×
Ad

ಕೋಮುಗಲಭೆ ಹೆಚ್ಚಾಗಲು ಬಿಜೆಪಿ ಕಾರಣ: ಡಾ.ಜಿ.ಪರಮೇಶ್ವರ್

Update: 2017-07-10 18:12 IST

ಬೆಂಗಳೂರು, ಜು.10: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುಗಲಭೆಗಳು ಹೆಚ್ಚಾಗಲು ಮುಖ್ಯಮಂತ್ರಿ ಹಾಗೂ ರಾಜ್ಯ ಸರಕಾರ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಮಾಡಿರುವ ಆರೋಪಕ್ಕೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ತಿರುಗೇಟು ನೀಡಿದ್ದಾರೆ.
ಸೋಮವಾರ ನಗರದ ಕ್ವೀನ್ಸ್‌ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಗಲಭೆ ಹೆಚ್ಚಾಗಲು ಬಿಜೆಪಿ ಕಾರಣ ಎಂದು ಸ್ಥಳೀಯ ಮುಖಂಡರೇ ಮಾತನಾಡಿಕೊಳ್ಳುತ್ತಿದ್ದಾರೆ ಎಂದರು.

ಈ ರೀತಿಯ ಬೆಳವಣಿಗೆಗಳು ನಡೆಯಬಾರದು. ಗಲಭೆಗಳನ್ನು ಹತ್ತಿಕ್ಕಬೇಕು, ಜನರು ಶಾಂತಿಯಿಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಾನು ಗೃಹ ಸಚಿವನಾಗಿದ್ದಾಗ ಎಲ್ಲ ವಿಚಾರಗಳ ಬಗ್ಗೆ ಪ್ರತಿನಿತ್ಯ ನಿರ್ವಹಣೆ ಮಾಡುತ್ತಿದ್ದೆ ಎಂದು ಅವರು ಹೇಳಿದರು.
ಯಾವುದೇ ಕಾರಣಕ್ಕೂ ಅಮಾಯಕರ ಕೊಲೆ ಆಗಬಾರದು ಅಂತ ನಾವು ಕೆಲಸ ಮಾಡಿದ್ದೇವೆ. ಯಡಿಯೂರಪ್ಪ ರಾಜಕೀಯ ಕಾರಣಕ್ಕಾಗಿ ಮುಖ್ಯಮಂತ್ರಿ ಹಾಗೂ ಸರಕಾರದ ವಿರುದ್ಧ ಆರೋಪಗಳನ್ನು ಮಾಡುತ್ತಿದ್ದಾರೆ. ಅವರು ಮೊದಲು ಸಂಘ ಸಂಸ್ಥೆಗಳನ್ನು ನಿಯಂತ್ರಿಸಲು ಪ್ರಯತ್ನಿಸಲಿ ಎಂದು ಪರಮೇಶ್ವರ್ ಆಗ್ರಹಿಸಿದರು.

ಗೃಹ ಸಚಿವರು ಇಲ್ಲದ ಕಾರಣಕ್ಕಾಗಿ ಈ ರೀತಿಯ ಗಲಭೆಗಳು ಆಗುತ್ತಿವೆಯೆ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಗೃಹ ಇಲಾಖೆಯು ಸದ್ಯಕ್ಕೆ ಮುಖ್ಯಮಂತ್ರಿ ಬಳಿಯಿದೆ. ಅವರು ಸಮರ್ಥವಾಗಿ ನಿರ್ವಹಿಸುತ್ತಿದ್ದಾರೆ ಎಂದರು.
ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳ ಸಭೆಯನ್ನು ಕರೆದಿರುವ ಮುಖ್ಯಮಂತ್ರಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಅಗತ್ಯ ಸೂಚನೆಗಳನ್ನು ನೀಡುತ್ತಿದ್ದಾರೆ ಎಂದು ಅವರು ಹೇಳಿದರು.

ದಕ್ಷಿಣ ಕನ್ನಡ ಜಿಲ್ಲೆಯ ಪರಿಸ್ಥಿತಿಯನ್ನು ಹಿಂದೂ ಹಾಗೂ ಮುಸ್ಲಿಂ ಸಂಘಟನೆಗಳು ಅರ್ಥ ಮಾಡಿಕೊಳ್ಳಬೇಕು. ಆರೆಸೆಸ್ಸ್, ಬಜರಂಗದಳ, ಶ್ರೀರಾಮಸೇನೆಯನ್ನು ನಿಷೇಧಿಸುವಂತೆಯೂ ಕೆಲವು ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ನಾಯಕರಿಗೆ ಪರಮೇಶ್ವರ್ ತಿರುಗೇಟು ನೀಡಿದರು.
ಕೋಮುಗಲಭೆಗಳು ನಡೆದಾಗ ಮತೀಯ ಸಂಘಟನೆಗಳನ್ನು ನಿಷೇಧಿಸುವ ಆಗ್ರಹ ಬರುತ್ತದೆ. ಕಾಂಗ್ರೆಸ್ ಪಕ್ಷವು ಯಾರನ್ನೂ ಟಾರ್ಗೆಟ್ ಮಾಡುತ್ತಿಲ್ಲ. ನಾವು ಶಾಂತಿಯನ್ನು ಬಯಸುತ್ತೇವೆ. ಬಿಜೆಪಿ ಹಾಗೂ ಅದರ ಅಂಗ ಸಂಘಟನೆಗಳು ಸುಮ್ಮನಿದ್ದರೆ ಎಲ್ಲವೂ ಸರಿಹೋಗುತ್ತೆ ಎಂದು ಅವರು ಹೇಳಿದರು.
ರಾಜ್ಯ ಸರಕಾರ, ಮುಖ್ಯಮಂತ್ರಿ ಸೇರಿದಂತೆ ಇನ್ನಿತರರ ಬಗ್ಗೆ ಗೌರವಯುತವಾಗಿ ಮಾತನಾಡುವುದನ್ನು ಸಂಸದೆ ಶೋಭಾ ಕರಂದ್ಲಾಜೆ ಕಲಿಯುವುದು ಉತ್ತಮ ಎಂದು ಪರಮೇಶ್ವರ್ ಸಲಹೆ ನೀಡಿದರು.

ಮುಂಬರುವ ವಿಧಾನಸಭಾ ಕ್ಷೇತ್ರದಲ್ಲಿ ತುಮಕೂರು ಜಿಲ್ಲೆಯ ಕೊರಟಗೆರೆ ಕ್ಷೇತ್ರದಿಂದ ಕಣಕ್ಕಿಳಿಯುವ ಕುರಿತು ಸ್ಥಳೀಯ ಮುಖಂಡರ ಸಭೆ ಕರೆದು ಚರ್ಚೆ ಮಾಡಿದ್ದೇನೆ. ಅಂತಿಮವಾಗಿ ನನಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಕೊಡುವುದು ಹೈಕಮಾಂಡ್ ಎಂದು ಪರಮೇಶ್ವರ್ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News