×
Ad

​ದಲಿತರು-ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಹೆಚ್ಚಳ: ಖುರ್ಷಿದ್‌ಅಹ್ಮದ್

Update: 2017-07-08 17:50 IST

ಬೆಂಗಳೂರು, ಜು.7: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರ ಆಡಳಿತಕ್ಕೆ ಬಂದ ನಂತರ ರಾಷ್ಟ್ರಮಟ್ಟದಲ್ಲಿ ಸಾಕಷ್ಟು ಅನಾಹುತಗಳು ಸಂಭವಿಸಿವೆ. ದಲಿತರು, ಅಲ್ಪಸಂಖ್ಯಾತರ ಮೇಲೆ ನಿರಂತರವಾಗಿ ಹಲ್ಲೆಗಳು, ದೌರ್ಜನ್ಯಗಳು ನಡೆಯುತ್ತಿವೆ ಎಂದು ಎಐಸಿಸಿ ಅಲ್ಪಸಂಖ್ಯಾತರ ಘಟಕದ ರಾಷ್ಟ್ರೀಯ ಅಧ್ಯಕ್ಷ ಖುರ್ಷಿದ್ ಅಹ್ಮದ್ ಸಯೀದ್ ಆರೋಪಿಸಿದ್ದಾರೆ.

ಶನಿವಾರ ನಗರದ ರೇಸ್‌ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯಮಟ್ಟದಲ್ಲಿ ದೃಶ್ಯ ಮಾಧ್ಯಮಗಳು ಕೇಂದ್ರ ಸರಕಾರದ ಕೈಗೊಂಬೆಗಳಂತೆ ವರ್ತಿಸುತ್ತಿವೆ. ಜನರ ಸಂಕಷ್ಟಗಳ ಬಗ್ಗೆ ಮುದ್ರಣ ಮಾಧ್ಯಮಗಳು ಒಂದಷ್ಟು ಕೆಲಸ ಮಾಡುತ್ತಿವೆ ಎಂದರು.
 
ಗರಿಷ್ಠ ಮುಖಬೆಲೆಯ ನೋಟುಗಳ ಅಮಾನ್ಯೀಕರಣದಿಂದ ದೇಶದಲ್ಲಿ ಎಲ್ಲ ಮಾದರಿಯ ವ್ಯಾಪಾರ ವಹಿವಾಟುಗಳು ಸಂಕಷ್ಟಕ್ಕೆ ಸಿಲುಕಿವೆ. ಜಿಡಿಪಿ ದರ ಕುಸಿದಿದೆ. ಕೇಂದ್ರ ಸರಕಾರದ ನೀತಿಗಳಿಂದ ಯಾರೊಬ್ಬರೂ ನೆಮ್ಮದಿಯಿಂದ ಬದುಕುವ ಪರಿಸ್ಥಿತಿಯಿಲ್ಲ. ಜನರಿಗೆ ದೇಶದ ವಾಸ್ತವ ಸ್ಥಿತಿಯನ್ನು ಮನವರಿಕೆ ಮಾಡಲು ಕಾಂಗ್ರೆಸ್ ಪಕ್ಷವು ಸಾಮಾಜಿಕ ಜಾಲ ತಾಣಗಳ ಸಮರ್ಪಕ ಬಳಕೆಗೆ ಮುಂದಾಗಿದೆ ಎಂದು ಅವರು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ಆಡಳಿತವು ಇಡೀ ದೇಶಕ್ಕೆ ಮಾದರಿಯಾಗಿದೆ. ಕಳೆದ ನಾಲ್ಕು ವರ್ಷಗಳಲ್ಲಿ ರಾಜ್ಯ ಸರಕಾರವು ಎಲ್ಲ ಜನ ಸಮುದಾಯಗಳ ಕಲ್ಯಾಣಕ್ಕಾಗಿ ಜಾರಿಗೆ ತಂದಿರುವ ಯೋಜನೆಗಳು, ಕಾರ್ಯಕ್ರಮಗಳು ಪ್ರಶಂಸಾರ್ಹ ಎಂದು ಅವರು ಹೇಳಿದರು.
ರಾಜ್ಯದಲ್ಲಿ ಅಲ್ಪಸಂಖ್ಯಾತ ಸಮುದಾಯದ ಎರಡನೆ ಸಾಲಿನ ನಾಯಕತ್ವವನ್ನು ಬೆಳೆಸುವ ಅಗತ್ಯವಿದೆ. ಜಿಲ್ಲಾ ಮಟ್ಟದಲ್ಲಿ ಸಮಾವೇಶಗಳನ್ನು ನಡೆಸಿ, ಸ್ಥಳೀಯ ನಾಯಕತ್ವನ್ನು ಗುರುತಿಸುವ ಕೆಲಸ ಮಾಡುತ್ತೇವೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅಲ್ಪಸಂಖ್ಯಾತರಿಗೆ ಸೂಕ್ತ ಪ್ರಾತಿನಿಧ್ಯ ಕಲ್ಪಿಸಲು ಪ್ರಯತ್ನಿಸಲಾಗುವುದು ಎಂದು ಖುರ್ಷಿದ್ ಅಹ್ಮದ್ ತಿಳಿಸಿದರು.

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ರಾಜ್ಯದ ಅಲ್ಪಸಂಖ್ಯಾತರ ಘಟಕವನ್ನು ಮತ್ತಷ್ಟು ಬಲವರ್ಧನೆಗೊಳಿಸಬೇಕಿದೆ. ಜಿಲ್ಲಾಮಟ್ಟದಲ್ಲಿ ನಡೆಸುವ ಸಮಾವೇಶಗಳ ಸಂದರ್ಭದಲ್ಲಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ, ಕೆಪಿಸಿಸಿಗೆ ವರದಿಯನ್ನು ಕಳುಹಿಸಿಕೊಡುತ್ತೇವೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ರಾಜ್ಯ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ವೈ.ಸಯೀದ್ ಅಹ್ಮದ್, ಉಪಾಧ್ಯಕ್ಷ ಆಗಾ ಸುಲ್ತಾನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News