×
Ad

ಕೊಳ್ನಾಡು ಬಿಜೆಪಿ ಶಕ್ತಿಕೇಂದ್ರದ ಕಾರ್ಯಕರ್ತರ ಸಭೆ

Update: 2017-07-15 20:50 IST

ವಿಟ್ಲ,ಜು.15: ರಾಷ್ಟ್ರ ವಿಕಾಸದ ಚಿಂತನೆಯೊಂದಿಗೆ ಬಿಜೆಪಿ ಆಡಳಿತ ನಡೆಸಿದರೆ, ಕಾಂಗ್ರಸ್ ಕುಟುಂಬ ರಾಜಕಾರಣ ನಡೆಸುತ್ತಿದೆ. ಮುಂದಿನ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ 150 ಕ್ಕಿಂತಲೂ ಅಧಿಕ ಸ್ಥಾನಗಳನ್ನು ಪಡೆಯಲಿದೆ. ದೇಶದ ಪ್ರಚಲಿತ ರಾಜನೀತಿಯಿಂದ ಜಗತ್ತೇ ನಿಬ್ಬೆರಗಾಗಿ ನೋಡುವಂತಹ ರೀತಿಯಲ್ಲಿ ಪರಿವರ್ತನೆಯಾಗುತ್ತಿದೆ. ಭ್ರಷ್ಟಾಚಾರ ರಹಿತ ಆರ್ಥಿಕ ಶಿಸ್ತಿನ ಆಡಳಿತಕ್ಕೆ ದೀನ್‍ದಯಾಳ್ ಉಪಾಧ್ಯಾಯ, ಶ್ಯಾಮ್‍ಪ್ರಸಾದ್ ಮುಖರ್ಜಿಯಂತಹ ಹಿರಿಯ ಆದರ್ಶ ದೇಶಪ್ರೇಮಿ ಚಿಂತಕರೇ ಕಾರಣ ಎಂದು ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಹೇಳಿದರು.

ಅವರು ಕುಡ್ತಮುಗೇರು ವಿಜಯಶ್ರೀ ಕಲ್ಯಾಣ ಮಂಟಪದಲ್ಲಿ ಶನಿವಾರ ನಡೆದ ಕೊಳ್ನಾಡು ಬಿಜೆಪಿ ಶಕ್ತಿಕೇಂದ್ರದ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಕರಾವಳಿ ಜಿಲ್ಲೆಯಲ್ಲಿ ಅಧಿಕಾರ ಹಿಡಿಯುವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಕುಮ್ಮಕ್ಕಿನಿಂದ ಕೋಮು ಸಂಘರ್ಷ ನಡೆಸಲಾಗುತ್ತಿದೆ. ಪರೋಕ್ಷ ಬೆಂಬಲ ನೀಡಲಾಗುತ್ತಿದೆ. ಅಮಾಯಕ ಬಿಜೆಪಿ ಕಾರ್ಯಕರ್ತರನ್ನು ವಿನಾ ಕಾರಣ ಪ್ರಕರಣದಲ್ಲಿ ಸಿಲುಕಿಸಿದರೆ ಅದಕ್ಕೆ ಸರಿಯಾದ ಬೆಲೆ ತೆರಬೇಕಾದೀತು ಎಂದು ತಿಳಿಸಿದರು.

ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಮಾತನಾಡಿ ನರೇಂದ್ರ ಮೋದಿಯವರ ಆಡಳಿತವನ್ನು ಜಗತ್ತೇ ಒಪ್ಪಿದೆ. ಪ್ರಧಾನಿ ನರೇಂದ್ರ ಮೋದಿಯವರ ಆಡಳಿತಾವಧಿಯಲ್ಲಿ ದೇಶದ ಪ್ರತಿ ಗ್ರಾಮಗಳಿಗೂ ಮೂಲ ಸೌಕರ್ಯ ಒದಗಿಸಲಾಗಿದೆ. ವೇಗವಾಗಿ ಬೆಳೆಯುತ್ತಿರುವ ತಂತ್ರಜ್ಞಾನದೊಂದಿಗೆ ಪ್ರತಿಯೊಬ್ಬರ ಅಭಿವೃದ್ಧಿಯ ಕನಸನ್ನು ಸಾಕಾರಗೊಳಿಸುವ ನಾನಾ ಯೋಜನೆಗಳನ್ನು ಕೇಂದ್ರ ಸರಕಾರ ಹಮ್ಮಿಕೊಂಡಿದೆ. ದ.ಕ ಜಿಲ್ಲೆ ರಸ್ತೆ ಅಭಿವೃದ್ಧಿಗೆ ಈಗಾಗಲೇ 15 ಸಾವಿರ ಕೋ. ರೂ. ಕೇಂದ್ರ ಒದಗಿಸಿದ್ದು, ಮುಂದಿನ ದಿನಗಳಲ್ಲಿ 1.18 ಲಕ್ಷ ಕೋಟಿ ರೂ. ವೆಚ್ಚದಲ್ಲಿ ಮಂಗಳೂರು-ಬೆಂಗಳೂರು ಸೂಪರ್ ಎಕ್ಸ್‍ಪ್ರೆಸ್ ಚತುಷ್ಪಥ ರಸ್ತೆ ನಿರ್ಮಾಣವಾಗಲಿದೆ ಎಂದು ತಿಳಿಸಿದರು.

ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಜೀವ ಮಠಂದೂರು ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಉದಯ ಕುಮಾರ್ ಶೆಟ್ಟಿ, ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ, ಬಿಜೆಪಿ ಮುಖಂಡ ರಾಜೇಶ್ ನಾೈಕ್ ಉಳಿಪ್ಪಾಡಿಗುತ್ತು, ಜಿಲ್ಲೆ ಬಿಜೆಪಿ ವಕ್ತಾರ ಜಿತೇಂದ್ರ ಎಸ್.ಕೊಟ್ಟಾರಿ, ತಾ.ಪಂ.ಸದಸ್ಯ ನಾರಾಯಣ ಶೆಟ್ಟಿ ಕುಲ್ಯಾರು, ಜಿಲ್ಲಾ ಬಿಜೆಪಿ ಪ.ಜಾ./ಪ.ಪಂ.ಮೋರ್ಚಾ ಅಧ್ಯಕ್ಷ ದಿನೇಶ್ ಅಮ್ಟೂರು, ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾಕ ಮೋರ್ಚಾ ಅಧ್ಯಕ್ಷ ಮಹಮ್ಮದ್ ಮುಸ್ತಫಾ, ಜಿಲ್ಲೆ ಬಿಜೆಪಿ ಹಿಂದುಳಿದ ವರ್ಗದ ಕೃಷ್ಣಪ್ಪ ಪೂಜಾರಿ ಕಲ್ಲಡ್ಕ, ಕೊಳ್ನಾಡು ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷ ವಿಶ್ವನಾಥ ಪೂಜಾರಿ, ಬಂಟ್ವಾಳ ಬಿಜೆಪಿ ಮಂಡಲ ಕಾರ್ಯದರ್ಶಿ ರಾಮದಾಸ ಬಂಟ್ವಾಳ ಮೊದಲಾದವರು ಉಪಸ್ಥಿತರಿದ್ದರು.

ಬಂಟ್ವಾಳ ಬಿಜೆಪಿ ಮಂಡಲ ಅಧ್ಯಕ್ಷ ದೇವದಾಸ ಶೆಟ್ಟಿ ಬಂಟ್ವಾಳ ಸ್ವಾಗತಿಸಿ, ಕೊಳ್ನಾಡು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಬಾಲಕೃಷ್ಣ ಸೆರ್ಕಳ ಕಾರ್ಯಕ್ರಮ ನಿರ್ವಹಿಸಿದರು. ಬಂಟ್ವಾಳ ಬಿಜೆಪಿ ಮಂಡಲ ಕಾರ್ಯದರ್ಶಿ ಮೋನಪ್ಪ ದೇವಸ್ಯ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News