ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರಕ್ಕೆ ದೇವೇಗೌಡ ಆಗ್ರಹ
ಬೆಂಗಳೂರು, ಜೂ.20: ಲೋಕಸಭೆ ಮತ್ತು ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಕಲ್ಪಿಸಲು ಸಂವಿಧಾನಕ್ಕೆ ತಿದ್ದುಪಡಿ ತರುವ ಅಗತ್ಯವಿದ್ದು, ಕೇಂದ್ರದಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿರುವ ಬಿಜೆಪಿ ನೇತೃತ್ವದ ಸರಕಾರಕ್ಕೆ ಈ ಐತಿಹಾಸಿಕ ನಿರ್ಣಯ ಕೈಗೊಳ್ಳಲು ಸಾಧ್ಯವಿದೆ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಪ್ರತಿಪಾದಿಸಿದ್ದಾರೆ.
ಗುರುವಾರ ನಗರದ ಅರಮನೆ ಮೈದಾನದಲ್ಲಿ ಏರ್ಪಡಿಸಿದ್ದ ಜೆಡಿಎಸ್ ಮಹಿಳಾ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, 13 ಪಕ್ಷಗಳ ಮೈತ್ರಿಕೂಟದ ಬೆಂಬಲದೊಂದಿಗೆ ನಾನು ಪ್ರಧಾನಿಯಾಗಿದ್ದಾಗ ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿಗೊಳಿಸಿದ್ದೆ ಎಂದು ಸ್ಮರಿಸಿಕೊಂಡರು.
ರಾಜ್ಯ ಸಭೆಯಲ್ಲಿ ಅಂಗೀಕಾರಗೊಂಡಿದ್ದ ಈ ಮಸೂದೆಯು ಲೋಕಸಭೆಯಲ್ಲಿ ಅಂಗೀಕಾರವಾಗಲಿಲ್ಲ. ಕೇಂದ್ರ ಸರಕಾರ ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿಗೆ ತಂದರೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ 84 ಸ್ಥಾನಗಳು ಮಹಿಳೆಯರಿಗೆ ಸಿಗುತ್ತದೆ ಎಂದು ದೇವೇಗೌಡ ಹೇಳಿದರು.
ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿಯನ್ನು ಕಲ್ಪಿಸಲು ಕೇಂದ್ರ ಸರಕಾರ ಮುಂದಾದರೆ, ಕಾಂಗ್ರೆಸ್, ಎಡಪಕ್ಷಗಳು ಸೇರಿದಂತೆ ಯಾರೊಬ್ಬರೂ ವಿರೋಧಿಸುವುದಿಲ್ಲ. ಲೋಕಸಭೆಯಲ್ಲಿ ಸ್ಪಷ್ಟ ಬಹುಮತ ಹೊಂದಿರುವ ಬಿಜೆಪಿ ಈ ಕಾರ್ಯಕ್ಕೆ ಮುಂದಾಗಬೇಕು ಎಂದು ಕೇಂದ್ರ ಸರಕಾರಕ್ಕೆ ಪತ್ರ ಬರೆದಿದ್ದೇನೆ ಎಂದು ದೇವೇಗೌಡ ತಿಳಿಸಿದರು. ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರು ಅಧಿಕಾರಕ್ಕೆ ಏರುವುದನ್ನು ಅವರ ಗಂಡಂದಿರೇ ವಿರೋಧಿಸುತ್ತಿದ್ದರು. ಈ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡೆ ನಾನು ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿಗೊಳಿಸಲು ಮುಂದಾಗಿದ್ದೆ. ಆದರೆ, ದುರಾದೃಷ್ಟವಶಾತ್ ಸಾಧ್ಯವಾಗಲಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.
ಕೇಂದ್ರ ಸರಕಾರಕ್ಕೆ ಈ ಐತಿಹಾಸಿಕ ನಿರ್ಣಯ ಕೈಗೊಳ್ಳಲು ಉತ್ತಮ ಅವಕಾಶವಿದೆ. ಮೀಸಲಾತಿ ಜಾರಿಯಿಂದಾಗಿ ಮಹಿಳೆಯರನ್ನು ಸಾಮಾಜಿಕ ಹಾಗೂ ರಾಜಕೀಯ ವಾಗಿ ಮತ್ತಷ್ಟು ಸದೃಢಗೊಳಿಸಬಹುದಾಗಿದೆ. ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿ ಶೇ.33ರಷ್ಟು ಮೀಸಲಾತಿ ಹಾಗೂ ಉದ್ಯೋಗದಲ್ಲಿ ಶೇ.30ರಷ್ಟು ಮೀಸಲಾತಿಯನ್ನು ಜಾರಿಗೆ ತಂದಿದ್ದೆ ಎಂದು ದೇವೇಗೌಡ ಹೇಳಿದರು.
ನಿರ್ಣಯಗಳು: ಶಾಸನ ಸಭೆಗಳಲ್ಲಿ ಶೇ.33ರಷ್ಟು ಮಹಿಳಾ ಮೀಸಲಾತಿ ಜಾರಿಗೆ ತರುವ ವಿಧೇಯಕವನ್ನು ಸಂಸತ್ತಿನಲ್ಲಿ ಮಂಡಿಸಬೇಕು. ಮುಂಬರುವ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲೆ ಈ ಮೀಸಲಾತಿ ಜಾರಿಗೆ ತರಬೇಕು. ಮಹಿಳಾ ಸಬಲೀಕರಣದ ಯೋಜನೆಗಳನ್ನು ಕೇಂದ್ರ ಮತ್ತು ರಾಜ್ಯ ಸರಕಾರಗಳು ಜಾರಿಗೆ ತರಬೇಕು. ನ್ಯಾಯಾಂಗ ವ್ಯವಸ್ಥೆಯಲ್ಲಿ, ನ್ಯಾಯಾಧೀಶರ ನೇಮಕದಲ್ಲಿ ಮಹಿಳೆಯರಿಗೆ ಹೆಚ್ಚಿನ ಅವಕಾಶ ದೊರಕಿಸಬೇಕು.
ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟಲು ಪ್ರತಿ ಉಪವಿಭಾಗ ಮಟ್ಟದಲ್ಲಿ ಮಹಿಳಾ ಪೊಲೀಸ್ ಠಾಣೆ ಹಾಗೂ ನ್ಯಾಯಾಲಯಗಳನ್ನು ಸ್ಥಾಪಿಸಬೇಕು. ಅರೆ ಸರಕಾರಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಕಡ್ಡಾಯವಾಗಿ ಹೆರಿಗೆ ರಜೆ ಸೌಲಭ್ಯವನ್ನು ವೇತನ ಸಹಿತ ನೀಡಲು ಕಾನೂನು ಜಾರಿಗೆ ತರಬೇಕು.
ಮಹಿಳಾ ಕೃಷಿ ಕಾರ್ಮಿಕರಿಗೆ ವಿಶೇಷ ಆರೋಗ್ಯ ಯೋಜನೆ, ಅಂಗನವಾಡಿ ಕಾರ್ಯಕರ್ತೆಯರಿಗೆ ಇತರೆ ರಾಜ್ಯಗಳಲ್ಲಿ ನೀಡುತ್ತಿರುವ ವೇತನಕ್ಕೆ ಅನುಗುಣವಾಗಿ ಹೆಚ್ಚುವರಿ ವೇತನ ನೀಡುವುದು ಸೇರಿದಂತೆ ಇನ್ನಿತರ ಮಹತ್ವದ ನಿರ್ಣಯಗಳನ್ನು ಸಮಾವೇಶದಲ್ಲಿ ಒಕ್ಕೊರಲಿನಿಂದ ಕೈಗೊಳ್ಳಲಾಯಿತು.
ಸಮಾವೇಶದ ಅಧ್ಯಕ್ಷತೆಯನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವಹಿಸಿದ್ದರು. ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಶೀಲಾ ನಾಯಕ್, ಮಾಜಿ ಸಚಿವೆ ಬಿ.ಟಿ.ಲಲಿತಾನಾಯಕ್, ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ, ಶಾಸಕರಾದ ಕೆ.ಗೋಪಾಲಯ್ಯ, ಎನ್.ಎಚ್.ಕೋನರೆಡ್ಡಿ, ಮಾಜಿ ಉಪಮೇಯರ್ ಹೇಮಲತಾ ಗೋಪಾಲಯ್ಯ ಸೇರಿದಂತೆ ಇನ್ನಿತರ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.