ಬೆಂಗಳೂರು ವಿವಿಗೆ ಕೆಂಪೇಗೌಡರ ಹೆಸರು, ಅಧ್ಯಯನ ಪೀಠ ಆರಂಭ: ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಜೂ.24: ಮೂರು ವಿಭಾಗಗಳಾಗಿ ವಿಂಗಡಿಸಿರುವ ಬೆಂಗಳೂರು ವಿಶ್ವವಿದ್ಯಾಲಯದ ಒಂದು ವಿವಿಗೆ ನಾಡಪ್ರಭು ಕೆಂಪೇಗೌಡರ ಹೆಸರನ್ನು ನಾಮಕರಣ ಮಾಡಲಾಗುವುದು. ಇದರ ಜೊತೆಗೆ ಪ್ರತ್ಯೇಕವಾಗಿ ಕೆಂಪೇಗೌಡ ಅಧ್ಯಯನ ಪೀಠವನ್ನು ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಶನಿವಾರ ಗೃಹ ಕಚೇರಿ ಕೃಷ್ಣಾದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ವಿಶ್ವವಿದ್ಯಾಲಯದ ಒಂದು ವಿವಿಗೆ ನಾಡಪ್ರಭು ಕೆಂಪೇಗೌಡರ ಹೆಸರನ್ನು ನಾಮಕರಣ ಮಾಡಲಾಗುವುದು. ಇದರ ಜೊತೆಗೆ ಪ್ರತ್ಯೇಕವಾಗಿ ಕೆಂಪೇಗೌಡ ಅಧ್ಯಯನ ಪೀಠವನ್ನು ಆರಂಭಿಸಲಾಗುವುದು ಎಂದರು.
ಬೆಂಗಳೂರು ನಗರ ಸಮಗ್ರ ಅಭಿವೃದ್ಧಿಗಾಗಿ ನಾಡಪ್ರಭು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಲಾಗಿದೆ. ಕೆಂಪೇಗೌಡ ಜಯಂತಿಯಂದು ಪ್ರಾಧಿಕಾರ ಅಸ್ತಿತ್ವಕ್ಕೆ ಬರಲಿದೆ. ಪ್ರಾಧಿಕಾರದ ಅಧ್ಯಕ್ಷರಾಗಿ ಮುಖ್ಯಮಂತ್ರಿ ಹಾಗೂ ಉಪಾಧ್ಯಕ್ಷರಾಗಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಇರಲಿದ್ದಾರೆ ಎಂದರು. ನಗರದ ಅಭಿವೃದ್ಧಿಗೆ ಬಿಬಿಎಂಪಿ, ಬಿಎಂಟಿಸಿ, ಬಿಡಬ್ಲೂಎಸ್‌ಎಸ್‌ಬಿ, ಬಿಎಂಆರ್‌ಸಿಎಲ್ ಜೊತೆಗೆ ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಿದರು.
ನಾಡಪ್ರಭು ಕೆಂಪೇಗೌಡ ಹೆಸರನ್ನು ಚಿರಸ್ಥಾಯಿಯಾಗಿ ಉಳಿಸಲು ಇವರ ಹೆಸರಿನಲ್ಲಿ ನಗರದಲ್ಲಿ ಲೇಔಟ್‌ಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರನ್ನು ಘೋಷಣೆ ಮಾಡಲಾಗಿದೆ. ಮೆಜೆಸ್ಟಿಕ್‌ನಲ್ಲಿರುವ ಮೊಟ್ರೋ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರನ್ನು ಇಡಲಾಗಿದೆ ಎಂದು ತಿಳಿಸಿದರು.