ಆಕ್ಷೇಪಣೆ ಸಲ್ಲಿಸಲು ಎಸ್‌ಐಟಿಗೆ ಹೈಕೋರ್ಟ್ ನೋಟಿಸ್
ಬೆಂಗಳೂರು, ಜು.26: ಮೈಸೂರು ಮಿನರಲ್ಸ್ ಲಿಮಿಟೆಡ್‌ನ (ಎಂಎಂಎಲ್) ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಅವಧಿಯಲ್ಲಿ ಅವ್ಯವಹಾರ ನಡೆಸಿದ್ದಾರೆಂಬ ಆರೋಪದ ಸಂಬಂಧ ಬಂಧನದ ಭೀತಿ ಎದುರಿಸುತ್ತಿರುವ ನಿವೃತ್ತ ಐಎಎಸ್ ಅಧಿಕಾರಿ ಡಿ.ಎಸ್.ಅಶ್ವಥ್ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಪ್ರಕರಣದ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಡಿ.ಎಸ್.ಅಶ್ವಥ್ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಮಂಗಳವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರತ್ನಕಲಾ ಅವರಿದ್ದ ಪೀಠ, ಅರ್ಜಿಯ ಸಂಬಂಧ ಆಕ್ಷೇಪಣೆ ಸಲ್ಲಿಸುವಂತೆ ಲೋಕಾಯುಕ್ತ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಆ.8ಕ್ಕೆ ಮುಂದೂಡಿತು.
ಪ್ರಕರಣವೇನು: 2003-2005ರ ಅವಧಿಯಲ್ಲಿ ಎಂಎಂಎಲ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಡಿ.ಎಸ್.ಅಶ್ವಥ್, ಅವ್ಯವಹಾರ ನಡೆಸಿ 96 ಕೋಟಿ ರೂ. ನಷ್ಟ ಉಂಟು ಮಾಡಿದ್ದಾರೆಂಬ ಆರೋಪವಿದೆ. ಈ ಸಂಬಂಧ 2017ರ ಎ.5ರಂದು ಅಶ್ವಥ್ ವಿರುದ್ಧ ಎ್ಐಆರ್ ದಾಖಲಿಸಿದ್ದ ಎಸ್‌ಐಟಿ ಪೊಲೀಸರು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದರು.
ಬಂಧನದ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಅಧೀನ ನ್ಯಾಯಾಲಯ ವಜಾಗೊಳಿಸಿತ್ತು. ಇದೀಗ ನಿವೃತ್ತ ಐಎಎಸ್ ಅಧಿಕಾರಿ ಡಿ.ಎಸ್.ಅಶ್ವಥ್ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.