×
Ad

ಸಾಲಮನ್ನಾಕ್ಕೆ ಆಗ್ರಹಿಸಿ ಸಂಸದ ಪ್ರಹ್ಲಾದ್ ಜೋಶಿ ನಿವಾಸಕ್ಕೆ ರೈತರ ಮುತ್ತಿಗೆ

Update: 2017-07-08 19:25 IST

ಹುಬ್ಬಳ್ಳಿ, ಜು. 8: ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ರೈತರ ಸಾಲಮನ್ನಾಕ್ಕೆ ಆಗ್ರಹಿಸಿ ಸಂಸದ ಪ್ರಹ್ಲಾದ್ ಜೋಶಿ ಅವರ ನಿವಾಸಕ್ಕೆ ಧಾರವಾಡ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಶನಿವಾರ ಎತ್ತಿನ ಬಂಡಿಯೊಂದಿಗೆ ಆಗಮಿಸಿದ ಕಾರ್ಯಕರ್ತರು, ಕೇಂದ್ರದ ರೈತ ವಿರೋಧಿ ಧೋರಣೆಯನ್ನು ಖಂಡಿಸಿ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಜೋಶಿ ನಿವಾಸಕ್ಕೆ ಮುತ್ತಿಗೆ ಹಾಕಲು ತೆರಳುತ್ತಿದ್ದ ಕಾರ್ಯಕರ್ತರನ್ನು ಪೊಲೀಸರು ಮಾರ್ಗ ಮಧ್ಯೆ ತಡೆದರು.
ಈ ವೇಳೆ ಮಾತನಾಡಿದ ಮುಖಂಡರು, ರಾಜ್ಯ ಸರಕಾರ ಈಗಾಗಲೇ 50 ಸಾವಿರ ರೂ.ಗಳ ವರೆಗೆ ರೈತರು ಪಡೆದಿರುವ ಬೆಳೆ ಸಾಲವನ್ನು ಮನ್ನಾ ಮಾಡಲಾಗಿದೆ. ಅದೇ ರೀತಿ ಕೇಂದ್ರ ಸರಕಾರ ರಾಷ್ಟ್ರೀಕೃತ ಬ್ಯಾಂಕುಗಳ ಮೂಲಕ ರೈತರು ಪಡೆದಿರುವ ಕೃಷಿ ಸಾಲಮನ್ನಾ ಮಾಡಬೇಕೆಂದು ಆಗ್ರಹಿಸಿದರು.

ಈ ಸಂಬಂಧ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಪ್ರಹ್ಲಾದ್ ಜೋಶಿ, ರೈತರ ಸಾಲಮನ್ನಾ ವಿಚಾರ ಕೇವಲ ಒಂದು ರಾಜ್ಯಕ್ಕೆ ಸಂಬಂಧಿಸಿದ್ದಲ್ಲ. 29 ರಾಜ್ಯಗಳಿಗೂ ಸಂಬಂಧಿಸಿದೆ. ಹೀಗಾಗಿ ಪ್ರಧಾನಿ ಮೋದಿ ರೈತರಿಗೆ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಎಂದರು.

ರಾಜ್ಯ ಸರಕಾರದ ಸಾಲಮನ್ನಾ ಘೋಷಣೆಯಿಂದ ರೈತರಿಗೆ ಅನುಕೂಲವಾಗಿಲ್ಲ. ಸಾಲಮನ್ನಾಕ್ಕೆ ಶರತ್ತು ವಿಧಿಸಿದ್ದು, ಅದನ್ನು ಮೊದಲು ತೆಗೆದು ಹಾಕಬೇಕೆಂದ ಅವರು, ರಾಜ್ಯದ ರೈತರ ಸಾಲಮನ್ನಾ ಕುರಿತು ಪ್ರಧಾನಿ ಮೋದಿಯವರ ಗಮನಕ್ಕೆ ತರುತ್ತೇನೆ ಎಂದರು. ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ವಿನೋದ ಅಸೂಟಿ, ಪ್ರಧಾನ ಕಾರ್ಯದರ್ಶಿ ಸ್ವಾತಿ ಮಾಳಗಿ, ಗಣೇಶ ಕದಡಿ, ಆನಂದ ಚಿಕ್ಕಣ್ಣವರ, ಗಿರೀಶಗೌಡ ಮುದಿಗೌಡರ, ಆನಂದ ಕೇಶಗೊಂಡ, ಶಿವರಾಜ ಮಂಟೂರ, ಮೌನೇಶ ರೇವಣ್ಣವರ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News