಲು ಹಿಂದೂ, ಮುಸ್ಲಿಂ, ಕ್ರೈಸ್ತರು ಸೇರಿದಂತೆ ಸರ್ವ ಧರ್ಮೀಯರು ಒಗ್ಗಟ್ಟನ್ನು ಪ್ರದರ್ಶಿಸುವ ಅಗತ್ಯವಿದೆ. ಆ ಮೂಲಕ ಸಂಘ ಪರಿವಾರದ ಷಡ್ಯಂತ್ರಗಳನ್ನು ವಿಫಲಗೊಳಿಸಬೇಕಾಗಿದೆ ಎಂದು ಅಮೀನ್ ಮೊಹಿಸಿನ್ ಅಭಿಪ್ರಾಯಪಟ್ಟರು.  ಮೃತ ಅಶ್ರಫ್ ಕುಟುಂಬಕ್ಕೆ ಸರಕಾರ 25 ಲಕ್ಷ ರೂ. ಪರಿಹಾರ ನೀಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಎಸ್‌ಡಿಪಿಐ ಜಿಲ್ಲಾ ಕಾರ್ಯದರ್ಶಿ ಅಬ್ದುಲ್ ಅಡ್ಕಾರ್, ನಗರಾಧ್ಯಕ್ಷರಾದ ಕೆ.ಜಿ.ಪೀಟರ್, ನಗರಸಭಾ ಸದಸ್ಯರಾದ ಮನ್ಸೂರ್ ಮತ್ತಿತರ ಪ್ರಮುಖರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News