ನಿಷೇಧಾಜ್ಞೆ ತೆರವು ಬಳಿಕ ಜೆಡಿಎಸ್ ಶಾಂತಿಯಾತ್ರೆ: ಕುಮಾರಸ್ವಾಮಿ
ಬೆಂಗಳೂರು, ಜು. 14: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷದಿಂದ ಹಮ್ಮಿಕೊಂಡಿದ್ದ ಶಾಂತಿ-ಸೌಹಾರ್ದತೆ ಯಾತ್ರೆಯನ್ನು ನಿಷೇಧಾಜ್ಞೆ ತೆರವುಗೊಳಿಸಿದ ಬಳಿಕ ನಡೆಸಲು ಉದ್ದೇಶಿಸಲಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಶುಕ್ರವಾರ ವಿಧಾನಸೌಧದಲ್ಲಿನ ಜೆಡಿಎಸ್ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ನೆಲೆಸುವುದು ಎರಡು ರಾಷ್ಟ್ರೀಯ ಪಕ್ಷಗಳಿಗೆ ಬೇಕಿಲ್ಲ. ಹೀಗಾಗಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಯತ್ನಿಸುತ್ತಿವೆ ಎಂದು ದೂರಿದರು.
ರಾಜ್ಯದ ಇತಿಹಾಸದಲ್ಲೆ 25 ದಿನಗಳ ಸುದೀರ್ಘಾವಧಿ ನಿಷೇಧಾಜ್ಞೆ ವಿಧಿಸಿರಲಿಲ್ಲ. ಇದೀಗ ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿದ್ದು, ಶಾಂತಿ ಸ್ಥಾಪಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಇದೇ ವೇಳೆ ಆಗ್ರಹಿಸಿದರು.
ಭವಿಷ್ಯದ ಆರ್ಥಿಕ ಶಕ್ತಿ: ಬೆಂಗಳೂರಿಗೆ ಆರ್ಥಿಕವಾಗಿ ಪೈಪೋಟಿ ನೀಡುವ ನಿಟ್ಟಿನಲ್ಲಿ ಬೆಳೆಯುತ್ತಿರುವ ಮಂಗಳೂರು ನಗರದಲ್ಲಿ ಕೋಮುಗಲಭೆ ಹಿನ್ನೆಲೆಯಲ್ಲಿ ಬಂಡವಾಳ ಹೂಡಿಕೆ ಮೇಲೆ ದುಷ್ಪರಿಣಾಮ ಬೀರಲಿದೆ ಎಂದು ಎಚ್ಚರಿಸಿದ ಅವರು, ಹುಬ್ಬಳ್ಳಿಯ ಈದ್ಗಾ ಮೈದಾನದ ಸಮಸ್ಯೆ ಇತ್ಯರ್ಥ್ಯದ ಮಾದರಿಯಲ್ಲೆ ಮಂಗಳೂರಿನ ಸಮಸ್ಯೆಗೆ ಪರಿಹಾರ ಕಲ್ಪಿಸಲು ಜೆಡಿಎಸ್ ಉದ್ದೇಶಿಸಿದೆ ಎಂದು ಸ್ಪಷ್ಟಪಡಿಸಿದರು.
ವಿಜಯಪುರದಲ್ಲಿ ರೈತ ಸಮಾವೇಶ: ಜೆಡಿಎಸ್ ವರಿಷ್ಠ ದೇವೇಗೌಡ ಅವರೊಂದಿಗೆ ನಾಳೆಯಿಂದ ಮೂರು ದಿನಗಳ ವಿಧಾನಸಭೆ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಲು ಸಮಾಲೋಚನೆ ನಡೆಸಲಿದ್ದೇನೆ. ಆ ಬಳಿಕ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದರು.
ಮುಂದಿನ ವಾರದಿಂದ ಉತ್ತರ ಕರ್ನಾಟಕ ಭಾಗದಲ್ಲಿ ಒಂದು ತಿಂಗಳ ಪ್ರವಾಸ ಕೈಗೊಳ್ಳಲಿದ್ದು, ಸೆಪ್ಟಂಬರ್‌ನಲ್ಲಿ ವಿಜಯಪುರದಲ್ಲಿ 10 ಲಕ್ಷ ಮಂದಿ ರೈತರನ್ನು ಸೇರಿಸಿ ಬೃಹತ್ ಸಮಾವೇಶ ನಡೆಸಲಾಗುವುದು ಎಂದು ಕುಮಾರಸ್ವಾಮಿ ಇದೇ ವೇಳೆ ಮಾಹಿತಿ ನೀಡಿದರು.