ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ಸಿದ್ಧತೆ

Update: 2017-07-04 15:11 GMT

ಬೆಂಗಳೂರು, ಜು.4: ಮುಂಬರುವ ವಿಧಾನಸಭಾ ಚುನಾವಣೆಗೆ ಆಡಳಿತರೂಢ ಕಾಂಗ್ರೆಸ್ ಪಕ್ಷವು ಭರ್ಜರಿ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸದಲ್ಲಿ ಸೋಮವಾರ ತಡರಾತ್ರಿ ನಡೆದ ಪಕ್ಷದ ಪ್ರಮುಖ ಮುಖಂಡರ ಸಭೆಯಲ್ಲಿ ಹಲವಾರು ಮಹತ್ವದ ವಿಷಯಗಳ ಕುರಿತು ಚರ್ಚೆ ನಡೆಸಲಾಗಿದೆ.

ನಂಜನಗೂಡು ಹಾಗೂ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಬಳಿಕ ಖಾಸಗಿ ಸಂಸ್ಥೆಗಳು ನಡೆಸಿರುವ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತದೊಂದಿಗೆ ಅಧಿಕಾರದ ಗದ್ದುಗೆ ಏರಲಿದೆ ಎಂಬ ಅಂಶ ಬಯಲಿಗೆ ಬಂದಿರುವುದು, ಆಡಳಿತ ಪಕ್ಷದ ಉತ್ಸಾಹವನ್ನು ಇಮ್ಮಡಿಗೊಳಿಸಿದೆ. ಜನರ ಅಭಿಪ್ರಾಯವನ್ನು ಚುನಾವಣೆವರೆಗೆ ತಮ್ಮ ಪರವಾಗಿಯೆ ಇರುವ ನಿಟ್ಟಿನಲ್ಲಿ ಅನುಸರಿಸಬೇಕಾದ ಕಾರ್ಯತಂತ್ರಗಳು, ಪಕ್ಷದ ಸಂಘಟನೆ, ಜಿಲ್ಲಾ, ತಾಲೂಕು, ಬ್ಲಾಕ್ ಮಟ್ಟದಲ್ಲಿ ಕಾರ್ಯಕರ್ತರನ್ನು ಚುನಾವಣೆಗೆ ಸಜ್ಜುಗೊಳಿಸುವುದು, ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ಜನವಿರೋಧಿ ನೀತಿಗಳ ವಿರುದ್ಧ ದೊಡ್ಡ ಮಟ್ಟದಲ್ಲಿ ಪ್ರತಿಭಟನೆಗಳನ್ನು ನಡೆಸುವುದು.

 ಕೆಪಿಸಿಸಿ ಅಧ್ಯಕ್ಷರಾಗಿ ಡಾ.ಜಿ.ಪರಮೇಶ್ವರ್ ಮರು ಆಯ್ಕೆಯಾಗಿರುವುದರಿಂದ, ಪಕ್ಷಕ್ಕೆ ಹೊಸ ಪದಾಧಿಕಾರಿಗಳನ್ನು ಜು.18ರೊಳಗೆ ನೇಮಕಗೊಳಿಸುವ ಬಗ್ಗೆಯೂ ತೀರ್ಮಾನ ಕೈಗೊಳ್ಳಲಾಗಿದೆ. ಆ.30ರೊಳಗಾಗಿ ಎಲ್ಲ ಜಿಲ್ಲಾ ಹಾಗೂ ಬ್ಲಾಕ್ ಮಟ್ಟದಲ್ಲಿ ಸಮಾವೇಶಗಳನ್ನು ನಡೆಸಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.

ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ನಿಗಮ ಮಂಡಳಿಗಳ ಅಧ್ಯಕ್ಷರು, ನಿರ್ದೇಶಕರು ಸರಕಾರದ ಯೋಜನೆಗಳು ಜನಸಾಮಾನ್ಯರಿಗೆ ತಲುಪಿವೆಯೆ, ಇಲ್ಲವೆ ಎಂಬುದರ ಕುರಿತು ಗಮನ ಹರಿಸಬೇಕು. ಹೆಚ್ಚಿನ ಪ್ರಮಾಣದಲ್ಲಿ ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳನ್ನು ಕಲ್ಪಿಸಿಕೊಡುವ ಮೂಲಕ ಪಕ್ಷ ಸಂಘಟನೆಗೆ ಸಂಪೂರ್ಣ ಗಮನ ಕೇಂದ್ರೀಕರಿಸಬೇಕು ಎಂದು ಸಭೆಯಲ್ಲಿ ಸೂಚನೆ ನೀಡಲಾಗಿದೆ.

ಕೆಪಿಸಿಸಿಗೆ ಒಟ್ಟು 110 ಜನ ಪದಾಧಿಕಾರಿಗಳಿದ್ದು, ಈ ಪೈಕಿ ಸಚಿವರು, ಶಾಸಕರು, ನಿಗಮ ಮಂಡಳಿಗಳ ಅಧ್ಯಕ್ಷರು ಸೇರಿದಂತೆ ಒಟ್ಟು 60 ಮಂದಿಯಿದ್ದಾರೆ. ಸಾರ್ವತ್ರಿಕ ಚುನಾವಣೆಗೆ ಕೇವಲ 10 ತಿಂಗಳು ಬಾಕಿಯಿರುವುದರಿಂದ ಕ್ರಿಯಾಶೀಲವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುವವರನ್ನು ಒಳಗೊಂಡ ತಂಡ ಕಟ್ಟಲು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಮುಂದಾಗಿದ್ದಾರೆ.

ಈಗಾಗಲೆ ಎಲ್ಲ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಂದ ಕೆಪಿಸಿಸಿಗೆ ಹೊಸದಾಗಿ ಪದಾಧಿಕಾರಿಗಳಾಗಬೇಕೆಂದಿರುವ ಆಕಾಂಕ್ಷಿಗಳ ಪಟ್ಟಿಯನ್ನು ತರಿಸಿಕೊಂಡಿದ್ದಾರೆ. ಜೊತೆಗೆ, ಜಿಲ್ಲಾವಾರು ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಿರುವ ಕಾರ್ಯಕರ್ತರ ಮಾಹಿತಿಯನ್ನು ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

 2018ರ ವಿಧಾನಸಭಾ ಚುನಾವಣೆಯಲ್ಲಿ ಶತಾಯಗತಾಯ ಕಾಂಗ್ರೆಸ್ ಪಕ್ಷವನ್ನು ಮತ್ತೆ ಸ್ವಂತ ಶಕ್ತಿಯ ಆಧಾರದಲ್ಲಿ ಅಧಿಕಾರಕ್ಕೆ ತರಲೇಬೇಕು ಎಂಬ ಸಂಕಲ್ಪ ತೊಟ್ಟಿರುವ ವೇಣುಗೋಪಾಲ್, ಗೆಲ್ಲುವ ಸಾಮರ್ಥ್ಯವಿರುವ ಅಭ್ಯರ್ಥಿಗಳನ್ನಷ್ಟೇ ಆಯ್ಕೆ ಮಾಡಲು ಬ್ಲಾಕ್ ಮಟ್ಟದಿಂದ ಮಾಹಿತಿಗಳನ್ನು ತರಿಸಿಕೊಳ್ಳುತ್ತಿದ್ದಾರೆ.

ರಾಜ್ಯದಲ್ಲಿ ಆಡಳಿತವಿರೋಧಿ ಅಲೆ ಇಲ್ಲ. ಕಾಂಗ್ರೆಸ್ ಪಕ್ಷದ ಪರವಾಗಿ ಉತ್ತಮ ವಾತಾವರಣವಿದೆ. ಇದನ್ನು ಸದುಪಯೋಗಪಡಿಸಿಕೊಂಡು, ಜಿಲ್ಲಾವಾರು ಸಮಾವೇಶಗಳನ್ನು ನಡೆಸಿ, ಸರಕಾರದ ಕಾರ್ಯಕ್ರಮಗಳನ್ನು ಫಲಾನುಭವಿಗಳಿಗೆ ಸ್ಥಳದಲ್ಲೆ ತಲುಪಿಸಲು ಸಿದ್ಧತೆಗಳನ್ನು ಪ್ರಾರಂಭಿಸಿ ಎಂದು ಮುಖಂಡರಿಗೆ ಸೂಚನೆಗಳನ್ನು ನೀಡಲಾಗಿದೆ.

 ಬಿಜೆಪಿ ನಾಯಕರು ರಾಜ್ಯ ಸರಕಾರ ಹಾಗೂ ಕಾಂಗ್ರೆಸ್ ಪಕ್ಷದ ವಿರುದ್ಧವಾಗಿ ಅನುಸರಿಸುವ ಎಲ್ಲ ರೀತಿಯ ತಂತ್ರಗಳಿಗೆ ಪ್ರತಿತಂತ್ರ ರೂಪಿಸಿ, ತಕ್ಕ ಉತ್ತರ ನೀಡಲು ಸಿದ್ಧರಾಗಿರಿ. ಸಾಮಾಜಿಕ ಸಂಪರ್ಕ ಜಾಲ ತಾಣಗಳನ್ನು ಸಮರ್ಥವಾಗಿ ಬಳಸಿಕೊಂಡು, ಸರಕಾರದ ಕಾರ್ಯಕ್ರಮಗಳು, ಸಾಧನೆಗಳನ್ನು ಜನರಿಗೆ ತಲುಪಿಸಲು ಕಾರ್ಯಕರ್ತರು ಕ್ರಿಯಾಶೀಲರಾಗಬೇಕು ಎಂದು ಸೂಚನೆಗಳನ್ನು ನೀಡಲಾಗಿದೆ.

ಬಾಗಲಕೋಟೆಯ ಕೂಡಲಸಂಗಮದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್.ಆರ್.ಪಾಟೀಲ್ ಅಧಿಕಾರ ಸ್ವೀಕಾರ ಸಮಾರಂಭ, ಬೆಳಗಾವಿಯ ಅಥಣಿಯಲ್ಲಿ ನಡೆದ ಪಕ್ಷದ ಸಮಾವೇಶಗಳು ಯಶಸ್ವಿಯಾಗಿದ್ದು, ಅದೇ ಮಾದರಿಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಸಮಾವೇಶಗಳನ್ನು ಆಯೋಜಿಸಿ, ಪಕ್ಷದ ಸಂಘಟನೆಯನ್ನು ಗಟ್ಟಿಗೊಳಿಸಿ, ಕಾರ್ಯಕರ್ತರಲ್ಲಿ ಆತ್ಮವಿಶ್ವಾಸ ಮೂಡಿಸಿ ಎಂದು ಸಭೆಯಲ್ಲಿ ಕರೆ ನೀಡಲಾಗಿದೆ.

ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಕಾರ್ಯಾಧ್ಯಕ್ಷರಾದ ಎಸ್.ಆರ್.ಪಾಟೀಲ್, ದಿನೇಶ್ ಗುಂಡೂರಾವ್, ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News