×
Ad

ಬ್ಯಾಂಕ್, ಸೊಸೈಟಿಗಳಲ್ಲಿ ಮಹಿಳೆಯರಿಗೆ ಬಡ್ಡಿ ರಹಿತ ಸಾಲ: ಉಮಾಶ್ರೀ

Update: 2017-07-15 18:37 IST

ದಾವಣಗೆರೆ, ಜು.15: ಬ್ಯಾಂಕ್ ಹಾಗೂ ಸೊಸೈಟಿಗಳಲ್ಲಿ ಮಹಿಳೆಯರಿಗೆ ಬಡ್ಡಿ ರಹಿತ ಸಾಲ ನೀಡಲು ನಮ್ಮ ಸರಕಾರ ಮುಂದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಉಮಾಶ್ರೀ ಹೇಳಿದರು.

ಶನಿವಾರ ಇಲ್ಲಿನ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಸಮುದಾಯ ಭವನದಲ್ಲಿ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಎಐಟಿಯುಸಿ ಫೆಡರೇಷನ್ ವತಿಯಿಂದ ಏರ್ಪಡಿಸಿದ್ದ ಸನ್ಮಾನ ಸಮಾರಂಭ ಹಾಗೂ ಸಂಘಟನೆಯ ಹೋರಾಟದ ವಿಜಯೋತ್ಸವ ಮತ್ತು ಐಸಿಡಿಎಸ್ ಜಿಲ್ಲೆಯ ಎಲ್ಲಾ ಅಧಿಕಾರಿಗಳಿಗೆ ಹಾಗೂ ರಾಜ್ಯ ಸಂಘಟನೆಯ ನಾಯಕರಿಗೆ ಗೌರವ ಸಮರ್ಪಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಶೀಘ್ರವೇ ಬಡ್ಡಿ ರಹಿತ ಸಾಲ ನೀಡುವ ಯೋಜನೆ ಜಾರಿಯಾಗಲಿದ್ದು, ಇದರಿಂದ ಮಹಿಳಾ ಸಬಲೀಕರಣಕ್ಕೆ ಹಾಗೂ ಸ್ವಾವಲಂಬಿ ಬದುಕಿಗೆ ಇದು ವರದಾನವಾಗಲಿದೆ. ಜೊತೆಗೆ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಆಯ್ಕೆ ಮಾಡುವಲ್ಲಿ ಹೆಚ್ಚಿನ ಭ್ರಷ್ಟಾಚಾರ ನಡೆಯುತ್ತಿರುವ ಹಿನ್ನೆಲೆಯಲ್ಲಿ ಆನ್‌ಲೈನ್ ಮೂಲಕ ಅಪ್ಲಿಕೇಶನ್ ಹಾಕುವ ವ್ಯವಸ್ಥೆಯನ್ನು ಶೀಘ್ರವೇ ಜಾರಿಗೆ ತರಲಾಗುತ್ತಿದೆ ಎಂದರು.
ಅತ್ಯಾಚಾರ, ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಆತ್ಮಸ್ತೈರ್ಯ ತುಂಬುವ ನಿಟ್ಟಿನಲ್ಲಿ ಮೊಟ್ಟಮೊದಲ ಬಾರಿಗೆ ಎಲ್ಲಾ ಜಿಲ್ಲೆಯಲ್ಲಿ ವಿಶೇಷ ಚಿಕಿತ್ಸಾ ಘಟಕಗಳನ್ನು ತೆರೆದಿದ್ದು, ಮುಂದಿನ ದಿನಗಳಲ್ಲಿ ತಾಲೂಕು ಕೇಂದ್ರಗಳಲ್ಲೂ ಈ ಘಟಕ ಆರಂಭಿಸಲಾಗುತ್ತಿದೆ. ಇದರಿಂದ ಅತ್ಯಾಚಾರಕ್ಕೋಳಗಾದ ಮಹಿಳೆಗೆ ಸೂಕ್ತ ಚಿಕಿತ್ಸೆ, ಕಾನೂನು ಸಲಹೆ, ಪೊಲೀಸರು ಸಹ ಅಲ್ಲಿಯೇ ಬಂದು ಮಹಿಳೆ ಹೇಳಿಕೆಯನ್ನು ದಾಖಲಿಸಿಕೊಳ್ಳುವ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News