×
Ad

ಒಳಚರಂಡಿ ಕಾಮಗಾರಿಯನ್ನು ಶೀಘ್ರ ಮುಗಿಸಲು ಆಎರ್.ರೋಷನ್ ಬೇಗ್ ಸೂಚನೆ

Update: 2017-07-06 19:01 IST

ಚಿಕ್ಕಮಗಳೂರು, ಜು.6: ನಗರದಲ್ಲಿ ಒಳಚರಂಡಿ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ನಗರಾಭಿವೃದ್ಧಿ, ಹಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ರೋಷನ್‍ಬೇಗ್ ಅಧಿಕಾರಿಗಳಿಗೆ ಸೂಚಿಸಿದರು.
ಅವರು ಗುರುವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಕಾಮಗಾರಿಗೆ 2011ರಲ್ಲಿ ಅನುಮೋದನೆ ದೂರೆತ್ತಿದ್ದು 2013 ಕ್ಕೆ ಪೂರ್ಣಗೊಳಿಸುವಂತೆ ತಿಳಿಸಿದ್ದರೂ ಇದುವರೆವಿಗೂ ಕಾಮಗಾರಿ ಮುಗಿದಿಲ್ಲ. ಒಳಚರಂಡಿ ವ್ಯವಸ್ಥೆ ಇಲ್ಲದಿದ್ದರೆ ಸೊಳ್ಳೆಗಳು ಹೆಚ್ಚಾಗಿ ರೋಗಗಳು ಹರಡುತ್ತವೆ. ಕಾಮಗಾರಿಯನ್ನು ಅದಷ್ಟು ಬೇಗ ಪೂರ್ಣಗೊಳಿಸುವಂತೆ ತಿಳಿಸಿದರು.

ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ಧೆಗಳ ಕುರಿತು ಮಾಹಿತಿ ಪಡೆದ ಸಚಿವರು ಸಂಬಂಧಪಟ್ಟ ಇಲಾಖೆ ಮುಖ್ಯಸ್ಥರೊಂದಿಗೆ ಮಾತನಾಡಿ ಕ್ರಮ ಕೈಗೊಳ್ಳಲಾಗುವುದು. ಅನ್ನಭಾಗ್ಯ ಯೋಜನೆ ಜಿಲ್ಲೆಯಲ್ಲಿ ಸಮರ್ಪಕವಾಗಿ ನಿರ್ವಹಣೆಯಾಗುತ್ತಿರುವ ಕುರಿತು ಮಾಹಿತಿ ಪಡೆದರಲ್ಲದೆ ವಿದ್ಯಾರ್ಥಿನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಊಟದ ವ್ಯವಸ್ಥೆ ಹಾಗೂ ನೀರಿನ ವ್ಯವಸ್ಥೆಯನ್ನು ಉತ್ತಮವಾಗಿ ವ್ಯವಸ್ಥೆ ಮಾಡುವಂತೆ ಬಿ.ಸಿ.ಎಂ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಜಿ. ಸತ್ಯವತಿ ಮಾತನಾಡಿ, ಜಿಲ್ಲೆಯಲ್ಲಿ ಕಳೆದ ಬಾರಿ ಮುಂಗಾರು ಹಂಗಾಮಿನಲ್ಲಿ ಮಳೆಯಾಗದೆ 4 ತಾಲ್ಲೂಕುಗನ್ನು ಬರ ಪೀಡಿತ ತಾಲ್ಲೂಕುಗಳೆಂದು ಘೋಷಿಸಲಾಗಿತ್ತು. ಹಿಂಗಾರಿನಲ್ಲಿ ಕೂಡ ಮಳೆಯಾಗದೆ ಇದ್ದುದರಿಂದ ಮತ್ತೆ 2 ತಾಲ್ಲೂಕುಗಳನ್ನು ಬರ ಪೀಡಿತ ತಾಲ್ಲೂಕುಗಳೆಂದು ಘೋಷಿಸಲಾಯಿತು. ಬರ ಪರಿಹಾರವಾಗಿ ಸರ್ಕಾರ ಜಿಲ್ಲೆಗೆ 13 ಕೋಟಿ 60 ಲಕ್ಷ ಮಂಜೂರು ಮಾಡಿದ್ದು ಬರ ನಿರ್ವಹಣೆಯನ್ನು ಯಶಸ್ವಿಯಾಗಿ ಮಾಡಲಾಗಿದೆ ಎಂದು ಹೇಳಿದರು.

ಜಾನುವಾರುಗಳ ಮೇವಿಗೆ ಸಮಸ್ಯೆಯಾಗದಂತೆ 11 ಮೇವು ಬ್ಯಾಂಕ್‍ಗಳನ್ನು ತೆರೆದು ಮೇವು ವಿತರಿಸಲಾಗಿದೆ. ಕಡೂರು ತಾಲ್ಲೂಕಿನ ಪಂಚನಹಳ್ಳಿಯಲ್ಲಿ ಗೋಶಾಲೆಯನ್ನು ತೆರೆದು ಖಾಸಗಿ ಸಂಸ್ಥೆಯ ಸಹಭಾಗಿತ್ವದಲ್ಲಿ ಯಶಸ್ವಿಯಾಗಿ ನಿರ್ವಹಿಸಲಾಗುತ್ತಿದೆ. ಜಿಲ್ಲೆಯಲ್ಲಿ 5 ನದಿಗಳು ಹುಟ್ಟಿದರೂ ಕೂಡ ಕುಡಿಯುವ ನೀರಿಗೆ ಸಮಸ್ಯೆ ಇದೆ. ನೀರು ಸರಬರಾಜಿಗೆ ಸಂಬಂಧಿಸಿದಂತೆ ಯೋಜನೆ ರೂಪಿಸಲು ನೀರು ಸರಬರಾಜು ಮಂಡಳಿಗೆ ಪತ್ರ ಬರೆಯಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು. 

ಜಿ.ಪಂ ಸಿಇಓ ಡಾ.ಆರ್.ರಾಗಪ್ರಿಯ ಮಾತನಾಡಿ, ಜಿಲ್ಲೆಯಲ್ಲಿ 93 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದ್ದು ಆರ್.ಟಿ.ಜಿ.ಎಸ್ ಮೂಲಕ ಟ್ಯಾಂಕರ್ ಮಾಲೀಕರಿಗೆ ಹಣ ಪಾವತಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಅರಣ್ಯ, ವಸತಿ ಮತ್ತು ವಿಹಾರಧಾಮಗಳ ನಿಗಮದ ಅಧ್ಯಕ್ಷ ಎ.ಎನ್.ಮಹೇಶ್, ಎಸ್ಪಿ ಕೆ.ಅಣ್ಣಾಮಲೈ, ಅಪರ ಜಿಲ್ಲಾಧಿಕಾರಿ ಎಂ.ಎಲ್. ವೈಶಾಲಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News