×
Ad

ಕಸ ವಿಲೇವಾರಿ- ಪೌರ ಕಾರ್ಮಿಕರ ವಿವರ ಸಲ್ಲಿಸಲು ಬಿಬಿಎಂಪಿಗೆ ಹೈಕೋರ್ಟ್ ನಿರ್ದೇಶನ

Update: 2017-07-19 21:27 IST

ಬೆಂಗಳೂರು, ಜು.19: ಬಿಬಿಎಂಪಿ ವ್ಯಾಪ್ತಿಯಲ್ಲಿ ಕಸ ವಿಲೇವಾರಿ ಕಾರ್ಯದಲ್ಲಿ ತೊಡಗಿರುವ ಪೌರ ಕಾರ್ಮಿಕರ ಸಂಪೂರ್ಣ ವಿವರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ಸಲ್ಲಿಸುವಂತೆ ಬಿಬಿಎಂಪಿ ವಿಶೇಷ ಆಯುಕ್ತರಿಗೆ ಹೈಕೋರ್ಟ್ ನಿರ್ದೇಶಿಸಿದೆ. ಕಸ ವಿಲೇವಾರಿಯಲ್ಲಿ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಯಂತ್ ಪಟೇಲ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿತು.

ಅರ್ಜಿದಾರರ ಪರ ವಾದಿಸಿದ ವಕೀಲರು, ಬಿಬಿಎಂಪಿಯಲ್ಲಿ ನಕಲಿ ಪೌರಕಾರ್ಮಿಕರು ಹೆಚ್ಚಾಗಿದ್ದು, ಇದರಿಂದ, ಅಸಲಿ ಪೌರಕಾರ್ಮಿಕರಿಗೆ ಹೊಡೆತ ಬೀಳುತ್ತಿದೆ ಎಂದು ಪೀಠಕ್ಕೆ ತಿಳಿಸಿದರು.
 ಬಿಬಿಎಂಪಿ ಪರ ವಾದಿಸಿದ ವಕೀಲರು, ನಕಲಿ ಪೌರಕಾರ್ಮಿಕರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಹಾಗೂ ವಾರ್ಡ್ ಕಮಿಟಿ ರಚನೆಗೆ ಸಂಬಂಧಪಟ್ಟಂತೆ ಆಕ್ಷೇಪಣೆಗಳು ಇದ್ದರೆ ಅರ್ಜಿ ಸಲ್ಲಿಸಬಹುದು ಎಂದು ಪೀಠಕ್ಕೆ ತಿಳಿಸಿದರು. ಹೈಕೋರ್ಟ್‌ಗೆ ಬಿಬಿಎಂಪಿ ವಿಶೇಷ ಆಯುಕ್ತ ಸರ್ಫರಾಜ್‌ಖಾನ್ ಹಾಜರಾಗಿದ್ದರು. ವಕೀಲರ ವಾದ ಪ್ರತಿವಾದ ಆಲಿಸಿದ ನ್ಯಾಯಪೀಠವು ಅಸಲಿ ಪೌರಕಾರ್ಮಿಕರ ಸಂಪೂರ್ಣ ವಿವರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ನೀಡಬೇಕು ಎಂದು ಆದೇಶಿಸಿ ವಿಚಾರಣೆಯನ್ನು ಆಗಷ್ಟ್ 9ಕ್ಕೆ ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News