×
Ad

ಆರೋಪಿ ಪ್ರಶಾಂತ್ ಪತ್ನಿಯಿಂದ ಹೇಬಿಯಸ್ ಕಾರ್ಪಸ್ ಅರ್ಜಿ ವಾಪಸ್

Update: 2017-07-19 21:24 IST

ಬೆಂಗಳೂರು, ಜು.19: ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಅವರ ಆಪ್ತ ಸಹಾಯಕ ವಿನಯ್ ಅಪಹರಣ ಪ್ರಕರಣದ ಆರೋಪಿ ಪ್ರಶಾಂತನನ್ನು ಪೊಲೀಸರು ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಆರೋಪಿಸಿ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಪ್ರಶಾಂತ್ ಪತ್ನಿ ಅರ್ಚನಾ ಹಿಂಪಡೆದಿದ್ದಾರೆ. ಈ ಹಿಂದೆ ಹೇಬಿಯಸ್ ಕಾರ್ಪಸ್ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ರವಿ ಮಳೀಮಠ ಹಾಗೂ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಅವರಿದ್ದ ವಿಭಾಗೀಯ ನ್ಯಾಯಪೀಠ, ಪ್ರಶಾಂತ್ ಬಂಧನಕ್ಕೆ ತೆಗೆದುಕೊಂಡಿರುವ ಕ್ರಮಗಳ ಕುರಿತಂತೆ ವರದಿ ಸಲ್ಲಿಸುವಂತೆ ಎಚ್‌ಎಎಲ್ ಪೊಲೀಸರಿಗೆ ಸೂಚಿಸಿತ್ತು.

ಬುಧವಾರ ಅರ್ಜಿ ವಿಚಾರಣೆ ವೇಳೆ ಸರಕಾರ ಪರ ವಕೀಲರು ಹಾಜರಾಗಿ ನ್ಯಾಯಪೀಠಕ್ಕೆ ವರದಿ ಸಲ್ಲಿಸಿ, ಪ್ರಶಾಂತ್ ಕುಮಾರ್‌ನನ್ನು ಪತ್ತೆಗೆ ವಿಶೇಷ ತನಿಖಾ ತಂಡ ರಚಿಸಲಾಗಿತ್ತು. ವೈಟ್ ಫೀಲ್ಡ್ ಪೊಲೀಸರು ಆರೋಪಿಯನ್ನು ಜು.13 ರಂದು ಮೈಸೂರಿನ ಚಾಮುಂಡಿ ಬೆಟ್ಟದ ಬಳಿ ಬಂಧಿಸಿದ್ದರು. ಈತನ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದ್ದು, ಅಧೀನ ನ್ಯಾಯಾಲಯಕ್ಕೆ ಹಾಜರು ಪಡಿಸಿ ಹೆಚ್ಚಿನ ತನಿಖೆಗೆ ಪೊಲೀಸರ ವಶಕ್ಕೆ ಪಡೆಯಲಾಗಿದೆ ಎಂದು ವಿವರಿಸಿದರು.

ಸರಕಾರ ಪರ ವಕೀಲರ ವಾದ ದಾಖಲಿಸಿಕೊಂಡ ನ್ಯಾಯಮೂರ್ತಿ ರವಿ ಮಳಿಮಠ ಹಾಗೂ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಅವರಿದ್ದ ವಿಭಾಗೀಯ ನ್ಯಾಯಪೀಠವು, ಪ್ರಶಾಂತ್ ಪೊಲೀಸರ ವಶದಲ್ಲಿದ್ದು, ಅರ್ಜಿ ವಿಚಾರಣೆ ಅವಶ್ಯಕತೆ ಇಲ್ಲ ಎಂದು ಅರ್ಜಿಯನ್ನು ಹಿಂಪಡೆಯಲು ಅರ್ಜಿದಾರರಿಗೆ ಸೂಚಿಸಿದರು.

ಈ ವೇಳೆ ಅರ್ಜಿದಾರರ ಪರ ವಕೀಲರಾದ ಕೆಂಪರಾಜು ವಾದ ಮಂಡಿಸಿ, ಪ್ರಶಾಂತ್ ಈಗ ಪೊಲೀಸರ ವಶದಲ್ಲಿದ್ದಾರೆ. ಪೊಲೀಸರು ಎನ್‌ಕೌಂಟರ್ ಮಾಡುವ ಸಾಧ್ಯತೆ ಇದೆ. ಹಾಗಾಗಿ ನ್ಯಾಯಾಂಗ ಬಂಧನಕ್ಕೆ ನೀಡುವವರೆಗೂ ಅರ್ಜಿ ವಿಚಾರಣೆ ಬಾಕಿ ಇರಲಿ ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ ಯಾವುದೇ ತೊಂದರೆಯಾಗುವುದಿಲ್ಲ ಎಂದು ತಿಳಿಸಿ ಅರ್ಜಿಯನ್ನು ವಜಾಗೊಳಿಸಿತು.

ಪ್ರಕರಣದ ಹಿನ್ನಲೆ: ಕೆ.ಎಸ್.ಈಶ್ವರಪ್ಪ ಅವರ ಆಪ್ತ ಸಹಾಯಕ ವಿನಯ್ ಮೇಲೆ ಹಲ್ಲೆ ನಡೆಸಿ ಅವರನ್ನು ಅಪಹರಿಸಲು ಯತ್ನಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಎಚ್‌ಎಎಲ್ ಠಾಣೆ ಪೊಲೀಸರು ಜು. 6 ರಂದು ಪ್ರಶಾಂತ್‌ನನ್ನು ಕೋಲಾರದ ಚಿತ್ರಮಂದಿರದಲ್ಲಿ ಬಂಧಿಸಿದ್ದರು. ನಂತರ ಪ್ರಕರಣವೊಂದರ ವಿಚಾರಣೆಗೆ ಪ್ರಶಾಂತ್ ಜು.9ರಂದು ಕೆ.ಆರ್.ಪುರ ಐಟಿಐ ಮೈದಾನದ ಬಳಿ ತೆರಳಿದಾಗ, ನಮ್ಮ ವಶದಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದರು.

ಹೀಗಾಗಿ, ನನ್ನ ಪತಿಯನ್ನು ಪೊಲೀಸರು ಅಕ್ರಮ ಬಂಧನದಲ್ಲಿಟ್ಟುಕೊಂಡಿದ್ದಾರೆ ಎಂದು ಆರೋಪಿಸಿ ಪತ್ನಿ ಅರ್ಚನಾ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ ಪೊಲೀಸರು ಆರೋಪಿ ಪ್ರಶಾಂತ್‌ನನ್ನು ಬಂಧಿಸಲು ತೆಗೆದುಕೊಂಡಿರುವ ಕ್ರಮಗಳ ಕುರಿತು ವರದಿ ಸಲ್ಲಿಸುವಂತೆ ಸೂಚಿಸಿತ್ತು. ಆದರಿಂದ ಪೊಲೀಸ್ ಹೈಕೋರ್ಟ್‌ಗೆ ವರದಿ ಸಲ್ಲಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News