ನರಗುಂದದಲ್ಲಿ ರೈತರಿಂದ ಪ್ರತಿಭಟನೆ
Update: 2017-07-16 19:01 IST
ಗದಗ, ಜು. 16: ಕೃಷಿ ಚಟುವಟಿಕೆಗಳಿಗೆ ಮತ್ತು ಕುಡಿಯುವ ನೀರು ಒದಗಿಸಲು ಕಳಸಾ-ಬಂಡೂರಿ(ಮಹದಾಯಿ) ನಾಲೆ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಎರಡು ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಸಾವಿರಾರು ರೈತರು ರವಿವಾರ ಬೃಹತ್ ಪ್ರತಿಭಟನೆ ನಡೆಸಿದರು. 20 ಮಂದಿ ಮಠಾಧೀಶರು, ಸುಮಾರು 10 ಸಾವಿರಕ್ಕೂ ಹೆಚ್ಚು ರೈತರು ಸೇರಿ ಪಟ್ಟಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಪ್ರತಿಭಟನೆ ನಡೆಸಿದರು.
ರೈತರ ಈ ಬೃಹತ್ ಪ್ರತಿಭಟನೆ ಹಿನ್ನೆಲೆಯಲ್ಲಿ ನರಗುಂದ ಪಟ್ಟಣದಲ್ಲಿ ಅಘೋಷಿತ ಬಂದ್ ಏರ್ಪಟ್ಟಿತ್ತು. ಅಂಗಡಿ-ಮುಂಗಟ್ಟುಗಳು, ವ್ಯಾಪಾರ-ವಹಿವಾಟುಗಳು ಸ್ಥಗಿತಗೊಂಡಿದ್ದವು. ಶಾಲಾ-ಕಾಲೇಜುಗಳನ್ನು ಮುಚ್ಚಲಾಗಿತ್ತು. ಪ್ರತಿಭಟನೆ ಪ್ರಯುಕ್ತ ಭಾರೀ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.