ಕೇಂದ್ರ ಸಚಿವ ವೆಂಕಯ್ಯನಾಯ್ಡು ಹೇಳಿಕೆಗೆ ವ್ಯಾಪಕ ಆಕ್ರೋಶ

Update: 2017-06-22 16:59 GMT

ಬೆಂಗಳೂರು, ಜೂ. 22: ರೈತರ ಸಾಲ ಮನ್ನಾ ಮಾಡುವುದನ್ನು ಫ್ಯಾಷನ್ (ಶೋಕಿ)ಗೆ ಹೋಲಿಸಿರುವ ಕೇಂದ್ರ ಸಚಿವ ಎಂ. ವೆಂಕಯ್ಯ ನಾಯ್ಡು ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಇನ್ನಿತರರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರಕಾರವು ರೈತರ ಸಾಲ ಮನ್ನಾ ಮಾಡಲು ವಿರೋಧ ವ್ಯಕ್ತಪಡಿಸಿದೆ. ಅಲ್ಲದೆ, ಈ ಕಾರ್ಯಕ್ಕೆ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ರಾಜ್ಯಕ್ಕೆ ಬಿಡಿಗಾಸನ್ನು ನೀಡುವುದಿಲ್ಲ ಎಂದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಮಾಜಿ ಪ್ರಧಾನಿಗಳಾದ ವಿ.ಪಿ.ಸಿಂಗ್, ಡಾ.ಮನಮೋಹನ್‌ಸಿಂಗ್ ರೈತರ ಸಾಲವನ್ನು ಮನ್ನಾ ಮಾಡಿದ್ದರು. ಆದರೆ, ಕೇಂದ್ರ ಸಚಿವ ವೆಂಕಯ್ಯ ನಾಯ್ಡು ರೈತರ ಸಾಲ ಮನ್ನಾ ಮಾಡುವುದನ್ನು ಶೋಕಿಗೆ ಹೋಲಿಕೆ ಮಾಡುವ ಮೂಲಕ ಬೇಜವಾಬ್ದಾರಿ ಹಾಗೂ ರೈತ ವಿರೋಧಿ ಹೇಳಿಕೆಯನ್ನು ನೀಡಿದ್ದಾರೆ ಎಂದು ಕಿಡಿಗಾರಿದರು.

ಪ್ರಜ್ಞೆ ಕಳೆದುಕೊಂಡಿದ್ದಾರೆ: ವೆಂಕಯ್ಯ ನಾಯ್ಡು ಪ್ರಜ್ಞೆ ಕಳೆದುಕೊಂಡು ಇಂತಹ ಹೇಳಿಕೆಯನ್ನು ನೀಡಿದ್ದಾರೆ. ಸುಮ್ಮನೆ ಮಾತನಾಡಿಲ್ಲ. ರಾಜ್ಯದಲ್ಲಿರುವ ಭೀಕರ ಬರಪರಿಸ್ಥಿತಿಯನ್ನು ರೈತರು ಅನುಭವಿಸುತ್ತಿದ್ದಾರೆ. ಅವರ ಸಂಕಷ್ಟಕ್ಕೆ ಸ್ಪಂದಿಸಿ ರಾಜ್ಯ ಸರಕಾರ 50 ಸಾವಿರ ರೂ.ವರೆಗಿನ ಸಾಲ ಮನ್ನಾ ಮಾಡಿದೆ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅವರ ಪಕ್ಷದವರೆ ವಿಧಾನಸಭೆ ಒಳಗೆ ಹಾಗೂ ಹೊರಗೆ ಸಾಲ ಮನ್ನಾ ಮಾಡುವಂತೆ ಒತ್ತಾಯ ಮಾಡುತ್ತಿದ್ದರು. ಅವರಿಗೆ ಯಾಕೆ ವೆಂಕಯ್ಯನಾಯ್ಡು ಬುದ್ಧಿ ಹೇಳಲಿಲ್ಲ ಎಂದು ತಿರುಗೇಟು ನೀಡಿದರು.

ರಾಜ್ಯ ಸರಕಾರವು 50 ಸಾವಿರ ರೂ.ವರೆಗಿನ ಸಾಲವನ್ನು ಮನ್ನಾ ಮಾಡಿರುವುದರಿಂದ ರೈತರು ಸಂತಸಗೊಂಡಿದ್ದಾರೆ. ಆದರೆ, ಕೇಂದ್ರ ಸಚಿವ ವೆಂಕಯ್ಯನಾಯ್ಡುಗೆ ಅಂತಹ ಪರಿಸ್ಥಿತಿಯಿಲ್ಲ. ಹೀಗಾಗಿ ಅವರಿಗೆ ರೈತರ ಸಾಲ ಮನ್ನಾ ಶೋಕಿಯಾಗಿ ಕಾಣಿಸುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಕೆ.ಆರ್. ರಮೇಶ್‌ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News