‘ರೈತರ ಸಾಲ ಮನ್ನಾಕ್ಕೆ ಬಿಜೆಪಿ ಪಕ್ಷಕೇಂದ್ರದ ಮೇಲೆ ಒತ್ತಡ ಹೇರಲಿ’ : ಕಾಂಗ್ರೆಸ್
ಉಡುಪಿ, ಜು.17: ರಾಜ್ಯದಲ್ಲಿ ರೈತರ ಸಾಲ ಮನ್ನಾ ಮಾಡುವ ಬಗ್ಗೆ ಕರ್ನಾಟಕ ಬಿಜೆಪಿ ಪ್ರತಿಭಟನೆಗಳನ್ನು ನಡೆಸಿ ರೈತರ ಬಗ್ಗೆ ಅತೀವ ಕಾಳಜಿ ಪ್ರದರ್ಶಿಸುತಿದ್ದು, ಬಿಜೆಪಿಗೆ ರೈತರ ಬಗ್ಗೆ ನಿಜವಾದ ಕಾಳಜಿ ಇದ್ದಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿರುವ ರೈತರ ಸಾಲ ಮನ್ನಾ ಮಾಡುವಂತೆ ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಬೇಕು ಎಂದು ಜಿಲ್ಲಾ ಕಾಂಗ್ರೆಸ್ ಹೇಳಿದೆ.
ರಾಜ್ಯದಲ್ಲಿ ಭೀಕರ ಬರ ಆವರಿಸಿದ್ದು ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರ ಬದುಕಿನಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ರಾಜ್ಯ ಸರಕಾರ ಸಹಕಾರಿ ಬ್ಯಾಂಕ್ ಗಳಲ್ಲಿರುವ ಪ್ರತೀ ರೈತನ 50,000ರೂ. ಸಾಲ ಮನ್ನಾ ಮಾಡಿದೆ. ಇದರಿಂದ ರೈತರು ತುಸು ನೆಮ್ಮದಿಯ ಜೀವನ ನಡೆಸುವಂತಾಗಿದೆ. ಇದೀಗ ಬಿಜೆಪಿ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿರುವ ರೈತರ ಸಾಲ ಮನ್ನಾ ಮಾಡಲು ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಬೇಕೆಂದು ಅವರು ಪ್ರತಿಪಾದಿಸಿದರು.
ಬಿಜೆಪಿ ಈಗ ಕೇಂದ್ರದ ಮೇಲೆ ಒತ್ತಡ ಹೇರುವ ಬದಲು ಮೌನಕ್ಕೆ ಶರಣಾಗಿರುವುದು ಬಿಜೆಪಿಗರ ನೈಜ ರೈತ ಕಾಳಜಿಯ ಬಗ್ಗೆ ಸಂಶಯ ಮೂಡಿಸುತ್ತಿದೆ ಎಂದು ಕಾಂಗ್ರೆಸ್ ವಕ್ತಾರ ಭಾಸ್ಕರ್‌ರಾವ್ ಕಿದಿಯೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.