ಜು.16: ಪಿಲಿಕುಳದ ಮತ್ಯೋತ್ಸವ, ಕ್ಷೇತ್ರೋತ್ಸವ
ಮಂಗಳೂರು, ಜು.9: ಕರ್ನಾಟಕ ಸರಕಾರದ ಮೀನುಗಾರಿಕಾ ಇಲಾಖೆ, ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮ ಮತ್ತು ಪಿಲಿಕುಳ ನಿಸರ್ಗಧಾಮದ ಆಶ್ರಯದಲ್ಲಿ ಜು.16ರಂದು ಬೆಳಗ್ಗೆ 10 ಗಂಟೆಗೆ ಡಾ.ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಲೇಕ್ ಗಾರ್ಡನ್‌ನಲ್ಲಿ ಪಿಲಿಕುಳ ಮತ್ಯೋತ್ಸವ ಮತ್ತು ಕ್ಷೇತ್ರೋತ್ಸವ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಮೀನುಗಾರಿಕಾ ಸಚಿವ ಪ್ರಮೋದ್ ಮಧ್ವರಾಜ್ ನೆರವೇರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಕೆರೆಯಲ್ಲಿ ಮೀನು ಮರಿಗಳನ್ನು ಬಿಡುವ ಕಾರ್ಯಕ್ರಮ ಕೂಡಾ ನೆರವೇರಲಿದೆ. ಜಿಲ್ಲೆಯ ಸಚಿವರು, ಜನ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
ಈ ಕಾರ್ಯಕ್ರಮವು ಜಿಲ್ಲೆಯ ಮೀನು ಪ್ರಿಯರಿಗೆ ಸುವರ್ಣಾವಕಾಶವಾಗಿದೆ. ಅಂದು ಪಿಲಿಕುಳದ ಲೇಕ್ ಗಾರ್ಡನ್‌ನ ಕೆರೆಯಲ್ಲಿ ಬೆಳೆಸಿದ ಕಾಟ್ಲಾ, ರೋಹು, ಸಾಮಾನ್ಯ ಗೆಂಡೆ ಹಾಗೂ ಇತರ ಮೀನುಗಳನ್ನು ಹಿಡಿದು, ಸಾರ್ವಜನಿಕ ಹರಾಜು ಮಾಡಲಾಗುವುದು.ಮೀನುಗಾರಿಕಾ ಅಭಿವೃದ್ಧಿ ನಿಗಮದಿಂದ ಸಿಹಿ ನೀರಿನ ಮೀನುಗಳು , ಪಾಂಪ್ಲೆಟ್, ಅಂಜಲ್, ಬಂಗುಡೆ, ಸಿಗಡಿ, ಬೊಂಡಾಸು ಹಾಗೂ ಇನ್ನಿತರ ತಾಜಾ ಮೀನು ಮತ್ತು ಮೌಲ್ಯವರ್ಧಿತ ಮೀನು ಉತ್ಪನ್ನಗಳ ಮಾರಾಟದ ವ್ಯವಸ್ಥೆ ಮಾಡಲಾಗಿದೆ. ಅದೇ ರೀತಿ ತಾಜಾ ಸಮುದ್ರ ಮೀನುಗಳ ಫ್ರೈ, ಫಿಶ್ ಮಸಾಲಾ, ಫಿಶ್ ಕಬಾಬ್ ಹಾಗೂ ಇನ್ನಿತರ ಮೀನಿನ ಖಾದ್ಯಗಳನ್ನು ಶುಚಿ ರುಚಿಯಾಗಿ ಸ್ಥಳದಲ್ಲೇ ತಯಾರಿಸಿ ಮಾರಾಟ ಮಾಡಲಾಗುವುದು.
ವಿವಿಧ ರೀತಿಯ ಮೀನುಮರಿಗಳ ಮತ್ತು ಒಣ ಮೀನುಗಳ ಪ್ರದರ್ಶನ ಮತ್ತು ಮಾರಾಟ, ಮೀನುಗಾರಿಕಾ ಮಹಾವಿದ್ಯಾಲಯದಿಂದ ಮೀನುಗಾರಿಕೆ ಕುರಿತು ಅರಿವು ಮೂಡಿಸುವುದು ಮತ್ತು ಅಲಂಕಾರಿಕಾ ಮೀನುಗಳ ಪ್ರದರ್ಶನ ಮತ್ತು ಮಾರಾಟ ಕೂಡಾ ನಡೆಯಲಿದೆ. ದಿನವಿಡೀ ನಡೆಯುವ ಈ ಕಾರ್ಯಕ್ರಮದಲ್ಲಿ ಮೀನುಗಾರಿಕಾ ಮಹಾವಿದ್ಯಾಲಯ ಮಂಗಳೂರು ಮತ್ತು ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿದೆ.
ಕಾರ್ಯಕ್ರಮಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಲು ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಪ್ರಕಟನೆ ತಿಳಿಸಿದೆ.