ಪ್ರಚೋದನಕಾರಿ ಭಾಷಣ : ಪ್ರಮೋದ್ ಮುತಾಲಿಕ್ ವಿರುದ್ಧ ಎಫ್‌ಐಆರ್
ಬೆಂಗಳೂರು, ಜು.4: ಪ್ರತಿಭಟನೆಯೊಂದರಲ್ಲಿ ಪಾಲ್ಗೊಂಡು ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ವಿರುದ್ಧ ನಗರದ ಹೈಗ್ರೌಂಡ್ಸ್ ಠಾಣಾ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.
ಆರೋಪಿ ಪ್ರಮೋದ್ ಮುತಾಲಿಕ್ ವಿರುದ್ಧ ಸಮಾಜದ ಸಾಮರಸ್ಯ ಹಾಳು ಮಾಡುವುದು(ಐಪಿಸಿ 153-ಎ), ಕೋಮು ಸೌಹಾರ್ದಕ್ಕೆ ಧಕ್ಕೆ(ಐಪಿಸಿ 295-ಎ) ಹಾಗೂ ಜೀವಬೆದರಿಕೆ(ಐಪಿಸಿ 505) ಆರೋಪದಡಿ ಎಫ್‌ಐಆರ್ ದಾಖಲು ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಎಫ್‌ಐಆರ್ ಏಕೆ?: ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಇಫ್ತಾರ್ ಕೂಟ ಹಮ್ಮಿಕೊಂಡಿದ್ದ ವಿಶ್ವೇಶತೀರ್ಥ ಸ್ವಾಮೀಜಿ ನಿಲುವು ಖಂಡಿಸಿ ಶ್ರೀರಾಮಸೇನೆ ನೇತೃತ್ವದಲ್ಲಿ ನಗರದ ಮೌರ್ಯ ವೃತ್ತದಲ್ಲಿ ರವಿವಾರ ಪ್ರತಿಭಟನೆ ನಡೆಸಲಾಗಿತ್ತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಪ್ರಮೋದ್ ಮುತಾಲಿಕ್, ಮುಂದೆ ಶ್ರೀಕೃಷ್ಣ ಮಠ ಸೇರಿ ಯಾವುದೇ ದೇವಸ್ಥಾನ, ಮಂದಿರದಲ್ಲಿ ಇಫ್ತಾರ್ ಕೂಟ ಆಯೋಜಿಸಲು ಬಿಡುವುದಿಲ್ಲ. ಆ ರೀತಿಯಾದರೆ ರಕ್ತಪಾತವಾಗಲಿದೆ ಎಂದಿದ್ದರು.
ಹೀಗಾಗಿ, ಹೈಗ್ರೌಂಡ್ಸ್ ಠಾಣಾ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.