ಅತಿಥಿ ಉಪನ್ಯಾಸಕರನ್ನು ಮುಂದುವರಿಸುವಂತೆ ಆಗ್ರಹ
ಬೆಂಗಳೂರು, ಜೂ.30: ರಾಜ್ಯದ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪ್ರಸ್ತುತವಾಗಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರನ್ನೇ ಮುಂದುವರಿಸಬೇಕು ಎಂದು ಸರಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಮನ್ವಯ ಸಮಿತಿ ಆಗ್ರಹಿಸಿದೆ.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಡಾ.ಎಚ್.ಸೋಮಶೇಖರ್ ಶಿವಮೊಗ್ಗ, ಪ್ರಥಮ ದರ್ಜೆ ಕಾಲೇಜುಗಳಲ್ಲಿ ಹತ್ತಾರು ವರ್ಷಗಳಿಂದ ದುಡಿಯುತ್ತಿರುವ ಅತಿಥಿ ಉಪನ್ಯಾಸಕರನ್ನೇ ಮುಂದುವರಿಸುವುದಾಗಿ ಉನ್ನತ ಶಿಕ್ಷಣ ಸಚಿವರು ಭರವಸೆ ನೀಡಿದ್ದರು. ಆದರೆ, ಈಗ ಪ್ರಸಕ್ತ ಸಾಲಿಗೆ ನೂತನವಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನೂತನವಾಗಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಮುಂದಾಗಿರುವುದರಿಂದ ಹತ್ತಾರು ವರ್ಷಗಳಿಂದ ಕೆಲಸ ಮಾಡುತ್ತಿದ್ದ, ಸೇವಾ ಹಿರಿತನ ಹೊಂದಿರುವ ಉಪನ್ಯಾಸಕರು ತಮ್ಮ ಸ್ಥಾನವನ್ನು ಕಳೆದುಕೊಳ್ಳಲಿದ್ದಾರೆ. ಹೀಗಾಗಿ ಸಾವಿರಾರು ಕುಟುಂಬಗಳ ಸಂರಕ್ಷಣೆಗಾಗಿ ಮಾನವೀಯ ದೃಷ್ಟಿಯಿಂದ ಈಗ ಕೆಲಸ ಮಾಡುತ್ತಿರುವ ಉಪನ್ಯಾಸಕರನ್ನೇ ಮುಂದುವರಿಸಬೇಕು ಎಂದು ಆಗ್ರಹಿಸಿದರು.