×
Ad

ಕನ್ನಡ ನಾಡು, ನುಡಿಯ ಮೇಲಿನ ಗೌರವ ಕಡಿಮೆಯಾಗುತ್ತಿದೆ: ಕೆ.ಜಿ.ಬೋಪಯ್ಯ ವಿಷಾದ

Update: 2017-07-22 20:22 IST

ಮಡಿಕೇರಿ, ಜು.22: ಪ್ರಸ್ತುತ ದಿನಗಳಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಬೆಳೆದಂತೆ ಕನ್ನಡಿಗರಿಗೆ ಕನ್ನಡ ನಾಡು, ನುಡಿಯ ಮೇಲಿನ ಅಭಿಮಾನ ಕಡಿಮೆಯಾಗುತ್ತಿದ್ದು, ವಿದ್ಯಾರ್ಥಿ ಜೀವನದಿಂದಲೇ ನಾಡು, ನುಡಿಯ ಬಗ್ಗೆ ಅಭಿಮಾನ ಮೂಡಿಸುವ ಅಗತ್ಯವಿದೆ ಎಂದು ವಿರಾಜಪೇಟೆ ಕ್ಷೇತ್ರದ ಶಾಸಕರಾದ ಕೆ.ಜಿ.ಬೋಪಯ್ಯ ಅಭಿಪ್ರಾಯಪಟ್ಟಿದ್ದಾರೆ.

ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ನಡೆದ ಕೊಡಗು ಅಪರಂಜಿ ಪ್ರಶಸ್ತಿ ಹಾಗೂ ಕೊಡಗು ಮಯೂರ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ಹತ್ತನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕನ್ನಡ ಭಾಷಾ ವಿಷಯದಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ನಗರ ಪ್ರದೇಶಗಳಲ್ಲಿ ಕನ್ನಡವನ್ನು ಎನ್ನಡ ಎನ್ನುವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಕನ್ನಡ ತನ್ನ ಮೌಲ್ಯವನ್ನು ಕಳೆದುಕೊಳ್ಳುತ್ತಿದೆ ಎಂದು ಬೋಪಯ್ಯ ಬೇಸರ ವ್ಯಕ್ತಪಡಿಸಿದರು. ಕರ್ನಾಟಕದಲ್ಲಿ ಕನ್ನಡಕ್ಕಾಗಿ ಹೋರಾಟ ನಡೆಯುತ್ತಿದ್ದು, ಹೋರಾಟಗಳಿಂದ ಮಾತ್ರ ಕನ್ನಡವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ. ಪ್ರತಿಯೊಬ್ಬರು ತಮ್ಮ ಮಾತೃಭಾಷೆ ಕನ್ನಡ ಉಳಿಸಿ ಬೆಳೆಸುವ ಪಣ ತೊಡಬೇಕೆಂದರು. ರಾಜ್ಯದಲ್ಲಿ ಕನ್ನಡ ಭಾಷೆಗಿಂತ ಇತರ ಭಾಷೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಶುದ್ಧ ಕನ್ನಡವನ್ನು ಮಾತನಾಡುವುದು ಬಹಳ ಕಷ್ಟ ಎನ್ನುವಂತೆ ಯುವ ಸಮೂಹ ಭಾವಿಸುತ್ತಿದೆ. ಆದರೆ ನೆರೆಯ ತಮಿಳು ನಾಡು ಪ್ರದೇಶಗಳಲ್ಲಿ ತಮಿಳು ಭಾಷೆಯನ್ನು ಹೊರತು ಪಡಿಸಿ ಬೇರೆ ಯಾವ ಭಾಷೆಯನ್ನೂ ಮಾತನಾಡುವುದಿಲ್ಲ. ಕನ್ನಡಿಗರು ಸ್ವಾಭಿಮಾನಿಗಳಾದರೂ ನಾಡು, ನುಡಿಯ ಬಗ್ಗೆ ಮತ್ತಷ್ಟು ಅಭಿಮಾನ ಹೆಚ್ಚಾಗಬೇಕೆಂದು ಕೆ.ಜಿ.ಬೋಪಯ್ಯ ಕರೆ ನೀಡಿದರು.

ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಬಿ.ಎಸ್.ಲೋಕೇಶ್‌ ಸಾಗರ್, ಕನ್ನಡಕ್ಕೆ ಹೆಚ್ಚು ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಪ್ರತಿವರ್ಷ ಕನ್ನಡದ ಕಾರ್ಯಕ್ರಮಗಳನ್ನು ಹೆಚ್ಚು ಹೆಚ್ಚು ಆಯೋಜಿಸಲಾಗುತ್ತಿದೆ. ಕನ್ನಡ ಭಾಷಾ ಬೆಳವಣಿಗೆಯ ನಿಟ್ಟಿನಲ್ಲಿ  ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಿದ್ದಲ್ಲಿ ಕನ್ನಡಾಭಿಮಾನವನ್ನು ಹೆಚ್ಚಿಸಬಹುದೆಂದು ಅಭಿಪ್ರಾಯಪಟ್ಟರು. ಕೊಡಗಿನ ಮಹಿಳೆಯರು ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆ ಮಾಡುತ್ತಿರುವುದು ಶ್ಲಾಘನೀಯವೆಂದರು.

ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಅಜ್ಜಮಾಡ ರಮೇಶ್ ಕುಟ್ಟಪ್ಪ ಮಾತನಾಡಿ, ಒಂದು ಭಾಷೆಯನ್ನು ನಾವು ಅಂದುಕೊಂಡ ಹಾಗೆ ಬಳಸಿಕೊಳ್ಳಲು ಸಾಧ್ಯವಿಲ್ಲ. ಕನ್ನಡ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉದ್ಯೋಗ ಕಲ್ಪಿಸಿಕೊಟ್ಟಲ್ಲಿ ಕನ್ನಡದ ಏಳಿಗೆ ಹೆಚ್ಚಾಗಬಹುದು ಎಂದು ಅಭಿಪ್ರಾಯಪಟ್ಟರು.

ಸಮಾಜಕ್ಕೆ ಒಳ್ಳೆಯ ವಿಷಯಗಳನ್ನು ತಿಳಿಸಿಕೊಡುವ ನಿಟ್ಟಿನಲ್ಲಿ ಕನ್ನಡ ಕಾರ್ಯಕ್ರಮಗಳು ಹೆಚ್ಚಾಗಬೇಕು. ನಕರಾತ್ಮಕ ವಿಚಾರಗಳಿಗಿಂತ ಒಳ್ಳೆಯ ವಿಚಾರಗಳ ಬಗ್ಗೆ ಚಿಂತನೆ ಹೆಚ್ಚಾದಲ್ಲಿ ವಿದ್ಯಾರ್ಥಿಗಳ ಪ್ರಗತಿ ಸಾಧ್ಯವೆಂದರು.  ಕನ್ನಡ ಭಾಷಾ ವಿಷಯದಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಶುದ್ಧ ಕನ್ನಡ ಭಾಷೆ ಮಾತನಾಡುವ ಸ್ಪರ್ಧಾ ವಿಜೇತರಿಗೆ 2016-17ನೇ ಸಾಲಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಶುದ್ಧ ಕನ್ನಡ ಬರೆಯುವ ಸ್ಪರ್ಧೆಯಲ್ಲಿ ವಿಜೇತರಿಗೆ ಕೊಡಗು ಅಪರಂಜಿ ಪ್ರಶಸ್ತಿ ಹಾಗೂ ಕೊಡಗು ಮಯೂರ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಇದೇ ಸಂದರ್ಭ ಮಹಿಳಾ ಲೇಖಕರು ರಚಿಸಿರುವ ಕಥಾ ಗುಚ್ಛ ಪುಸ್ತಕವನ್ನು ಗಣ್ಯರು ಬಿಡುಗಡೆ ಮಾಡಿದರು.
   

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News