ಬೆಂಗಳೂರು ವ್ಯಾಪ್ತಿ ಕೆರೆಗಳು ಸಣ್ಣ ನೀರಾವರಿ ಇಲಾಖೆಯಡಿಗೆ: ಟಿ.ಬಿ.ಜಯಚಂದ್ರ
ಬೆಂಗಳೂರು, ಜು.26: ಬಿಬಿಎಂಪಿ, ಬಿಡಿಎ ಹಾಗೂ ಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿರುವ ಕೆರೆಗಳನ್ನು ಸಣ್ಣ ನೀರಾವರಿ ಇಲಾಖೆಯಡಿ ತರಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ.
ಬುಧವಾರ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕೆರೆ ಅಭಿವೃದ್ದಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಬೆಂಗಳೂರು ಸುತ್ತಮುತ್ತಲಿನ ಕೆರೆಗಳ ಸ್ಥಿತಿಗತಿಗಳ ಕುರಿತು ನಡೆದ ಸಭೆಯ ಬಳಿಕ ಅವರು ಮಾತನಾಡಿದರು.
ಕೆರೆಗಳ ಸಮಗ್ರ ಅಭಿವೃದ್ಧಿ ಹಾಗೂ ಕೆರೆಗಳ ಒತ್ತುವರಿಯನ್ನು ತಡೆಗಟ್ಟುವುದಕ್ಕೆ ಬೆಂಗಳೂರು ವ್ಯಾಪ್ತಿಗೆ ಬರುವ ಎಲ್ಲ ಕೆರೆಗಳನ್ನು ಒಂದು ಇಲಾಖೆಯಡಿಗೆ ತರುವ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ನಡೆದ ಸಭೆಯಲ್ಲಿ ಬೇರೆ, ಬೇರೆ ಇಲಾಖೆಯಡಿಯಿರುವ ಕೆರೆಗಳನ್ನು ಸಣ್ಣ ನೀರಾವರಿ ಇಲಾಖೆಯಡಿಗೆ ತರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ಸೂಚಿಸಿದ್ದಾರೆ. ಇದರಿಂದ ಕೆರೆಗಳನ್ನು ಪರಿಣಾಮಕಾರಿಯಾಗಿ ಅಭಿವೃದ್ಧಿ ಪಡಿಸಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.
ರಾಜ್ಯದಲ್ಲಿ ಐದು ವರ್ಷಕ್ಕೊಮ್ಮೆ ಕೆರೆಗಳ ಸಮೀಕ್ಷೆ ನಡೆಯುತ್ತದೆ. ಈ ಅಂಕಿ ಅಂಶಗಳನ್ನು ಗಮನಿಸಿದರೆ ಕಳೆದ 15-20 ವರ್ಷಗಳಲ್ಲಿ ಕೆರೆಗಳ ವಿಸ್ತೀರ್ಣ ಹಾಗೂ ಸಂಖ್ಯೆಯಲ್ಲಿ ಇಳಿಕೆ ಕಂಡು ಬಂದಿದೆ. ಇವೆಲ್ಲವುಗಳನ್ನು ಗಮನಿಸಿ ಕೆರೆಗಳ ಉಳಿವಿಗೆ ಪರಿಣಾಮಕಾರಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಎಲ್ಲ ಕೆರೆಗಳನ್ನು ಒಂದೇ ಇಲಾಖೆಯಡೆಗೆ ತರಲಾಗುತ್ತಿದೆ ಎಂದು ತಿಳಿಸಿದರು.