×
Ad

ತಮಿಳುನಾಡಿಗೆ ನೀರು: ಪ್ರತಿಭಟನಾ ನಿರತ ರೈತರ ಬಂಧನ

Update: 2017-07-01 20:34 IST

ಮಂಡ್ಯ, ಜು.1: ಕೃಷ್ಣರಾಜಸಾಗರ ಜಲಾಶಯದಿಂದ ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ರೈತರು ಪ್ರತಿಭಟನೆ ಮುಂದುವರಿಸಿದ್ದು, ಶನಿವಾರವೂ ಜಿಲ್ಲೆಯ ವಿವಿಧೆಡೆ ಪ್ರತಿಭಟನೆ ನಡೆದವು.

ನಗರದ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ರೈತ ಸಂಘದ ಕಾರ್ಯಕರ್ತರು ಅಡ್ಡಲಾಗಿ ಮಲಗಿ ವಾಹನ ಸಂಚಾರಕ್ಕೆ ತಡೆಯೊಡ್ಡಿದರು. ಇದರಿಂದಾಗಿ ಸಂಚಾರ ವ್ಯವಸ್ಥೆ ಅಸ್ತ್ಯವಸ್ತ್ಯವಾಗಿತ್ತು.
ಸ್ಥಳಕ್ಕಾಗಮಿಸಿದ ಪೊಲೀಸರು ರಸ್ತೆತಡೆ ತೆರವುಗೊಳಿಸುವಂತೆ ಮನವಿ ಮಾಡಿದರೂ ರೈತರು ಕಿವಿಗೊಡಲಿಲ್ಲ. ಪೊಲೀಸರು ಮತ್ತು ರೈತರ ನಡುವೆ ಮಾತಿನ ಚಕಮಕಿ ನಡೆಯಿತು. ಕೊನೆಗೆ, ರೈತರನ್ನು ಬಂಧಿಸಿ ಸಂಜೆ ವೇಳೆಗೆ ಬಿಡುಗಡೆಗೊಳಿಸಿದರು.

ಪ್ರತಿಭಟನೆ ನೇತೃತ್ವವಹಿಸಿದ್ದ ರೈತ ಸಂಘದ ಉಪಾಧ್ಯಕ್ಷ ಕೋಣಸಾಲೆ ನರಸರಾಜು, ಜಿಲ್ಲಾಧ್ಯಕ್ಷ ಶಂಭೂನಹಳ್ಳಿ ಸುರೇಶ್, ಹನಿಯಂಬಾಡಿ ನಾಗರಾಜು, ಸಿದ್ದೇಗೌಡ, ರಾಮಕೃಷ್ಣಯ್ಯ, ನಾಗಣ್ಣ, ನವೀನ್, ಬೊಮ್ಮೇಗೌಡ, ಕನ್ನಡ ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ್ ಸೇರಿದಂತೆ 28 ರೈತರು ಬಂಧನಕ್ಕೊಳಗಾಗಿದ್ದರು.

ಜಲಾಶಯ ತುಂಬುವ ಮೊದಲೇ ತಮಿಳುನಾಡಿಗೆ ನೀರು ಬಿಡುವ ಅಗತ್ಯವೇನಿದೆ ಎಂದು ಸರಕಾರವನ್ನು ತರಾಟೆಗೆ ತೆಗೆದುಕೊಂಡ ಪ್ರತಿಭಟನಾಕಾರರು, ಕೂಡಲೇ ತಮಿಳುನಾಡಿಗೆ ನೀರು ನಿಲ್ಲಿಸಿ ಜಿಲ್ಲೆಯ ನಾಲೆಗಳಿಗೆ ನೀರುಹರಿಸುವಂತೆ ಆಗ್ರಹಿಸಿದರು.
ಶ್ರೀರಂಗಪಟ್ಟಣದಲ್ಲಿ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ರೈತಸಂಘದ ಕಾರ್ಯಕರ್ತರು ಪ್ರತಿಭಟಿಸಿದರು. ಪಾಂಡವಪುರ, ಮದ್ದೂರು, ಕೆ.ಎಂ.ದೊಡ್ಡಿಯಲ್ಲೂ ರೈತರು ಪ್ರತಿಭಟನೆ ನಡೆಸಿ ಮುಖ್ಯಮಂತ್ರಿ ಮತ್ತು ನೀರಾವರಿ ಸಚಿವರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ನಡುವೆ ಜಲಾಶಯದಿಂದ ನದಿಗೆ ಹರಿಯುತ್ತಿರುವ ನೀರಿನ ಪ್ರಮಾಣದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ರೈತರು ಮತ್ತು ಪ್ರಗತಿಪರ ಸಂಘಟನೆಗಳ ಪ್ರತಿಭಟನೆ ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿವೆ.

ಮುನ್ನೆಚ್ಚರಿಕೆ ಕ್ರಮವಾಗಿ ಕೃಷ್ಣರಾಜಸಾಗರ ಜಲಾಶಯಕ್ಕೆ ಹೆಚ್ಚಿನ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮುಂದುವರಿದಿದ್ದು, ಮಂಡ್ಯದ ತಮಿಳು ಕಾಲನಿಗೂ ಪೊಲೀಸರನ್ನು ನಿಯೋಜಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News