×
Ad

ನೇಕಾರರ ಸಾಲ ಮನ್ನಾ ಮಾಡಲು ಮುಖ್ಯಮಂತ್ರಿಗೆ ಮನವಿ

Update: 2017-06-27 18:18 IST

ಬೆಂಗಳೂರು, ಜೂ.27: ರಾಜ್ಯಾದ್ಯಂತ ನೇಕಾರರು ಮಾಡಿರುವ ಸಾಲವನ್ನು ಮನ್ನಾ ಮಾಡುವಂತೆ ಕರ್ನಾಟಕ ರಾಜ್ಯ ನೇಕಾರ ಸಮುದಾಯಗಳ ಒಕ್ಕೂಟದ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ, ಒಕ್ಕೂಟದ ಗೌರವಾಧ್ಯಕ್ಷ ಹಾಗೂ ಶಾಸಕ ಕೆ.ಸಿ.ಕೊಂಡಯ್ಯ, ಅಧ್ಯಕ್ಷ ಮತ್ತು ಶಾಸಕ ಎಂ.ಡಿ.ಲಕ್ಷ್ಮಿನಾರಾಯಣ ಮತ್ತು ಜವಳಿ ಮೂಲ ಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋ.ತಿಪ್ಪೇಶ್ ನೇತೃತ್ವದ ನಿಯೋಗ ಮುಖ್ಯಮಂತ್ರಿ ಗೃಹ ಕಾವೇರಿಯಲ್ಲಿ ಭೇಟಿಯಾಗಿ ಮನವಿ ಪತ್ರ ಸಲ್ಲಿಸಿ ಸಾಲ ಮನ್ನಾ ಮಾಡುವಂತೆ ಒತ್ತಾಯಿಸಿದರು.

ರಾಜ್ಯದಲ್ಲಿ ಸಂಕಷ್ಟದಲ್ಲಿರುವ ರೈತರ ಬದುಕು ಹಸನುಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ 8,600 ಕೋಟಿ ರೂ.ಗಳ ಸಾಲ ಮನ್ನಾ ಮಾಡಿರುವ ಮಾದರಿಯಲ್ಲೇ ನೇಕಾರರ ಮೇಲಿನ ಸಾಲವನ್ನು ಮನ್ನಾ ಮಾಡಬೇಕು ಎಂದರು.

ಈ ವೇಳೆ ಮನವಿ ಸ್ವೀಕರಿಸಿ ಮಾತನಾಡಿದ ಮುಖ್ಯಮಂತ್ರಿ ಈ ಕುರಿತು ಸರಕಾರ ಪರಿಶೀಲಿಸಿ ಕ್ರಮ ಕೈಗೊಳ್ಳಲಿದೆ ಎಂದು ಭರವಸೆ ನೀಡಿದರು. ನಿಯೋಗದಲ್ಲಿ ನೇಕಾರರ ರಾಷ್ಟ್ರೀಯ ಸೇವಾ ಟ್ರಸ್ಟ್‌ನ ಅಧ್ಯಕ್ಷ ರಘು ಎಸ್.ಶೆಟ್ಟಿಗಾರ್, ನೇಕಾರರ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಲಿಂಗರಾಜು ಇದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News