ಮಕ್ಕಳ ಹಕ್ಕುಗಳ ರಕ್ಷಣೆಗೆ ಆಂದೋಲನ ಅಗತ್ಯ: ಕೈಲಾಸ್ ಸತ್ಯಾರ್ಥಿ

Update: 2017-07-21 13:27 GMT

ಬೆಂಗಳೂರು, ಜು.21: ದೇಶದಲ್ಲಿ ಮಕ್ಕಳ ಹಕ್ಕಗಳ ರಕ್ಷಣೆ, ಉತ್ತಮ ಶಿಕ್ಷಣ ಸೇರಿದಂತೆ ಮಕ್ಕಳನ್ನು ಸರ್ವತೋಮುಖವಾಗಿ ಬೆಳೆಸುವ ನಿಟ್ಟಿನಲ್ಲಿ ಪ್ರಬಲ ಆಂದೋಲನದ ಅಗತ್ಯವಿದೆ ಎಂದು ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ ಕೈಲಾಸ್ ಸತ್ಯಾರ್ಥಿ ಅಭಿಪ್ರಾಯಿಸಿದ್ದಾರೆ.

ಶುಕ್ರವಾರ ಮುಖ್ಯಮಂತ್ರಿ ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರಕಾರ ಹಾಗೂ ಪೋಷಕರು ತಮ್ಮ ಮಕ್ಕಳಿಗೆ ಸೂಕ್ತ ಭದ್ರತೆ ನೀಡುವ ನಿಟ್ಟಿನಲ್ಲಿ ಹೆಚ್ಚಿನ ಗಮನವಹಿಸಬೇಕಾಗಿದೆ ಎಂದು ತಿಳಿಸಿದರು.
ನಾನಾ ಕಾರಣಗಳಿಂದ ಮಕ್ಕಳ ಮೇಲೆ ದೌರ್ಜನ್ಯಗಳು ನಿರಂತರವಾಗಿ ನಡೆಯುತ್ತಿವೆ. ಮಕ್ಕಳಿಗೆ ಹಿಂಸೆ ನೀಡುವ ಮೂಲಕವೇ ತಮ್ಮ ಅಧೀನದಲ್ಲಿಟ್ಟುಕೊಳ್ಳಲು ಕೆಲವು ಭೂಗತವಾದಿಗಳು ಪ್ರಯತ್ನಿಸುತ್ತಿದ್ದಾರೆ. ಇದನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯ ಹಾಗೂ ಕೇಂದ್ರ ಸರಕಾರ ಸೂಕ್ತ ಯೋಜನೆಗಳನ್ನು ರೂಪಿಸಬೇಕು ಎಂದು ಅವರು ಹೇಳಿದರು.

ಮಕ್ಕಳು ಸೇರಿದಂತೆ ಮಹಿಳೆಯರ ಅಪಹರಣ, ಅವರ ಮೇಲೆ ನಡೆಯುವ ಅತ್ಯಾಚಾರ ಪ್ರಕರಣಗಳು ತಡೆಯಬೇಕಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಚಿಂತನೆ ಮಾಡಬೇಕು. ಮಕ್ಕಳ ಹಕ್ಕು ರಕ್ಷಣೆಗೆ ಹತ್ತು ವರ್ಷಗಳ ಹಿಂದೆ ಯೂನಿಸೆಫ್ ಒಂದು ವರದಿ ನೀಡಿದ್ದು, ಅದನ್ನಾಧರಿಸಿ ಮಕ್ಕಳು ಸ್ವಚ್ಛಂದ ವಾತಾವರಣದಲ್ಲಿ ಬೆಳೆಯಲು ಅವಕಾಶಗಳನ್ನು ಕಲ್ಪಿಸುವುದು ಅಗತ್ಯ ಎಂದು ಅವರು ತಿಳಿಸಿದರು.

ಸಾಮಾಜಿಕ ನ್ಯಾಯ ಎನ್ನುವುದು ಕೇವಲ ಭಾರತಕ್ಕೆ ಮಾತ್ರ ಸೀಮಿತವಾಗದೆ, ಜಾಗತಿಕ ಸಮಸ್ಯೆಯಾಗಿ ಪರಿಣಮಿಸಿದೆ. ಈ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ನಡೆಯುತ್ತಿರುವ ಡಾ.ಬಿ.ಆರ್.ಅಂಬೇಡ್ಕರ್ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಈ ಕುರಿತು ವ್ಯಾಪಕ ಚರ್ಚೆ ನಡೆಯಲಿದ್ದು, ಸೂಕ್ತ ಪರಿಹಾರೋಪಾಯಗಳು ದೊರಕುವ ನಿರೀಕ್ಷೆಯಿದೆ ಎಂದು ಅವರು ಹೇಳಿದರು.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News