ಪ್ರಥಮ ಚಿಕಿತ್ಸಾ ಕಲಿಕೆ ಕಡ್ಡಾಯಗೊಳ್ಳಲಿ: ಬಿ.ಆರ್. ಶೆಟ್ಟಿ
ಉಡುಪಿ, ಜು.11: ಪ್ರಥಮ ಚಿಕಿತ್ಸಾ ತರಬೇತಿ ಮುಂದುವರಿದ ಪಾಶ್ಚಾತ್ಯ ದೇಶಗಳಲ್ಲಿ ಪ್ರತಿಯೊಬ್ಬ ನಾಗರಿಕರಿಗೆ, ಅವರ ವಿದ್ಯಾಭ್ಯಾಸದ ಸಮಯದಲ್ಲೇ ಕಡ್ಡಾಯವಾಗಿ ನೀಡಲಾಗುತ್ತದೆ. ನಮ್ಮ ದೇಶದಲ್ಲೂ ಪ್ರಥಮ ಚಿಕಿತ್ಸಾ ಕಲಿಕೆಯನ್ನು ಶಿಕ್ಷಣದಲ್ಲಿ ಕಡ್ಡಾಯಗೊಳಿಸಬೇಕು ಎಂದು ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಕರ್ನಾಟಕ ರಾಜ್ಯ ಶಾಖೆಯ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಹೇಳಿದ್ದಾರೆ.
ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಉಡುಪಿ ಜಿಲ್ಲಾ ಘಟಕ, ಅಜ್ಜರಕಾಡಿನ ಡಾ.ಜಿ.ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕದ ವಿದ್ಯಾರ್ಥಿಗಳಿಗೆ ಇತ್ತೀಚೆಗೆ ಹೆನ್ರಿ ಡ್ಯುನಾಂಟ್ ಹಾಲ್‌ನಲ್ಲಿ ಏರ್ಪಡಿ ಸಿದ್ದ ಪ್ರಥಮ ಚಿಕಿತ್ಸಾ ತರಬೇತಿ ಹಾಗೂ ಜನಸಂಖ್ಯಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಪ್ರಸ್ತುತ ಇಡೀ ರಾಜ್ಯದಲ್ಲಿ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಕರ್ನಾಟಕ ರಾಜ್ಯ ಶಾಖೆ ಆನ್‌ಲೈನ್ ಮೂಲಕ 7 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಪ್ರಥಮ ಚಿಕಿತ್ಸಾ ತರಬೇತಿ ನೀಡುವ ಕಾರ್ಯಕ್ರಮವನ್ನು ಪ್ರಾರಂಭಿಸಿದೆ. ಈ ಅವಕಾಶವನ್ನು ರಾಜ್ಯದ ಎಲ್ಲಾ ಕಾಲೇಜುಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದವರು ವಿನಂತಿಸಿದರು.
ಅಧ್ಯಕ್ಷತೆಯನ್ನು ವಹಿಸಿದ್ದ ಜಿಲ್ಲಾ ಘಟಕದ ಡಾ. ಅಶೋಕ್ ಕುಮಾರ್ ವೈ.ಜಿ. ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಡಾ.ಜಿ.ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ಜಗದೀಶ್ ರಾವ್ ಉಪಸ್ಥಿತರಿದ್ದರು.
ಯುವ ರೆಡ್‌ಕ್ರಾಸ್‌ನ ಸಂಚಾಲಕಿ ಶೋಭಾ ಅತಿಥಿಗಳನ್ನು ಸ್ವಾಗತಿಸಿದರು. ಜಿ.ಸಿ.ಜನಾರ್ಧನ್ ವಂದಿಸಿದರು. ಡಾ. ಅರವಿಂದ ನಾಯಕ್ ಅಮ್ಮುಂಜೆ ಕಾರ್ಯಕ್ರಮ ನಿರೂಪಿಸಿದರು. ಡಾ. ರಾಮಚಂದ್ರ ಕಾಮತ್ 120 ವಿದ್ಯಾರ್ಥಿ ಗಳಿಗೆ ಪ್ರಥಮ ಚಿಕಿತ್ಸಾ ತರಬೇತಿ ನೀಡಿದರು.