ದ.ಕ. ಜಿಲ್ಲೆಯಲ್ಲಿ 5 ವರ್ಷಗಳ ಅವಧಿಯಲ್ಲಿ ನಡೆದ ಅಪರಾಧ ಪ್ರಕರಣಗಳ ಮರುಪರಿಶೀಲನೆಗೆ ಸೂಚನೆ: ಡಿಜಿಪಿ

Update: 2017-07-14 13:01 GMT

ಮಂಗಳೂರು, ಜು.14: ಕಳೆದ 5 ವರ್ಷಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ನಡೆದ ಅಪರಾಧ ಪ್ರಕರಣಗಳ ಮರುಪರಿಶೀಲನೆಗೆ ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಆರ್.ಕೆ.ದತ್ತ ಹೇಳಿದ್ದಾರೆ.

ನಗರದ ಕಮಿಷನರ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕಳೆದ 5 ವರ್ಷಗಳ ಅವಧಿಯಲ್ಲಿ ನಡೆದ ರೌಡಿಸಂ, ಹಲ್ಲೆ, ಕೊಲೆ, ಕೊಲೆಯತ್ನ ಸೇರಿದಂತೆ ಎಲ್ಲಾ ಅಪರಾಧ ಪ್ರಕರಣಗಳ ಸಂಪೂರ್ಣ ಮಾಹಿತಿಯನ್ನು ನೀಡುವಂತೆ ಹಾಗೂ ಮರುಪರಿಶೀಲನೆಗೆ ಸೂಚಿಸಿದ್ದೇನೆ. ಪದೇ ಪದೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುವವರ ವಿರುದ್ಧ ಗೂಂಡಾ ಕಾಯ್ದೆ, ಗಡೀಪಾರು, ಕೋಕಾ ಕಾಯ್ದೆ ಹಾಕಲು ಸೂಚನೆ ನೀಡಿದ್ದೇನೆ ಎಂದರು.

ನನಗೆ ಜಿಲ್ಲೆಯ ಪೊಲಿಸ್ ಅಧಿಕಾರಿಗಳ ಬಗ್ಗೆ ನಂಬಿಕೆ ಇದೆ. ಜಿಲ್ಲೆಯ ಪರಿಸ್ಥಿತಿಯನ್ನು ಇತರರು ವಿವರಿಸುವುದಕ್ಕೂ, ವಾಸ್ತವ ಸ್ಥಿತಿಗೂ ವ್ಯತ್ಯಾಸಗಳಿವೆ. ಈಗಾಗಲೇ ನಾನು ಹಲವು ಪ್ರದೇಶಗಳಿಗೆ ಭೇಟಿ ನೀಡಿದ್ದೇನೆ. ಜನಜೀವನ ಸಹಜಸ್ಥಿತಿಯಲ್ಲಿದ್ದು, ಪೊಲೀಸರು ಪರಿಸ್ಥಿತಿ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜಿಲ್ಲೆಯ ಪೊಲೀಸರು ಉತ್ತಮ ರೀತಿಯಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಎಡಿಜಿಪಿ ಅಲೋಕ್ ಮೋಹನ್, ಐಜಿಪಿ ಹರಿಶೇಖರನ್, ಕಮಿಷನರ್ ಟಿ.ಆರ್. ಸುರೇಶ್ ಹಾಗೂ ಡಿಸಿಪಿ ಹನುಮಂತರಾಯ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News